ಅಥವಾ

ಒಟ್ಟು 48 ಕಡೆಗಳಲ್ಲಿ , 23 ವಚನಕಾರರು , 39 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೆಳಗೇಳು ಭುವನಂಗಳಿಲ್ಲದಂದು, ಮೇಲೇಳು ಭುವನಂಗಳಿಲ್ಲದಂದು,_ ಅಂದು ಆದ ಗುರು, ಅಂದು ಆದ ಲಿಂಗ, ಅಂದು ಆದ ಜಂಗಮ, ಅಂದು ಆದ ಪ್ರಸಾದ, ಅಂದು ಆದ ಪಾದೋದಕ. ಇಂದಿನದಾವುದೂ ಹೊಸತಿಲ್ಲಯ್ಯಾ. ಶಶಿಧರಂಗೆ ವೃಷಭನಾಗಿದ್ದಂದು ಗುಹೇಶ್ವರನ ಶರಣ ಸಂಗನಬಸವಣ್ಣನಂದೆ ಸಾಹಿತ್ಯನು.
--------------
ಅಲ್ಲಮಪ್ರಭುದೇವರು
ಇತ(ದಿ?)ರ ಭ್ರಮಿತನು ಭಕ್ತನಲ್ಲ, ಲೋಕೋಪಚಾರಿ ಜಂಗಮವಲ್ಲ. ಹೇಳಿಹೆನು ಕೇಳಿರಣ್ಣಾ: ಜಂಗಮ ಪ್ರೇಮಿಯಾದರೆ ಭಸಿತ ರುದ್ರಾಕ್ಷೆ ಸಹ ಶಿವಸ್ವರೂಪ ಕಾಣುತ್ತ, ನಮಸ್ಕರಿಸಿ ಬಿಜಯಂ ಮಾಡಿಕೊಂಡು ಬಂದು ಮನಹರುಷದಲ್ಲಿ ಭೋಜನವ ಮಾಡಿಸೂದೀಗ ಭಕ್ತಂಗೆ ಲಕ್ಷಣ. ಕಾಡೊಳಗಿರಲಿ ಊರೊಳಗಿರಲಿ ಮಠದಲ್ಲಿರಲಿ ಮನೆಯಲ್ಲಿರಲಿ ಲಿಂಗವಂತರು ಕರೆಯಬಂದರೆ, ಹೋಗಬೇಕೆಂಬ ಅಭಿಲಾಷೆಯುಳ್ಳಡೆ, ತಾನಿದ್ದಲ್ಲಿ ತಾ ಮಾಡುವಂಥ ಅಷ್ಟವಿಧಾರ್ಚನೆ ಷೋಡಶೋಪಚಾರ ಲಿಂಗಕ್ರಿಯೆಗಳು ನಿತ್ಯನೇಮವು ಆದ ಬಳಿಕ ಮತ್ತೆ ತಾ ಹೋಗಿ ತನ್ನ ಗುಂಪ ತೋರದೆ, ಭಕ್ತರಾಶ್ರಯದಲ್ಲಿ ಭೋಜನವ ಮಾಡುವುದೀಗ ಜಂಗಮಕ್ಕೆ ಲಕ್ಷಣ. ಅಂತಲ್ಲದೆ ಗ್ರಹಸ್ಥಾಶ್ರಮದಲ್ಲಿ ಕ್ರಿಯೆ ಮಾಡಿದರೆ ಜಂಗಮಕ್ಕೆ ಹೇಳುವ ಅರಿವು ಕೊರಮಜೀವಿಯಂತಾಯಿತ್ತಾಗಿ_ ಇದು ಕಾರಣ ಲೋಕೋಪಚಾರಿಗಳಾಗಿ ಒಡಲ ಹೊರೆವವರ ನಮ್ಮ ಗುಹೇಶ್ವರಲಿಂಗವು ಬಲ್ಲನಾಗಿ ಅವರ ಒಲ್ಲನಯ್ಯಾ.
--------------
ಅಲ್ಲಮಪ್ರಭುದೇವರು
ಮನವೆ ಮಹ, ತನುವೆ ಪೃಥ್ವಿ, ಇನಿತಾವ ಎಡೆಯಲ್ಲಿ ಆತ್ಮನಿಹುದೋ ? ಸಾಗರದ ಹಾಗಲ್ಲ ಮೇಘದ ಪರ್ಯಾಯವಲ್ಲ ನೀನರಿಯದ ತೆರನಲ್ಲ ಆದ ಹಿರಿದುಮಾಡಿ ಒರೆಯಲೇಕಯ್ಯಾ ? ನಿಃಕಳಂಕಶಾಂತಮಲ್ಲಿಕಾರ್ಜುನ ದೇವರಿಲ್ಲವೆಂಬವಂಗೆ ಆತ್ಮನಿಂದೇನು ? ಸೌರಾಷ್ಟ್ರ ಸೋಮೇಶ್ವರಾ, ಮಾತಿಂಗೆ ಮರುಳಾದವರುಂಟೆ ?
--------------
ಆದಯ್ಯ
ವೀರನಾದಡೆ ವೈರಿಗಳ ಕಾಟ ಬಹಳವಯ್ಯಾ, ದಾನಶೂರನಾದಡೆ ಯಾಚಕರ ಗೋಳು ಬಹಳವಯ್ಯಾ. ಅತಿರೂಪನಾದಡೆ ಅಂಗನೆಯರ ಕಾಟ ವಿಶೇಷವಯ್ಯಾ. ಮೂರರಲ್ಲಿ ನಿಂತಡೆ ಮಲತ್ರಯಂಗಳ ಘೋರ ಹೆಚ್ಚಾಯಿತಯ್ಯಾ. ಅಂಗದಲ್ಲಿ ಲಿಂಗಸಂಬಂಧವಾಗಬಾರದು; ಆದ ಬಳಿಕ ವೀರನಾಗಿ ವಿಷಯಂಗಳನಳಿವುದು, ಬಹುಘೋರವು ಬಹುಘೋರವು ನೋಡಯ್ಯಾ, ಎಲೆ ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಹಾಹಾ ! ವೇದವೆ ತತ್ವವಾದಡೆ, ಮಾದಾರನ ಮನೆಯಲುಂಡನೊಬ್ಬ. ನಿಧಾನವುಳ್ಳ ಉಪಾಧ್ಯಾಯರಾರೂ ಇಲ್ಲದಾದಡೆ, ಶಾಸ್ತ್ರವೆ ತತ್ವವಾದಡೆ ಶಿವರಾತ್ರಿಯನೊಬ್ಬ ಬೇಡಂಗಿತ್ತುದನೊಬ್ಬ ಶ್ರೋತ್ರಿಯಂಗೀಯಲಾಗದೆ ? ಆಗಮವಿದ್ಥಿಯಲ್ಲಿ ಮಂತ್ರ ಮೂರುತಿಯೆಂಬ ಮಾತಂತಿರಲಿ. ಆದ ಕೇಳಲಾಗದು ಭ್ರಾಂತು ಬೇಡ. ಭಾವಮೂರುತಿ ಬಲ್ಲ ಪ್ರಮಾಣವಿದೆ. ಆ ಕುಲವೆಂದಡೆ ಹೊಕ್ಕ ಕಕ್ಕಯ್ಯಗಳ ಮನೆಯ. ಅಕ್ಕಟಾ, ನಿಮ್ಮ ತರ್ಕ ಮುಕ್ಕಾಯಿತ್ತು, ಲೋಕವರಿಯದೆ ? ಕಲ್ಲಲಿಟ್ಟು ಕಾಲಲೊದೆದಡೆ, ಅಲ್ಲಿ ಮೂರುತಿ ನುಡಿಯಿತ್ತಲ್ಲಯ್ಯಾ. ಬಲ್ವದನು ದ್ವಿಜರು ನೀವೆಲ್ಲರೂ ಹೇಳಿರೆ, ಸಲ್ಲದು, ನಿಮ್ಮ ವಾದ ನಿಲ್ಲಲಿ, ಬಲ್ಲಿದ ನಡೆದುದೇ ಬಟ್ಟೆ. ಮಹಾಲಿಂಗ ಕಲ್ಲೇಶ್ವರಾ, ಲಿಂಗಾಚಾರಿಗಳು ನಿಸ್ಸೀಮರಯ್ಯಾ.
--------------
ಹಾವಿನಹಾಳ ಕಲ್ಲಯ್ಯ
ತಾರಕಾಕೃತಿಯ ನಕಾರಪ್ರಣವದ ಆಧಾರಚಕ್ರದೊಳು ಕೆಂಪುಬಣ್ಣವಿರ್ಪುದು. ದಂಡಕಾಕೃತಿಯ ಮಕಾರಪ್ರಣವದ ಸ್ವಾದಿಷ್ಠಾನಚಕ್ರದೊಳು ನೀಲವರ್ಣವಿರ್ಪುದು. ಕುಂಡಲಾಕೃತಿಯ ಶಿಕಾರಪ್ರಣವದ ಮಣಿಪೂರಚಕ್ರದೊಳು ಕುಂಕುಮವರ್ಣವಿರ್ಪುದು. ಅರ್ಧಚಂದ್ರಾಕೃತಿಯ ಯಕಾರಪ್ರಣವದ ಅನಾಹತಚಕ್ರದೊಳು ಪೀತವರ್ಣವಿರ್ಪುದು. ದರ್ಪಣಾಕೃತಿಯ ಯಕಾರಪ್ರಣವದ ವಿಶುದ್ಧಿಚಕ್ರದೊಳು ಶ್ವೇತವರ್ಣವಿರ್ಪುದು. ಜ್ಯೋತಿರಾಕೃತಿಯ ಒಂಕಾರಪ್ರಣವದ ಆಜ್ಞಾಚಕ್ರದೊಳು ಮಾಣಿಕ್ಯವರ್ಣವಿರ್ಪುದು. ಮತ್ತಂ, ಪೃಥ್ವಿತತ್ವಯುಕ್ತನಾದ ಸದ್ಭಕ್ತನೆಂಬ ಅಂಗನ ಸುಚಿತ್ತಹಸ್ತದೊಳು ಆಚಾರಲಿಂಗವಿರ್ಪುದು. ಅಪ್ಪು ತತ್ವಯುಕ್ತವಾದ ಮಹೇಶನೆಂಬ ಅಂಗನ ಸುಬುದ್ಧಿಹಸ್ತದೊಳು ಗುರುಲಿಂಗವಿರ್ಪುದು. ತೇಜತತ್ವಯುಕ್ತನಾದ ಪ್ರಸಾದಿಯೆಂಬ ಅಂಗನ ನಿರಹಂಕಾರಹಸ್ತದೊಳು ಶಿವಲಿಂಗವಿರ್ಪುದು. ವಾಯುತತ್ವಯುಕ್ತನಾದ ಪ್ರಾಣಲಿಂಗಿಯೆಂಬ ಅಂಗನ ಸೂರ್ಯಹಸ್ತದೊಳು ಜಂಗಮಲಿಂಗವಿರ್ಪುದು. ಆಕಾಶತತ್ವಯುಕ್ತನಾದ ಶರಣನೆಂಬ ಅಂಗನ ಸುಜ್ಞಾನಹಸ್ತದೊಳು ಪ್ರಸಾದಲಿಂಗವಿರ್ಪುದು. ಆತ್ಮತತ್ವಯುಕ್ತನಾದ ಐಕ್ಯನೆಂಬ ಅಂಗನ ಸದ್ಭಾವಹಸ್ತದೊಳು ಮಹಾಲಿಂಗವಿರ್ಪುದು. ಮತ್ತಂ, ಘ್ರಾಣವೆಂಬಮುಖದ ಕ್ರಿಯಾಶಕ್ತಿಯ ಶ್ರದ್ಧಾಭಕ್ತಿಯೊಳು ಸುಗಂಧಪದಾರ್ಥವಿರ್ಪುದು. ಜಿಹ್ವೆಯೆಂಬಮುಖದ ಜ್ಞಾನಶಕ್ತಿಯ ನೈಷ್ಠಿಕಾಭಕ್ತಿಯೊಳು ಸಾರಸಪದಾರ್ಥವಿರ್ಪುದು. ನೇತ್ರವೆಂಬಮುಖದ ಇಚ್ಛಾಶಕ್ತಿಯ ಸಾವಧಾನಭಕ್ತಿಯೊಳು ಸಾರೂಪಪದಾರ್ಥವಿರ್ಪುದು. ತ್ವಗೇಂದ್ರಿಯೆಂಬಮುಖದ ಆದಿಶಕ್ತಿಯ ಅನುಭಾವಭಕ್ತಿಯೊಳು ಸುಸ್ವರೂಪಪದಾರ್ಥವಿರ್ಪುದು. ಶ್ರೋತ್ರೇಂದ್ರಿಯಮುಖದ ಪರಶಕ್ತಿಯ ಆನಂದವೆಂಬಭಕ್ತಿಯೊಳು ಸುಶಬ್ದಪದಾರ್ಥವಿರ್ಪುದು. ಹೃದಯೇಂದ್ರಿಯಮುಖದ ಚಿತ್‍ಶಕ್ತಿಯ ಸಮರಸಭಕ್ತಿಯೊಳು ಸುತೃಪ್ತಿಯಿರ್ಪುದು. ಇಂತೀ ಎಪ್ಪತ್ತೆರಡುಮುಖದಿ ನಿನ್ನ ಪೂಜಿಸಿ, ನಿನ್ನ ಹಾಡ್ಯಾಡಿ, ನಿನ್ನ ಧ್ಯಾನಿಸಿ, ನಿನ್ನ ಚಿಂತಿಸಿ, ನಿನ್ನೊಳು ಕೂಡುತ, ನೀನಾರೆಂದು ಹವಣಿಸಿ ಅಂತರಂಗದಿ ಪೊಕ್ಕು ನೋಡೆ ನೀನಲ್ಲದೆ ನಾನೇ ಆದ ಪರಿ ಇದೇನು ಚೋದ್ಯವೊ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ ?
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಭಕ್ತಿಯೆಂಬ ಸಮಾಧಾನ ಬಸವಣ್ಣನಿಂದ ಎನಗಾಯಿತ್ತು. ಪ್ರಸಾದವೆಂಬ ಪರಿಣಾಮ ಮರುಳುಶಂಕರದೇವರಿಂದ ಎನಗಾಯಿತ್ತು. ಏಕೋಭಾವದ ನಿಷ್ಠೆ ಸಿದ್ಧರಾಮಯ್ಯದೇವರಿಂದ ಎನಗಾಯಿತ್ತು. ಸರ್ವಜೀವ ಪರಿಪೂರ್ಣಕಳೆ ಚನ್ನಬಸವಣ್ಣನಿಂದ ಎನಗಾಯಿತ್ತು. ಆದ (ಅದರ?) ನಿಜದ ನೆಲೆ ಗುಹೇಶ್ವರಲಿಂಗವೆಂಬ ನಾಮವಾಯಿತ್ತು.
--------------
ಅಲ್ಲಮಪ್ರಭುದೇವರು
ಇಂತಪ್ಪ ಪ್ರಣವಪಂಚಾಕ್ಷರಿ ಮಂತ್ರವನು ಸಾಯದಕಿನ್ನ ಮುನ್ನವೆ ಸುಜ್ಞಾನೋದಯವಾಗಿ ಶ್ರೀಗುರುಕಾರುಣ್ಯವ ಹಡದು ಸರ್ವಾಂಗದಲ್ಲಿ ಪ್ರಣವ ಮಂತ್ರವನು ಸಂಬಂಧಿಸಿಕೊಳ್ಳಬೇಕಲ್ಲದೆ, ಸತ್ತ ಶವಕ್ಕೆ ಭುಜಪತ್ರದ ಮೇಲೆ ಪ್ರಣಮವ ಬರದು ಆ ದೇಹಕ್ಕೆ ಹಚ್ಚಿದರೆ ಆ ದೇಹವು ಮಂತ್ರದೇಹವಾಗಬಲ್ಲದೆ? ಆಗಲರಿಯದು. ಅದೆಂತೆಂದಡೆ: ಚಿತ್ರಕನು ಕಾಗದದ ಮೇಲೊಂದು ಚಿತ್ರವ ಬರೆದು ಗೋಡೆಗೆ ಹಚ್ಚಿದರೆ ಆ ಗೋಡೆಯು ಚಿತ್ರವಾಗಲರಿಯದು ಎಂಬ ಹಾಗೆ. ಉಭಯವು ಒಂದೇ ಆದ ಕಾರಣ; ಅಂತಪ್ಪ ಮೂಢಾತ್ಮರ ಮೇಳಾಪವ ವಿಸರ್ಜಿಸಿದ ಶಿವಶರಣನು ದೇಹದಲ್ಲಿರುವ ಪರಿಯಂತರದಲ್ಲಿ ಶ್ರೀಗುರುಕಾರುಣ್ಯವ ಹಡದು ಸರ್ವಾಂಗದಲ್ಲಿ ಪ್ರಣವಮಂತ್ರವನು ಮುಳ್ಳೂರಲಿಕ್ಕೆ ಇಂಬಿಲ್ಲದ ಹಾಗೆ ಸ್ವಾಯತವ ಮಾಡಿಕೊಂಡು ಆ ಮಂತ್ರದಲ್ಲಿ ಲೀಯವಾಗಿ ಪ್ರಪಂಚವನಾಚರಿಸುತ್ತಿರ್ದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
`ಕರ್ಮತ್ರಯಂಗಳ ಭೋಗಿಸಿದಲ್ಲದೆ ಬಿಡದು' ಎಂಬ ಶ್ರುತಿಗೇಳಿ ಮನದೆರೆದು ಮಾತಾಡನಯ್ಯಾ. ದುಃಖಂ ಭೋಗಿಸಿದ ಕರ್ಮತ್ರಯದೊಳಗಯ್ಯಾ. ಆದ ಭೋಗ ಸುಖವಾದಡೆ ಮುಂದೆ ಭವಕ್ಕೆ ಈಡಯ್ಯಾ. ಸುಖದುಃಖಗಳ ಸಮಾನಗೊಂಡವಂಗೆ ವಿಧಿತ್ರಯಂಗಳಿನ್ನೆಲ್ಲಿಹವಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಖಂಡಿತವ್ರತದ ನಿರಂಗನ ವ್ರತವೆಂತುಟೆಂದಡೆ ತನ್ನ ಸತಿಗೆ ಗರ್ಭ ತಲೆದೋರಿದಲ್ಲಿಯೆ, ಮುಖವ ಕಾಂಬುದಕ್ಕೆ ಮುನ್ನವೆ ಲಿಂಗಧಾರಣಮಂ ಮಾಡಿ, ಮಾಡಿದ ಮತ್ತೆ ತನ್ನ ವ್ರತದ ಪಟ್ಟವಂ ಕಟ್ಟಿ, ಶಕ್ತಿಯಾದಲ್ಲಿ ತನ್ನ ನೇಮದ ವ್ರತಿಗಳಿಗೆ ಕೊಟ್ಟಿಹೆನೆಂದು ಸುತನಾದಲ್ಲಿ ತನ್ನ ನೇಮದ ವ್ರತಿಗಳಲ್ಲಿ ತಂದೆಹೆನೆಂದು, ಗಣಸಾಕ್ಷಿಯಾಗಿ ವಿಭೂತಿಯ ಪಟ್ಟವಂ ಕಟ್ಟಿ ಇಪ್ಪುದು ಖಂಡಿತನ ವ್ರತ, ಶೀಲ, ನೇಮ. ಹಾಗಲ್ಲದೆ ದಿಂಡೆಯತನದಿಂದ ಹೋರಿ, ಮಕ್ಕಳಿಗೆ ಸಂದೇಹದ ವ್ರತವ ಕಟ್ಟಬಹುದೆಯೆಂದು ಬುದ್ಧಿಯಾದಂದಿಗೆ ವ್ರತವಾಗಲಿಯೆಂಬವರ ಅಂಗಳವ ಮೆಟ್ಟಬಹುದೆ ಅದೆಂತೆಂದಡೆ ವ್ರತದ ಅಂಗಳದಲ್ಲಿ ಬೆಳೆದ ಗರ್ಭವ ಮತ್ತಂದಿಗಾಗಲಿಯೆಂಬ ಭಂಡರ ನೋಡಾ ಅಂದಿಗಾಗಲಿಯೆಂಬವನ ವ್ರತ ಇಂದೆ ಬಿಟ್ಟಿತ್ತು. ಅದೆಂತೆಂದಡೆ ತನ್ನಂಗದಲ್ಲಿ ಆದ ಲಿಂಗದೇಹಿಯ ಮುಂದಕ್ಕೆ ಭವಿಸಂಗಕ್ಕೆ ಈಡುಮಾಡುವ ವ್ರತಭಂಗಿತನ ಕಂಡು, ಅವನೊಂದಾಗಿ ನುಡಿದಡೆ ಕುಂಭೀನರಕ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವೆ ಅವನ ಹಂಗಿರಬೇಕಯ್ಯಾ.
--------------
ಅಕ್ಕಮ್ಮ
ಮೇರುಗಿರಿ ಉದಯಗಿರಿ ನೀಲಗಿರಿ ಹೇಮಗಿರಿ ರಜತಗಿರಿ ಇಂತೀ ಗಿರಿಗಳಿಗೆ ಛಳಿಯಾದರೆ ಹೊದ್ದಿಸುವರುಂಟೇನಯ್ಯಾ? ಆ ಗಿರಿಯ ಕೆಳಗೆ ಗಗನವುಂಟು ; ಆ ಗಗನಕ್ಕೆ ಗಬಸಣಿಗೆಯಿಕ್ಕುವರುಂಟೇನಯ್ಯ? ಆ ಗಗನದ ಕೆಳಗೆ ಸಪ್ತಸಮುದ್ರಗಳುಂಟು. ಅವುಗಳ ನೀರುಡುಗಿದರೆ ಆ ನೀರ ಕೂಡಿಸುವರುಂಟೇನಯ್ಯಾ? ಆ ಸಮುದ್ರಂಗಳ ಕೆಳಗೆ ಒಂದು ಮದಸೊಕ್ಕಿದ ಇಲಿ, ಆ ಇಲಿಯ ತಿಂದೆನೆಂದು ಒಂದು ಮಾರ್ಜಲ ಬರಲು, ಆ ಮಾರ್ಜಾಲನು ಆ ಇಲಿಯ ಕಂಡು ನಿಬ್ಬೆರಗಾಯಿತ್ತು. ಆ ಇಲಿಯು ಬಂದು ಆ ಮಾರ್ಜಾಲನ ಕಿವಿಯ ತಿಂಬೋದು. ಆದ ಕಂಡು ಬೆರಗಾದ ನಮ್ಮ ಗೊಹೇಶ್ವರಪ್ರಿಯ ನಿರಾಳಲಿಂಗ.
--------------
ಗುಹೇಶ್ವರಯ್ಯ
ಏಕಮೂರ್ತಿತ್ರಯೋಭಾಗವಾದುದ ತಾನರಿತ ಮತ್ತೆ ತಾನಾರಾಧಿಸುವ ವಸ್ತು ಶುದ್ಧತೆ ಆದಾಗ ತಾ ಶುದ್ಧವಾಯಿತ್ತೆಂಬುದಕ್ಕೆ ಪ್ರಸಿದ್ಧ. ತ್ರಿವಿಧ ತನ್ನಯ ಭಾವಮೂರ್ತಿ ಆದ ಕಾರಣ, ಹೇಳಿದೆ ಕೇಳಿದೆನೆಂಬುದಿಲ್ಲ, ಆ ಅಂಗ ಸದಾಶಿವಮೂರ್ತಿಲಿಂಗವು ತಾನೆ.
--------------
ಅರಿವಿನ ಮಾರಿತಂದೆ
ಕೂಲಿ ಕೃಷಿ ಕಾಯಕಂಗಳಿಂದ ಮಾಡುವ ಗುರುಲಿಂಗಜಂಗಮದ ಸೇವೆ, ಅದಾವ ತೆರನೆಂದರಿದು, ಭಾವ ಶುದ್ಧವಾಗಿ ಮಾಡುವ ಸುಕಾಯಕವಂತನಿರವು ಎಂತುಟೆಂದಡೆ : ಮಾಡಿಕೊಂಡ ಕೃತ್ಯದಲ್ಲಿ ಆರಿಗೂ ಒಡಲೆಡೆಗೂಡದೆ, ಕೊಂಡುದು ಪ್ರಸಾದ, ನಿಂದುದು ಸಯಿದಾನವೆನ್ನದೆ, ಉಭಯ ಪ್ರತಿಪಾಕದಲ್ಲಿ ಆದ ಸಯಿದಾನಕ್ಕೆ ಸಂಕಲ್ಪವಳಿದು, ಉಭಯಭಾಂಡವೂ ಸರಿಯೆಂದ ಪ್ರಸಾದಿಗೆ ಪ್ರಸಾದವ ಎಡೆಮಾಡಬೇಕು. ಅದು ನಿರ್ಮಾಲ್ಯವಲ್ಲ, ಅದು ಲಿಂಗಾಂಗ, ಕುಂಭದಲ್ಲಿ ನಿಂದಪ್ರಸಾದ. ಇದರ ಸಂದೇಹವ ಹರಿದು ಕೊಂಬ ನಿರಂಗಪ್ರಸಾದಿಗೆ ಕುಂಭೇಶ್ವರಲಿಂಗದಲ್ಲಿದ್ದ ಜಗನ್ನಾಥ ಸಾಕ್ಷಿಯಾಗಿ ನಮೋ ನಮೋ ಎನುತಿದ್ದೆನು.
--------------
ಹೊಡೆಹುಲ್ಲ ಬಂಕಣ್ಣ
ವಾಚಾತೀತವೂ ಮನೋತೀತವೂ ಭಾವಾತೀತವೂ ಆದ ಮಹಾಲಿಂಗವು ಸತ್ಯಜ್ಞಾನಾನಂದ ಸ್ವರೂಪಮಾದಲ್ಲಿ, ಸತ್ಯವೇ ಭಕ್ತ, ಜ್ಞಾನವೇ ಗುರು, ಆನಂದವೇ ಜಂಗಮಸ್ವರೂಪವಾಗಿ ನಟಿಸುತಿರ್ಪ ಮಹಾಲಿಂಗವು ತನ್ನ ಲೀಲೆಗೋಸುಗ ಆನಂದವನ್ನು ಮರೆವಿಡಿದು, ಅದರಲ್ಲಿಯೇ ದುಃಖಸ್ವರೂಪಮಾಗಿ ಮಹಾರುದ್ರನಂ ಸೃಜಿಸಿ, ಜ್ಞಾನಮಂ ಮರೆವಿಡಿದು, ಅದರಲ್ಲಿಯೇ ಅಜ್ಞಾನವೆಂಬ ವಿಷ್ಣುವಂ ಕಲ್ಪಸಿ, ಸತ್ಯವಂ ಮರೆವಿಡಿದು, ಅದರಲ್ಲಿ ಮಿಥ್ಯೆಯೆಂಬ ಬ್ರಹ್ಮನು ಕಲ್ಪಿಸಲು, ಸರ್ಗಸ್ಥಿತಿ ಸಂಹಾರಂಗಳಿಗಿದೇ ಕಾರಣಮಾಗಿ, ಆ ರುದ್ರನಲ್ಲಿ ಜಾಗ್ರವೂ, ವಿಷ್ಣುವಿನಲ್ಲಿ ಸುಷುಪ್ತಿಯೂ, ಬ್ರಹ್ಮನಲ್ಲಿ ಸ್ವಪ್ನವೂ ಉತ್ಪನ್ನವಾಗಿ, ಆ ಜಾಗ್ರದಲ್ಲಿ ತೇಜವೂ, ಸುಷುಪ್ತಿಯಲ್ಲಿ ವಾಯ್ವಾಕಾಶಂಗಳೂ, ಸ್ವಪ್ನದಲ್ಲಿ ಪೃಥ್ವಿಯಪ್ಪುಗಳೂ ಆಗಿ, ಅವುಗಳೇ ಒಂದಕ್ಕೊಂದಾವರಣಂಗಳಾಗಿರ್ಪ ಈ ಪ್ರಪಂಚದಲ್ಲಿ ಕ್ರೀಡಾನಿಮಿತ್ತವಾಗಿ ಜೀವಪರಮರೂಪುಗಳಂ ಧರಿಸಿ, ಇದಕ್ಕೆ ಹೊರಗಾಗಿ, ತಾನು ಪರಮರೂಪದಲ್ಲಿ ನಿಂದು, ತನ್ನೊಳ್ತಾನೆ ಕಲ್ಪಿಸಿದ ಜೀವಕೋಟಿಗಳನ್ನು ಇದಕ್ಕೊಳಗುಮಾಡಲು, ಅವೆಲ್ಲವೂ ಒಂದಕ್ಕೊಂದು ಸುತ್ತಿಮುತ್ತಿ ಮಿಥ್ಯೆಯೇ ಸ್ಥೂಲಮಾಗಿ, ಅಜ್ಞಾನವೇ ಸೂಕ್ಷ್ಮವಾಗಿ, ದುಃಖವೇ ಕಾರಣಮಾಗಿ, ಜಾಗ್ರತ್ಸ್ವಪ್ನಸುಷುಪ್ತ್ಯವಸ್ಥೆಗಳನನುಭವಿಸುತ್ತಾ. ನಿಜವಂ ಮರತು ನಿಜಾವಸ್ಥೆಯಂ ತೊರೆದು, ತ್ರಿಮೂರ್ತಿಗಳ ಬಲೆಗೆ ಸಿಕ್ಕಿ ದಾಂಟಲಾರದೆ, ಕೋಟಲೆಗೊಳುತತಿಪ್ರ್ಮದಂ ನೋಡಿ ನೋಡಿ, ಆನಂದಿಸುತ್ತಿರ್ಪನೆಂತೆಂದೊಡೆ: ಮದ್ದಂ ಮೆಲುವಾತಂಗದೇ ಸಾಧಕಮಾಗಿ, ಆ ಲಹರಿಯೊಳಗೆ ಕೂಡಿ, ನಿಜಾವಸ್ಥೆಯಂ ತೊರೆದು, ತದವಸ್ಥೆಯೊಳು ಬದ್ಧನಾಗಿ, ಆ ಲಹರಿಯಳಿದಲ್ಲಿ ಮರಣವೇ ಕಾರಣಮಾಗಿ, ತಿರಿಗಿ ಶರೀರಮಂಪೊಂದಿ, ಅವಸ್ಥಾತ್ರಯಂಗಳನನುಭವಿಸುತ್ತಿಪ್ರ್ಮದಂ ನೋಡಿ, ಪರಮಾನಂದಿಸುತ್ತಿಪುನು. ಇಂತಪ್ಪ ಭ್ರಮೆಯಂ ಕಳೆದು, ತನ್ನ ನಿಜಸ್ವರೂಪಮಪ್ಪ ತೂರ್ಯಾವಸ್ಥೆಯಂ ಹೊಂದುವನೆಂದೊಡೆ, ಹೊಂದತೀರದೆ ಸ್ವಲ್ಪಕಾಲವೇ ಮಹಾತ್ಕಾಲಮಾಗಿ, ಪೃಥ್ವಿವ್ಯಪ್ತೇಜೋವಾಯ್ವಾಕಾಶಾದಿ ಪಂಚಭೂತಂಗಳು ದಾಂಟಲಾರದೆ, ಆ ಪಂಚಭೂತಗುಣಗಂಗಳಂ ಪಂಚೇಂದ್ರಿಯಮುಖಗಳಿಂದ ತನ್ನತಃಕರಣದಿಂ ಕೊಂಡುಂಡು, ಭಾವವಂ ಮುಟ್ಟಲೊಲ್ಲದೆ, ಪಂಚೇದ್ರಿಯಂಗಳಲ್ಲಿರ್ಪ ಬ್ರಹ್ಮನ, ಅಂತಃಕರಣದಲ್ಲಿರ್ಪ ವಿಷ್ಣುವಿನ, ಭಾವದಲ್ಲಿರ್ಪ ರುದ್ರನ ಕಾಟದಲ್ಲಿ ಕೋಟಲೆಗೊಳುತ್ತಿರ್ಪುದಂ ತಪ್ಪಿಸುವುದಕ್ಕುಪಾಯಮಂ ಕಾಣದಿರ್ಪ ಜೀವನಿಗೆ ತಾನೇ ದಯೆಯಿಂ ಗುರುರೂಪನಾಗಿ ಬಂದು, ತನ್ನ ನಿಜವನ್ನೇ ಇದಿರಿಟ್ಟು ತೋರಿದಲ್ಲಿ, ಆ ವಸ್ತುವಂ ನೋಡಿ ನೋಡಿ, ತನ್ನ ಅಂತರಂಗದಲ್ಲಿರ್ಪ ಅಜ್ಞಾನವು ಹರಿದು, ಅಲ್ಲೊಂದು ಸೂಕ್ಷ್ಮದ್ವಾರವು ಕಾಣಿಸಲಲ್ಲಿ ಪ್ರವೇಶಿಸಲೆಸದಿರ್ಪ ಅನೇಕ ದುರ್ಗುಣಗಳಿಗಂಜದೆ ಆತ್ಮಾನಮಾತ್ಮನಾವೇತ್ತಿ ಎಂಬ ಶ್ರುತಿವಚನದಿಂ ತನ್ನಿಂದುತ್ಪನ್ನಮಾದ ಪಂಚಭೂತಗಳಲ್ಲಿ ತಾನೇ ಕಾರಣಭೂತಮಾಗಿ ಕೂಡಲು, ಆ ಗುಣಂಗಳು ಆತ್ಮಸ್ವರೂಪಮಾಗಿ, ಆತ್ಮನಿಂದಲೇ ಉಧ್ಭವಿಸಿ, ಆತ್ಮನಿಗೆ ಸುಖವನ್ನೂ ವಾಯುರೂಪಮಾದ ಜೀವನಿಗೆ ದುಃಖವನ್ನೂ ಉಂಟುಮಾಡುತ್ತಿರ್ಪವೆಂತೆಂದೊಡೆ: ಅರಸಿನಲ್ಲಿ ಹುಟ್ಟಿದ ಗ್ರಹವು ಅರಸಿಂಗೆ ಸುಖಮಂ ಪರರಿಗೆ ದುಃಖಮಂ ಮಾಡುವಂದದಿ, ಆಧಿಯಲ್ಲಾಕಾಶಾತ್ಮಸಂಗದಿಂ ಜ್ಞಾನವು ಹುಟ್ಟಿ, ಅದು ಅಭೇದಮಾಗಿರ್ಪ ಆಕಾಶಾತ್ಮಂಗಳಲ್ಲಿ ಇದಾಕಾಶವಿದಾತ್ಮವೆಂಬ ಭೇದಮಂ ಪುಟ್ಟಿಸಿ, ಜೀವರ ಸೃಷ್ಟಿ ಸ್ಥಿತಿ ಸಂಹಾರಂಗಳಿಗೆ ಕಾರಣಮಾಯಿತ್ತು. ಉಳಿದ ನಾಲ್ಕು ಭೂತಂಗಳಲ್ಲಂತಃಕರಣಚತುಷ್ಟಯಂಗಳು ಹುಟ್ಟಿ, ಅವೇ ನಾಲ್ಕುಮುಖಂಗಳಾಗಿ, ಜ್ಞಾನವು ಮಧ್ಯಮುಖಮಾಗಿ, ತದ್ಬಲದಿಂ ಅಹಂ ಬ್ರಹ್ಮವೆಂದಹಂಕರಿಸುತ್ತಿರ್ಪ ಬ್ರಹ್ಮನಂ ನೋಡಿ, ಆತ್ಮರೂಪಮಾದ ಶಿವನು ಭಾವಹಸ್ತದಲ್ಲಿ ಅಂತಃಕರಣಮಧ್ಯದಲ್ಲಿರ್ಪ ಜ್ಞಾನವೆಂಬ ಬ್ರಹ್ಮಕಪಾಲವಂ ಪರಿಗ್ರಹಿಸಲು, ಉಳಿದ ನಾಲ್ಕು ಶಿರಸ್ಸುಗಳಿಂ ಸೃಷ್ಟಿಕರ್ತನಾದ ಬ್ರಹ್ಮನು ಸಂಹಾರರೂಪಮಾದ ಜ್ಞಾನಮುಖದಲ್ಲಿ ಸಕಲ ಪದಾರ್ಥಗಳನ್ನು ಪರಿಗ್ರಹಿಸುತ್ತಿರ್ಪನು. ಅಂತಪ್ಪ ಆತ್ಮರೂಪಮಾದ ಶಿವನೊಳಗೆ ಆಕಾಶಮೆಂತೈಕ್ಯಮಪ್ಪುದೆಂದೊಂಡೆ : ಆಕಾಶವೂ ವಾಯುರೂಪು. ಭಸ್ತ್ರಿಯಲ್ಲಿ ಪ್ರವೇಶಿಸಿರ್ಪ ವಾಯುವಿನಿಂದ ಆಕಾಶಮಧಿಕಮಾಗಲು. ವಾಯುವಡಗಲಾಕಾಶವೂ ಕೂಡ ಅಡಗುವಂದದಿ, ಅಂತಪ್ಪ ವಾಯುವೇ ಜೀವನು, ಆ ಜೀವನಿಗವಸಾನಸ್ಥಾನವೇ ಆತ್ಮನು, ಆ ಆತ್ಮನಲ್ಲಿ ಕೂಡಿ ತನ್ನ ಮುನ್ನಿನ ವಾಯುರೂಪಮಳಿದಲ್ಲಿ ಅದಕಿಂತ ಮೊದಲೇ ಆಕಾಶವಳಿವುತ್ತಿರ್ಪುದು. ಅಂತಪ್ಪ ಆತ್ಮಸ್ವರೂಪವೆಂತೆಂದೊಂಡೆ : ಆತ್ಮವಂ ವಿಚಾರಿಸಿ ಆತ್ಮಸ್ವರೂಪವನರಿಸಿದ ಜೀವನು ತಾನಾತ್ಮನಾಗುತ್ತಿರಲು ಆತ್ಮಸ್ವರೂಪಮಿತೆಂದು ಮರಳಿಯೋರ್ವರೊಳುಸುರುವುದೆಂತಯ್ಯಾ! ಸತ್ತವನು ಬಂದು ತನ್ನ ವೃತ್ತಾಂತವಂ ಹೇಳಬಲ್ಲನೆ? ಉರಿಯೊಳ್ಕೂಡಿದ ಕರ್ಪುರವು ಉರಿಯಪ್ಪುದಲ್ಲದೆ ಕರ್ಪುರವಪ್ಪುದೆ? ಅಂತಪ್ಪ ಅಭೇದಾನಂದ ಪರಮಾತ್ಮಸಂಗದೊಳೇಕಮಾಗಿರ್ಪಂತೆ ಮಾಡಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ನೆಲವಾಗಿಲ ಮುಚ್ಚಿ, ತಲೆವಾಗಿಲ ತೆರದು, ಎವೆ ಮಿಡುಕದಂತೆ ನಿಮ್ಮ ನೋಡುತ್ತಿಪ್ಪ ಸುಖವೆಂದಪ್ಪುದೊ? ಎನಗೆ ಗುರುವಿನುಪದೇಶವ ಹಿರಿದು ಪರಿಯಲಿ ನಂಬಿ, ಎರಡು ಪುರ್ಬಿನ ನಡುವೆ ಹರಿವ ಮನವ ನಿಲಿಸಿ, ಪರಿಣಾಮ ಪರವಶದೊಳೆಂದಿಪ್ಪೆನಯ್ಯಾ? ಹೋದ ಹೊತ್ತನರಿಯದೆ, ಆದ ದುಃಖವನರಿಯದೆ, ಬೆರಗು ನಿಂದು ನಿಮ್ಮನೆಂದಿಂಗೊಮ್ಮೆ ನೆರೆವೆ? ಸದ್ಗುರು ಸಿದ್ಧಸೋಮನಾಥಾ, ಇಂದು ಕಾಣದ ಮುಕ್ತಿ ಎಂದಿಗೂ ಇಲ್ಲ.
--------------
ಅಮುಗಿದೇವಯ್ಯ
ಇನ್ನಷ್ಟು ... -->