ಅಥವಾ

ಒಟ್ಟು 3 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುತ್ವವುಳ್ಳ ಮಹದ್ಗುರುವನರಿಯದೆ ನಾನು ಗುರು ತಾನು ಗುರುವೆಂದು ನುಡಿವಿರಿ. ಧನದಲ್ಲಿ ಗುರುವೆ? ಮನದಲ್ಲಿ ಗುರುವೆ? ತನುವಿನಲ್ಲಿ ಗುರುವೆ? ನಿತ್ಯದಲ್ಲಿ ಗುರುವೆ? ವಿದ್ಯೆಯಲ್ಲಿ ಗುರುವೆ? ಭಕ್ತಿಯಲ್ಲಿ ಗುರುವೆ? ಜ್ಞಾನದಲ್ಲಿ ಗುರುವೆ? ವೈರಾಗ್ಯದಲ್ಲಿ ಗುರುವೆ? ದೀಕ್ಷೆಯಲ್ಲಿ ಗುರುವೆರಿ ಶಿಕ್ಷೆಯಲ್ಲಿ ಗುರುವೆರಿ ಸ್ವಾನುಭಾವದಲ್ಲಿ ಗುರುವೆರಿ ಮಾತಾಪಿತರಲ್ಲಿ ಗುರುವೆರಿ ದೇವದಾನವ ಮಾನವರೆಲ್ಲರು ನೀವೆಲ್ಲರು ಆವ ಪರಿಯಲ್ಲಿ ಗುರು ಹೇಳಿರಣ್ಣಾ? ಗುರುವಾರು ಲಘುವಾರೆಂದರಿಯರಿ, ಮನ ಬಂದಂತೆ ನುಡಿದು ಕೆಡುವಿರಾಗಿ. ಹರಿಬ್ರಹ್ಮರು ಗುರುತ್ವಕ್ಕೆ ಸಂವಾದಿಸಿ ಮಹದ್ಗುರುವಪ್ಪ ಪರಂಜ್ಯೋತಿರ್ಲಿಂಗದ ಆದಿಮಧ್ಯಾವಸಾನದ ಕಾಲವನರಿಯದೆ ಲಘುವಾಗಿ ಹೋದರು. ಮತ್ತಂ ಅದೊಮ್ಮೆ ವಿಷ್ಣ್ವಾದಿ ದೇವಜಾತಿಗಳೆಲ್ಲರೂ ನೆರೆದು ನಾ ಘನ, ತಾ ಘನ, ನಾನು ಗುರು, ತಾನು ಗುರುವೆಂದು ಮಹಾಸಂವಾದದಿಂದ ಅತಿತರ್ಕವ ಮಾಡಿ ಗುರುತ್ವವುಳ್ಳ ಪುರುಷನ ನಿಶ್ಚೈಸಲರಿಯದೆ, ಆ ಸಭಾಮಧ್ಯದಿ ಪರಮಾಕಾಶದಿ `ಅತ್ಯತಿಷ*ದ್ದಶಾಂಗುಲನೆನಿಪ' ಮದ್ಗುರುವಪ್ಪ ಮಹಾಲಿಂಗವು ಇವರುಗಳ ಅಜ್ಞಾನವ ಕಂಡು ಮಹಾವಿಪರೀತಕ್ರೀಯಲ್ಲಿ ನಗುತಿರಲು ನಮ್ಮೆಲ್ಲರನೂ ನೋಡಿ ನಗುವ ಪುರುಷನಾರು? ಈ ಪುರುಷನ ನೋಡುವ, ಈ ಪುರುಷನಿಂದ ನಮ್ಮಲ್ಲಿ ಆರು ಘನ ಆರು ಗುರುವೆಂದು ಕೇಳುವೆವೆಂದು ಆ ಮಹಾಪುರುಷನ ಸಮೀಪಕ್ಕೆ ಅಗ್ನಿ ವಾಯು ಮೊದಲಾಗಿಹ ದೇವಜಾತಿಗಳೆಲ್ಲರೂ ಪ್ರತ್ಯೇಕರಾಗಿ ಹೋಗಲು ಅತ್ಯತಿಷ*ದ್ದಶಾಂಗುಲಮಾಗಿರ್ದು ಇವರುಗಳ ಗುರುತ್ವವೆಲ್ಲವನೂ ಒಂದೇ ತೃಣದಲ್ಲಿ ಮುರಿದು ತೃಣದಿಂದವೂ ಕಷ್ಟ ಲಘುತ್ವವ ಮಾಡಿದನು. ಇದು ಕಾರಣ, ಪರಶಿವನೆ ಮದ್ಗುರು ಕಾಣಿರೆ. ಧನದಲ್ಲಿ ಗುರುವೆರಿ ನೀವೆಲ್ಲರು ಧನದಲ್ಲಿ ಗುರುವೆಂಬಡೆ ನೀವು ಕೇಳಿರೆ, ಕಾಣಿವುಳ್ಳವಂಗೆ ಶತಸಂಖ್ಯೆ ಉಳ್ಳವನೆ ಗುರು, ಶತಸಂಖ್ಯೆ ಉಳ್ಳವಂಗೆ ಸಹಸ್ರಸಂಖ್ಯೆ ಉಳ್ಳವನೆ ಗುರು, ಸಹಸ್ರಸಂಖ್ಯೆ ಉಳ್ಳವಂಗೆ ಮಹದೈಶ್ವರ್ಯ ಉಳ್ಳವನೆ ಗುರು, ಮಹದೈಶ್ವರ್ಯ ಉಳ್ಳವಂಗೆ ಕಾಮಧೇನು ಕಲ್ಪವೃಕ್ಷ ಚಿಂತಾಮಣಿ ಮೊದಲಾದ ಮಹದೈಶ್ವರ್ಯವುಳ್ಳ ಇಂದ್ರನೆ ಗುರು. ಇಂದ್ರಂಗೆ ಅನೂನೈಶ್ವರ್ಯವನುಳ್ಳ ಬ್ರಹ್ಮನೆ ಗುರು, ಆ ಬ್ರಹ್ಮಂಗೆ ಐಶ್ವರ್ಯಕ್ಕೆ ಅಧಿದೇವತೆಯಪ್ಪ ಮಹಾಲಕ್ಷ್ಮಿಯನುಳ್ಳ ವಿಷ್ಣುವೆ ಗುರು, ಆ ವಿಷ್ಣುವಿಂಗೆ ಅಷ್ಟಮಹದೈಶ್ವರ್ಯವನುಳ್ಳ ರುದ್ರನೆ ಗುರು, ಆ ರುದ್ರಂಗೆ ಈಶ್ವರನೆ ಗುರು, ಈಶ್ವರಂಗೆ ಸದಾಶಿವನೆ ಗುರು. ಬ್ರಹ್ಮಾ ವಿಷ್ಣುಶ್ಚ ರುದ್ರಶ್ಚ ಈಶ್ವರಶ್ಚ ಸದಾಶಿವಃ ಯೇ ತೇ ಗರ್ಭಗತಾ ಯಸ್ಯ ತಸ್ಮೈ ಶ್ರೀಗುರವೇ ನಮಃ ಎಂದುದಾಗಿ, ಅಂತಹ ಸದಾಶಿವಂಗೆ ಎಮ್ಮ ಪರಶಿವಮೂರ್ತಿ ಶ್ರೀಗುರುವೆ ಗುರು ಕಾಣಿರೆ. ಮನದಲ್ಲಿ ಗುರುವೇ ನೀವೆಲ್ಲರು ದುರ್ಮನಸ್ಸಿಗಳು ಪರಧನ ಪರಸ್ತ್ರೀ ಅನ್ಯದೈವಕ್ಕೆ ಆಸೆ ಮಾಡುವಿರಿ. ಇಂತಹ ದುರ್ಮನಸ್ಸಿನವರನೂ ಸುಮನವ ಮಾಡಿ ಸುಜ್ಞಾನಪದವ ತೋರುವ ಪರಶಿವಮೂರ್ತಿ ಶ್ರೀಗುರುವೆ ಗುರು ಕಾಣಿರೆ. ತನುವಿನಲ್ಲಿ ಗುರುವೆ? ಜನನ ಮರಣ ಎಂಬತ್ತುನಾಲ್ಕು ಲಕ್ಷ ಯೋನಿಯಲ್ಲಿ ಜನಿಸುವ ಅನಿತ್ಯತನು ನಿಮಗೆ. ಇಂತಪ್ಪ ತನುವನುಳ್ಳವರ ಪೂರ್ವಜಾತನ ಕಳೆದು, ಶುದ್ಧತನುವ ಮಾಡಿ ಪಂರ್ಚಭೂತತನುವ ಕಳೆದು, ಶುದ್ಧತನುವ ಮಾಡಿ ಭಕ್ತಕಾಯ ಮಮಕಾಯವೆಂದು ಶಿವನುಡಿದಂತಹ ಪ್ರಸಾದಕಾಯವ ಮಾಡಿ ನಿತ್ಯಸುಖದೊಳಿರಿಸಿದ ಪರಶಿವಮೂರ್ತಿ ಶ್ರೀಗುರುವೇ ಗುರು ಕಾಣಿರೆ. ವಿದ್ಯೆಯಲ್ಲಿ ಗುರುವೆ? ನೀವೆಲ್ಲರು ವೇದದ ಬಲ್ಲಡೆ, ಶಾಸ್ತ್ರವನರಿಯರಿ, ವೇದಶಾಸ್ತ್ರವ ಬಲ್ಲಡೆ, ಪುರಾಣವನರಿಯರಿ, ವೇದಶಾಸ್ತ್ರಪುರಾಣವ ಬಲ್ಲಡೆ, ಆಗಮವನರಿಯರಿ, ವೇದಶಾಸ್ತ್ರಪುರಾಣ ಆಗಮನ ಬಲ್ಲಡೆ ಅವರ ತಾತ್ಪರ್ಯವನರಿಯರಿ, ಅಷ್ಟಾದಶವಿದ್ಯೆಗಳ ಮರ್ಮವನರಿಯರಿ. ವೇದಂಗಳು, `ಏಕ ಏವ ರುದ್ರೋ ನ ದ್ವಿತೀಯಾಯ ತಸ್ಥೇ' ಎಂದವು. ಅದನ್ನರಿಯರಿ ನೀವು, ಅನ್ಯವುಂಟೆಂಬಿರಿ, `ಶಿವ ಏಕೋ ದ್ಯೇಯಃ ಶಿವಶಂಕರಃ ಸರ್ವಮನ್ಯತ್ಪರಿತ್ಯಾಜ್ಯಂ' ಅಂದವು, ನೀವು ಅನ್ಯವ ಧ್ಯಾನಿಸುವಿರಿ, ಅನ್ಯವ ಪೂಜಿಸುವಿರಿ, ವಿದ್ಯೆ ನಿಮಗಿಲ್ಲ, ನಿಮಗೆ ಹೇಳಿಕೊಡುವ ವ್ಯಾಸಾದಿಗಳಿಗಿಲ್ಲ, ಅವರಿಗೆ ಅಧಿಕನಾಗಿಹ ವಿಷ್ಣುಬ್ರಹ್ಮಾದಿಗಳಿಗಿಲ್ಲ, ವೇದಾದಿ ಅಷ್ಟಾದಶವಿದ್ಯೆಗಳ ಶಿವನೆ ಬಲ್ಲನು. ಸರ್ವವಿದ್ಯೆಗಳನೂ ಶಿವನೇ ಮಾಡಿದನು, ಶಿವನೇ ಕರ್ತನು `ಆದಿಕರ್ತಾ ಕವಿಸ್ಸಾಕ್ಷಾತ್ ಶೂಲಪಾಣಿರಿತಿಶ್ರುತಿಃ ಎಂದುದಾಗಿ. `ನಮೋ ಮಂತ್ರಿಣೇ ವಾಣಿಜಾಯ ಕಕ್ಷಾಣಾಂ ಕತಯೇ ನಮಃ ಎಂದುದಾಗಿ, `ಈಶಾನಸ್ಸರ್ವವಿದ್ಯಾನಾಂ ಎಂದುದಾಗಿ, ವಿದ್ಯಾರೂಪನಪ್ಪ ಎಮ್ಮ ಪರಶಿವಮೂರ್ತಿ ಶ್ರೀಗುರುವೇ ವಿದ್ಯೆಯಲ್ಲಿ ಗುರು ಕಾಣಿರೆ, ದೀಕ್ಷೆಯಲ್ಲಿ ಗುರುವೇರಿ ನೀವು `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂಬಿರಿ, ಆ ವಿಷ್ಣುವ ಭಜಿಸಿ ವಿಷ್ಣುವೇ ಗುರುವೆಂಬಿರಿ. ಅಂತಹ ವಿಷ್ಣುವಿಂಗೆಯೂ ಉಪಮನ್ಯು ಗುರು ಕಾಣಿರೆ. ಅಂತಹ ಉಪಮನ್ಯು ಮೊದಲಾದ ದೇವಋಷಿ ಬ್ರಹ್ಮಋಷಿ ರಾಜಋಷಿ ದೇವಜಾತಿ ಮಾನವಜಾತಿಗಳಿಗೆ ಪರಶಿವನಾಚಾರ್ಯನಾಗಿ ಉಪದೇಶವ ಮಾಡಿದನು. ವೇದಶಾಸ್ತ್ರ ಆಗಮ ಪುರಾಣಂಗಳಲ್ಲಿ, ವಿಚಾರಿಸಿ ನೋಡಿರೆ. ಅದು ಕಾರಣ ಮಹಾಚಾರ್ಯನು ಮಹಾದೀಕ್ಷಿತನಪ್ಪ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. ಶಿಕ್ಷೆಯಲ್ಲಿ ಗುರುವೇರಿ ನಿಮಗೆ ಶಿಕ್ಷಾಸತ್ವವಿಲ್ಲ. ವೀರಭದ್ರ ದೂರ್ವಾಸ ಗೌತಮಾದಿಗಳಿಂ ನೀವೆಲ್ಲಾ ಶಿಕ್ಷೆಗೊಳಗಾದಿರಿ. ಶಿಕ್ಷಾಮೂರ್ತಿ ಚರಲಿಂಗವಾಗಿ ಶಿಕ್ಷಿಸಿ ರಕ್ಷಿಸಿದನು ಪರಶಿವನು. ಯೇ ರುದ್ರಲೋಕಾದವತೀರ್ಯ ರುದ್ರಾ ಮಾನುಷ್ಯಮಾಶ್ರಿತ್ಯ ಜಗದ್ಧಿತಾಯ ಚರಂತಿ ನಾನಾವಿಧಚಾರುಚೇಷ್ಟಾಸ್ತೇಭ್ಯೋ ನಮಸ್ತ್ರ್ಯಂಬಕಪೂಜಕೇಭ್ಯಃ ಎಂದುದಾಗಿ, ದಂಡಕ್ಷೀರದ್ವಯಂ ಹಸ್ತೇ ಜಂಗಮೋ ಭಕ್ತಿಮಂದಿರಂ ಅತಿಭಕ್ತ್ಯಾ ಲಿಂಗಸಂತುಷ್ಟಿರಪಹಾಸ್ಯಂ ಯಮದಂಡನಂ ಎಂದುದಾಗಿ, ಶಿಕ್ಷೆಯಲ್ಲಿ ಗುರು ಎಮ್ಮ ಪರಶಿವಮೂರ್ತಿ ಮದ್ಗುರುವೇ ಗುರು ಕಾಣಿರೆ. ಸ್ವಾನುಭಾವದಲ್ಲಿ ಗುರುವೆ? ನೀವು ದೇವದಾನವಮಾನವರೆಲ್ಲರು ದೇಹಗುಣವಿಡಿದು ಮದಾಂಧರಾಗಿ ಸ್ವಾನುಭಾವ[ರಹಿತರಾದಿರಿ]. ಸ್ಕಂದ ನಂದಿ ವೀರಭದ್ರ ಭೃಂಗಿನಾಥ ಬಸವರಾಜ ಮೊದಲಾದ ಎಮ್ಮ ಮಾಹೇಶ್ವರರೇ ಸ್ವಾನುಭಾವಸಂಪನ್ನರು. ಇಂತಹ ಮಹಾಮಹೇಶ್ವರರಿಗೆ ಸ್ವಾನುಭಾವವ ಕರುಣಿಸಬಲ್ಲ ಎಮ್ಮ ಪರಶಿವಮೂರ್ತಿ ಮಹದ್ಗುರು[ವೇ] ಸ್ವಾನುಭಾವದಲ್ಲಿ ಗುರು ಕಾಣಿರೆ. ಮಾತಾಪಿತರ ಗುರುವೆಂಬಿರಿ, ಲಘುವಿನಲ್ಲಿ ತಾವೆಲ್ಲರು ಜನಿಸಿದಿರಿ. ತಮ್ಮ ಸ್ಥಿತಿಯೂ ಲಘು, ಲಘುವಾಗಿ ಲಯವಪ್ಪುದು ಗುರುವೆ? ಅಲ್ಲ. ಸೋಮಃ ಪವತೇ ಜನಿತಾ ಮತೀನಾಂ ಜದಿತಾ ದಿವೋ ಜನಿತಾ ಪೃಥ್ವಿವ್ಯಾ ಜನಿತಾಗ್ನೇರ್ಜನಿತಾ ಸೂರ್ಯಸ್ಯ `ಜನಿತೋಥವಿಷ್ಣೋಃ ಎಂದುದಾಗಿ, `ಶಿವೋ ಮಮೈವ ಪಿತಾ ಎಂದುದಾಗಿ, ಸರ್ವರಿಗೂ ಮಾತಾಪಿತನಪ್ಪ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೊ. ಭಕ್ತಿಯಲ್ಲಿ ಗುರುವೆ? ನಿಮಗೆ ಲವಲೇಶ ಭಕ್ತಿಯಿಲ್ಲ, ನೀವೆಲ್ಲರು ಉಪಾಧಿಕರು. ನಿರುಪಾಧಿಕರು ಎಮ್ಮ ಮಹಾಸದ್ಭಕ್ತರು ತನು ಮನ ಧನವನರ್ಪಿಸಿ ಉಂಡು ಉಣಿಸಿ ಆಡಿ ಹಾಡಿ ಸುಖಿಯಾದರು ಶರಣರು. ಇಂತಹ ಶರಣಭರಿತ ಸದಾಶಿವಮೂರ್ತಿ ಮಹಾಸದ್ಗುರುವೇ ಭಕ್ತಿಯಲ್ಲಿ ಗುರು ಕಾಣಿರೆ. ಜ್ಞಾನದಲ್ಲಿ ಗುರುವೇ? ನೀವೆಲ್ಲರು ದೇವದಾನವ ಮಾನವರು ಅಜ್ಞಾನಿಗಳು. ಜ್ಞಾತೃ ಜ್ಞಾನ ಜ್ಞೇಯವಪ್ಪ ಪರಶಿವಲಿಂಗವನರಿಯದೆ ಅಹಂಕಾರದಿಂ ಲಘುವಾದಿರಿ. ಪರಧನ ಪರಸ್ತ್ರೀ ಪರಕ್ಷೇತ್ರಕ್ಕೆ ಆಸೆಮಾಡಿ ಲಘುವಾದಿರಿ ನಿರಾಶಸಂಪೂರ್ಣರು ಶಿವಜ್ಞಾನಸಂಪನ್ನರು ಎಮ್ಮ ಮಾಹೇಶ್ವರರು ಇಂತಹ ಮಾಹೇಶ್ವರರಿಂಗೆ ಶಿವಜ್ಞಾನವ ಕರುಣಿಸುವ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. ವೈರಾಗ್ಯದಲ್ಲಿ ಗುರುವೆ? ನೀವು ಆಶಾಬದ್ಧರು, ನಿರಾಶಾಸಂಪೂರ್ಣರು ಎಮ್ಮ ಸದ್ಭಕ್ತರು. ಇಂತಹ ಭಕ್ತದೇಹಿಕನಪ್ಪ ದೇವ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ವೈರಾಗ್ಯದಲ್ಲಿ ಗುರು ಕಾಣಿರೆ. ಇದು ಕಾರಣ, ನಿತ್ಯದಲ್ಲಿ, ಸತ್ಯದಲ್ಲಿ, ಅಷ್ಟಮಹದೈಶ್ವರ್ಯದಲ್ಲಿ ದೀಕ್ಷೆಯಲ್ಲಿ, ಸ್ವಾನುಭಾವದಲ್ಲಿ, ಜ್ಞಾನದಲ್ಲಿ ವಿದ್ಯೆಯಲ್ಲಿ, ಬುದ್ಧಿಯಲ್ಲಿ, ವೈರಾಗ್ಯದಲ್ಲಿ, ಮಾತಾಪಿತರಲ್ಲಿ ಉಪಮಾತೀತನಪ್ಪ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. `ನಾಸ್ತಿ ತತ್ತ್ವಂ ಗುರೋಃ ಪರಂ' ಎಂದುದಾಗಿ, ಮಹಾಘನತರವಪ್ಪ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. ಲಲಾಟಲೋಚನಂ ಚಾಂದ್ರೀಂ ಕಲಾಮಪಿ ಚ ದೋದ್ರ್ವಯಂ ಅಂತರ್ನಿಧಾಯ ವರ್ತೇ[s]ಹಂ ಗುರುರೂಪೋ ಮಹೇಶ್ವರಿ ಎಂದುದಾಗಿ ಪರಶಿವನೇ ಗುರು, ಶ್ರೀಗುರುವೇ ಪರಶಿವನು. ಇಂತಹ ಮಹಾಸದ್ಗುರುವಪ್ಪ ಪರಶಿವಮೂರ್ತಿ ಕಾರುಣ್ಯವ ಮಾಡಿ, ಸದ್ಭಕ್ತಿಪದವ ತೋರಿದ ಎಮ್ಮ ಗಣನಾಥದೇವರೇ ಗುರು ಕಾಣಿರೆ. ಇದು ಕಾರಣ, ಶರಣಮೂರ್ತಿ ಶ್ರೀಗುರು. ಶ್ರೀಗುರು ಲಿಂಗ ಜಂಗಮ ಒಂದೆಯಾಗಿ ಶ್ರೀಗುರುವೇ ಗುರು, ಉಳಿದದ್ದೆಲ್ಲಾ ಲಘು. ಪರಶಿವಲಿಂಗವೇ ಗುರು, ಉಳಿದವೆಲ್ಲವೂ ಲಘು. ಜಂಗಮವೇ ಗುರು, ಉಳಿದವೆಲ್ಲವೂ ಲಘು. ಇದನರಿದು ಶ್ರೀಗುರುವನೇ ನಂಬುವುದು. ತನು ಮನ ಧನವನರ್ಪಿಸುವುದು, ನಿರ್ವಂಚಕನಾಗಿ ನಿರುಪಾಧಿಕನಾಗಿ ನಿರಾಶಾಸಂಪೂರ್ಣನಾಗಿ, ಧ್ಯಾನಿಸಿ ಪೂಜಿಸಿ ಸದ್ಭಕ್ತಿಯಿಂ ವರ್ತಿಸಿ ಪ್ರಸಾದವ ಪಡೆದು ಮುಕ್ತನಪ್ಪುದಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಆದಿ ಅನಾದಿಯೆಂಬ (ಯೆಂಬುದ?) ಅಂತರಾತ್ಮನಲ್ಲಿ ತಿಳಿಯಲರಿಯದೆ ಆದಿ ದೈವವೆಂದು ಬರಿಯ ಬಹಿರಂಗದ ಬಳಕೆಯನೆ ಬಳಸಿ, ಅನ್ಯ ದೈವಂಗಳನಾರಾಧಿಸಿ ಕೆಡುತ್ತಿಪ್ಪರು ನೋಡಾ. ಅದಕೆ ತಪ್ಪೇನು, ಮಕ್ಕಳಿಗೆ ತಮ್ಮ ಮಾತೆಯೇ ದೈವ. ಮಾತೆಗೆ ತನ್ನ ಪುರುಷನೆ ದೈವ, ಪುರುಷಂಗೆ ತನ್ನ ಪ್ರಭುವೆ ದೈವ. ಪ್ರಭುವಿಗೆ ತನ್ನ ಪ್ರಧಾನನೆ ದೈವ, ಪ್ರಧಾನಂಗೆ ತನ್ನ ರಾಯನೆ ದೈವ. ರಾಯಂಗೆ ತನ್ನ ಲಕ್ಷ್ಮಿಯೆ ದೈವ, ಲಕ್ಷ್ಮಿಗೆ ತನ್ನ ವಿಷ್ಣುವೆ ದೈವ. ವಿಷ್ಣುವಿಗೆ ತನ್ನ ರುದ್ರನೆ ದೈವ, ಆ ರುದ್ರಂಗೆ ತನ್ನ ಈಶ್ವರನೆ ದೈವ. ಈಶ್ವರಂಗೆ ತನ್ನ ಸದಾಶಿವನೆ ದೈವ, ಸದಾಶಿವಂಗೆ ತನ್ನ ಸರ್ವಗತ ಶಿವನೆ ದೈವ. ಸರ್ವಗತ ಶಿವನಿಗೆ ಆಕಾಶಮಹಿಪತಿಯೆಂಬ ಮಹಾಲಿಂಗಕ್ಕೆ ಆದಿ ದೇವರುಳ್ಳಡೆ ಹೇಳಿರೆ, ಇಲ್ಲದಿರ್ದಡೆ ಸುಮ್ಮನೆ ಇರಿರೆ. ಇದು ಕಾರಣ ಷಡುದರುಶನದ ಚರಾಚರಾದಿಗಳೆಲ್ಲರೂ ತಮ ತಮಗಿಷ್ಟ ಕಾಮ್ಯವ ಕೊಡುವುದಕ್ಕೆ ವರವುಳ್ಳ ದೇವರೆಂದು ಬೆರವುತ್ತಿಹರು. ಅದಕ್ಕೆ ತಪ್ಪೇನು ಅವರಿಗಪ್ಪಂಥ, ವರವೀವುದಕ್ಕೆ ಸತ್ಯವುಳ್ಳವನಹುದು. ಆದಡೇನು, ಪ್ರಾಣಕ್ಕೆ ಪರಿಣಾಮವ ಕೊಡಲರಿಯವು. ಅವರ ಕೈಯಲ್ಲಿ ಆರಾಧಿಸಿಕೊಂಬ ದೈವಂಗಳೆಲ್ಲವು. ಪೃಥ್ವಿ ಅಪ್ಪು ತೇಜ ವಾಯು ಆಕಾಶ ಮನವೆಂಬಾರರ ಹಂಗಿನಲ್ಲಿ ಸಿಕ್ಕಿ, ವಿಭೂತಿಯನ್ನಿಟ್ಟು, ರುದ್ರಾಕ್ಷೆಯಂ ತೊಟ್ಟು ಜಪತಪ ಹೋಮ ನೇಮಂಗಳ ಮಾಡಿ ಮಾರಣ ಮೋಹನ ಸ್ತಂಭನ ಉಚ್ಚಾಟನ ಅಂಜನ ಸಿದ್ಧಿ, ಘುಟಿಕಾ ಸಿದ್ಧಿ, ಮಂತ್ರಸಿದ್ಧಿ, ದೂರದೃಷ್ಟಿ ದೂರ ಶ್ರವಣ, ಕಮಲದರ್ಶನ, ತ್ರಿಕಾಲಜ್ಞಾನ, ಪರಕಾಯಪ್ರವೇಶವೆಂಬ ಅಷ್ಟಮಹಾಸಿದ್ಧಿಗಳಂ ಲಿಂಗದಲ್ಲಿ ವರಂಬಡೆದು ತಮ್ಮ ಬೇಡಿದವರಿಗೆ ಕೊಟ್ಟು ತಮ್ಮಿಂದ ಹಿರಿಯರಿಗೆ ನಮಸ್ಕರಿಸಿ, ತಮ್ಮಿಂದ ಕಿರಿಯರಿಗೆ ದೇವರೆಂದು ಬೆರವುತ್ತಿಹರು. ಕಿರಿದುದಿನ ಅವರ ದೇವರೆನ್ನಬಹುದೆ ? ದೇಹಕೇಡಿಗಳ ಸತ್ಯರೆಂದೆನಬಹುದೆ ? ಅಸತ್ಯದಲ್ಲಿ ಅಳಿದವರ ಭಕ್ತರೆಂದೆನಬಹುದೆ ? ಬಹುರೂಪಿನ ಕಪಟಿಗಳ ನಿತ್ಯರೆನಬಹುದೆ ? ದಿನದಿನಕ್ಕೆ ಸತ್ತು ಸತ್ತು ಹುಟ್ಟುವವರ. ಅದೆಂತೆಂದಡೆ: ಬ್ರಹ್ಮನ ಜಾವವೊಂದಕ್ಕೆ ಒಬ್ಬ ಇಂದ್ರನಳಿವ ವಿಷ್ಣುವಿನ ಜಾವವೊಂದಕ್ಕೆ ಒಬ್ಬ ಬ್ರಹ್ಮನಳಿವ ರುದ್ರನ ಜಾವವೊಂದಕ್ಕೆ ಒಬ್ಬ ವಿಷ್ಣುವಳಿವ ಈಶ್ವರನ ಜಾವವೊಂದಕ್ಕೆ ಒಬ್ಬ ರುದ್ರನಳಿವ ಸದಾಶಿವನ ಜಾವವೊಂದಕ್ಕೆ ಒಬ್ಬ ಈಶ್ವರನಳಿವ ಸರ್ವಗತನ ಜಾವವೊಂದಕ್ಕೆ ಒಬ್ಬ ಸದಾಶಿವನಳಿವ ಲಿಂಗ ಶರಣರ ಒಂದು ನಿಮಿಷಕ್ಕೆ ಒಬ್ಬ ಸರ್ವಗತನಳಿವ ಲಿಂಗ ಶರಣರಿಗೆ ಅಳಿವುಳ್ಳಡೆ ಹೇಳಿರೆ ? ಇಲ್ಲದಿರ್ದಡೆ ಸುಮ್ಮನಿರಿರೆ. ಅಂತಪ್ಪ ಮಹಾಲಿಂಗವನು ಶರಣರನು ಅರಿಯದೆ ಷಡುದೇವತೆಗಳು ಮುಖ್ಯವಾದ ಮನು ಮುನಿ ದೇವ ದಾನವ ಮಾನವರೆಲ್ಲರೂ ಆರಿಸಿ ತೊಳಲಿ ಬಳಲುತ್ತಿಪ್ಪರು. ಅದು ಹೇಗೆಂದಡೆ: ಬ್ರಹ್ಮವೇದದಲ್ಲರಸುವನು. ವಿಷ್ಣು ಪೂಜೆಯಲ್ಲರಸುವನು. ರುದ್ರ ಜಪದಲ್ಲರಸುವನು. ಈಶ್ವರ ನಿತ್ಯನೇಮದಲ್ಲರಸುವನು. ಸದಾಶಿವನು ನಿತ್ಯ ಉಪಚಾರದಲ್ಲರಸುವನು. ಸರ್ವಗತ ಶೂನ್ಯದಲ್ಲರಸುವನು. ಗೌರಿ ತಪದಲ್ಲರಸುವಳು, ಗಂಗೆ ಉಗ್ರದಲ್ಲರಸುವಳು. ಚಂದ್ರ ಸೂರ್ಯರು ಹರಿದರಸುವರು. ಇಂದ್ರ ಮೊದಲಾದಷ್ಟದಿಕ್ಪಾಲಕರು ಆಗಮ್ಯದಲ್ಲರಸುವರು ಸಪ್ತ ಮಾತೃಕೆಯರು `ಓಂ ಪಟು ಸ್ವಾಹಾ' ಎಂಬ ಮಂತ್ರದಲ್ಲರಸುವರು. ಸತ್ಯಋಷಿ ದಧೀಚಿ ಗೌತಮ ವಶಿಷ* ವಾಲ್ಮೀಕಿ ಅಗಸ್ತ್ಯ ವಿಶ್ವಾಮಿತ್ರ ಇವರು ಮೊದಲಾದ ಸಪ್ತಋಷಿಯರುಗಳೆಲ್ಲಾ ತಪ, ಯೋಗ, ಆಗಮಂಗಳಲ್ಲಿ ಅರಸುವರು. ಇಂತಿವರೆಲ್ಲರಿಗೆಯೂ ಸಿಕ್ಕಿಯೂ ಸಿಕ್ಕದ ಘನವು ಶುಕ್ಲ ಶೋಣಿತವಿಲ್ಲದ ಕಾಮಿ, ಒಡಲಿಲ್ಲದ ರೂಪು, ತಲೆಯಿಲ್ಲದ ಗಜ, ಬಾಲವಿಲ್ಲದ ಸಿಂಹ, ನಿದ್ರೆಯಿಲ್ಲದ ನಿರಾಳ. ಇಂತೀ ಭೇದಮಂ ಭೇದಿಸಿ ನೋಡಬಲ್ಲಡೆ ಕಣ್ಣ ಮೇಲೆ ಕಣ್ಣುಂಟು. ಮತ್ತಾ ಕಣ್ಣ ತೆರೆದು ಅಮೃತಕಾಯದೃಷ್ಟಿಯಲ್ಲಿ ನೋಡಿದಡೊಂದೂಯಿಲ್ಲ. ನಮ್ಮ ಗುಹೇಶ್ವರ ಲಿಂಗವು ಬಚ್ಚಬರಿಯ ಬಯಲು ನಿಶ್ಚಿಂತ ನಿರಾಳನು
--------------
ಅಲ್ಲಮಪ್ರಭುದೇವರು
ಹರಿಹರ ಬ್ರಹ್ಮಾದಿಗಳು ಸರಿಯಿಲ್ಲವೆಂದು ಹೇಳುವ ಅಣ್ಣಗಳು ನೀವು ಕೇಳಿರೊ. ಹರಿಹರ ಬ್ರಹ್ಮಾದಿಗಳೊಳಗೆ ಸರಿಯಾಗಿ ಬಂದು, ನಿಮ್ಮ ಅಂತರಂಗದೊಳಗೆ ನಿಂತ ಕಾರಣದಿಂದಾಗಿ, ಪೃಥ್ವಿ ಅಪ್ಪು ತೇಜ ವಾಯು ಆಕಾಶ ಸ್ವರ್ಗ ಮತ್ರ್ಯ ಪಾತಾಳ ಈರೇಳು ಭುವನ ಹದಿನಾಲ್ಕು ಲೋಕ, ನಾಲ್ಕು ವರ್ಣ, ಹದಿನೆಂಟು ಜಾತಿ, ನೂರೊಂದು ಕುಲದವರಾದರು. ಭಕ್ತರ ಆಧಾರದಲಿ ನಾವು ಆದಿವಿ, ನೀವು ಆದಿರಿ. ಅದು ಎಂತೆಂದರೆ : ಒಂಕಾರ ಪರಬ್ರಹ್ಮನೆಂಬ ವಿಪ್ರನ ಗರ್ಭದಲ್ಲಿ ಹುಟ್ಟಿದ ನಕಾರ ಬ್ರಹ್ಮನೆ ಪೃಥ್ವಿತತ್ವವಾದ, ಮಕಾರ ವಷ್ಣುವೆ ಅಪ್ಪುತತ್ವವಾದ. ಶಿಕಾರ ರುದ್ರನೆ ತೇಜತತ್ವವಾದ, ವಕಾರ ಈಶ್ವರನೆ ವಾಯುತತ್ವವಾದ. ಯಕಾರ ಸದಾಶಿವನೆ ಆಕಾಶ ತತ್ವವಾದ ಅದು ಎಂತೆಂದರೆ : ನಕಾರ ಬ್ರಹ್ಮ , ಮಕಾರ ವಿಷ್ಣು , ಶಿಕಾರ ರುದ್ರ. ಮೂವರು ತ್ರಿಮೂರ್ತಿಗಳು ಕೂಡಲಿಕೆ ಈಶ್ವರನೆಂಬುದೊಂದು ವಿಪ್ರವರ್ಣವಾಯಿತು ಕಾಣಿರೊ. ಆತನ ಸದ್ಯೋಜಾತಮುಖದಲ್ಲಿ ಬ್ರಾಹ್ಮಣ ಹುಟ್ಟಿದ. ಅವರ ಅಂಗದಲ್ಲಿ ಪ್ರಸಾದಲಿಂಗವಾದ, ಶಿಖೆಯಲ್ಲಿ ವಿಷ್ಣುಲಿಂಗವಾದ, ಮನೆಯಲ್ಲಿ ಸ್ಫಟಿಕ ವರ್ಣದ ಪಟ್ಟಿಕೇಶ್ವರನೆಂಬ ಲಿಂಗವಾದ. ಆತನ ಭುಜದಲ್ಲಿ ಕ್ಷತ್ರಿಯ ಹುಟ್ಟಿದ. ಅವರ ಅಂಗದಲ್ಲಿ ಪ್ರಾಣಲಿಂಗವಾದ, ಶಿಖೆಯಲ್ಲಿ ವಿಷ್ಣುಲಿಂಗವಾದ, ಮನೆಯಲ್ಲಿ ಶ್ವೇತವರ್ಣದ ರಾಮನಾಥಲಿಂಗವಾದ, ಆತನ ಉದರದಲ್ಲಿ ವೈಶ್ಯ ಹುಟ್ಟಿದ ಅವರ ಅಂಗದಲ್ಲಿ ಪ್ರಾಣಲಿಂಗವಾದ, ಶಿಖೆಯಲ್ಲಿ ವಿಷ್ಣುಲಿಂಗವಾದ, ಮನೆಯಲ್ಲಿ ಶ್ಯಾಮವರ್ಣದ ನಗರೇಶ್ವರಲಿಂಗವಾದ. ಆತನ ಪಾದದಲ್ಲಿ ಶೂದ್ರ ಹುಟ್ಟಿದ. ಅವರ ಅಂಗದಲ್ಲಿ ಪ್ರಾಣಲಿಂಗವಾದ ಶಿಖೆಯಲ್ಲಿ ವಿಷ್ಣುಲಿಂಗವಾದ, ಮನೆಯಲ್ಲಿ ನೀಲವರ್ಣದ ಕಲ್ಲಿನಾಥಲಿಂಗವಾದ. ಇಂತೀ ನಾಲ್ಕುವರ್ಣ ಹದಿನೆಂಟುಜಾತಿ ನೂರೊಂದು ಕುಲದವರು ಅಂತರಂಗದ ಒಳಹೊರಗೆ ಹರಿಹರ ಬ್ರಹ್ಮಾದಿಗಳು ಪೂಜೆಗೊಂಬುವ ದೇವರು ತಾವೆ ಆದರು, ಪೂಜೆ ಮಾಡುವ ಭಕ್ತರು ತಾವೆ ಆದರು. ಅದು ಎಂತೆಂದರೆ : ನಿಮ್ಮ ತಾಯಿಗರ್ಭದಲ್ಲಿ ಶುಕ್ಲ ಶೋಣಿತಗಳು ಎರಡು ಕೂಡಿ ಅಕ್ಷಮೂರ್ತಿಯಾದ. ಆತ್ಮದೊಳಗೆ ಒಂಕಾರ ಪರಬ್ರಹ್ಮವೆಂಬ .....(ಒಂದು ಹಾಳೆ ಕಳೆದಿದೆ) ನರರು ಸುರರು ತೆತ್ತೀಸಕೋಟಿ ದೇವತೆಗಳಿಗೆಲ್ಲ ಪೂಜೆ ಮಾಡುವ ಲಿಂಗ ಒಂದೆಯೆಂದು ಇಕ್ಕುವೆನು ಮುಂಡಿಗೆಯ. ಇದನೆತ್ತುವರುಂಟೇನು, ದೇವಧ್ವಜ ಮೃತ್ಯುಂಜಯನ ಭಾವದೊಲ್ಲಭ ಮುದ್ದನೂರೇಶಾ ?
--------------
ಸರ್ವೇಶ್ವರಲಿಂಗ
-->