ಅಥವಾ

ಒಟ್ಟು 5 ಕಡೆಗಳಲ್ಲಿ , 4 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ಜಯ ನಿರುಪಮ ನಿರವಯ ನಿಷ್ಕಲ ಜಯ ಜಯ ನಿಶ್ಚಲ ನಿರ್ಮಲ ನಿರ್ಗುಣ ಜಯ ಜಯ ಪರಮ ನಿರಂಜನ ಸದ್ಗುರು ಮಹಾಂತ ಶರಣಾರ್ಥಿ. | ಪಲ್ಲ | ಸುಳ್ಳೆ ನಿರ್ಬೈಲೆನಿಸಿ ಮೆರೆದಿ ಸುಳ್ಳೆ ಮಹಾಬೈಲಾಗಿ ತೋರಿದಿ ಸುಳ್ಳೆ ಚಿದ್ಬೈಲವಾಗಿ ಸಾರಿದಿ ಸುಳ್ಳೆ ಪರಬ್ರಹ್ಮಾ ಸುಳ್ಳೆ ಪರಶಿವ ಚಿತ್ತಬ್ಥಿತ್ತಿಯು ಸುಳ್ಳೆ ಇಚ್ಛೆಯ ನೆನವಕೊನರಿಸಿ ಸುಳ್ಳೆ ಮನಘನವೃಕ್ಷ ಮಾಡಿದಿ ಮಹಾಂತ ಶರಣಾರ್ಥಿ. | 1 | ಸುಳ್ಳೆ ನೆಲ ಜಲ ಅಗ್ನಿ ವಾಯು ಸುಳ್ಳೆ ಗಗನಾತ್ಮಾರ್ಕ ಚಂದ್ರಮ ಸುಳ್ಳೆ ತಾರಕ ಕಠೋರ ಮಹಾಮಹತ್ವಣುವಿಗಣು ಮಾಯೆ ಸುಳ್ಳೆ ಬೀಜದ ಸಸಿಯ ಫಲರಸ ಸುಳ್ಳೆ ಶೋಣಿತ ಶುಕ್ಲ ಶರೀರ ಸುಳ್ಳೆ ಹಮ್ಮು ಮತ್ತಾಶೆ ಮಾಡಿದೆ ಮಹಾಂತ ಶರಣಾರ್ಥಿ. | 2 | ಸುಳ್ಳೆ ತ್ರಿಜಗ ಸಚರಾಚರಗಳು ಸುಳ್ಳೆ ತನ್ನನು ತಾನೆ ಎಂಬುದು ಸುಳ್ಳೆ ಕುಲ ಛಲ ಸುಳ್ಳೆ ಮತಿ ತತಿ ಸುಳ್ಳೆ ವ್ರತಶೀಲಾ ಸುಳ್ಳೆ ತಾ ಸತ್ಕರ್ಮ ಸದ್ಗುಣ ಸುಳ್ಳೆ ತಾ ದುಷ್ಕರ್ಮ ದುರ್ಗುಣ ಸುಳ್ಳೆ ಸರ್ವವ್ಯಾಪಾರ ಮಾಡಿದೆ ಮಹಾಂತ ಶರಣಾರ್ಥಿ. | 3 | ಸುಳ್ಳೆ ಕಾಮ ಶೀಮ ನೇಮವು ಸುಳ್ಳೆ ಭೋಗ ತ್ಯಾಗ ಯೋಗವು ಸುಳ್ಳೆ ಜಪ ತಪ ಧ್ಯಾನ ಮೌನವು ಸುಳ್ಳೆ ಪದಫಲವು ಸುಳ್ಳೆ ಇಹಪರ ಪಾಪ ಪುಣ್ಯವು ಸುಳ್ಳೆ ಸ್ವರ್ಗ ನರಕ ಸುಖ ದುಃಖ ಸುಳ್ಳೆ ನೋವು ಸಾವು ಮಾಡಿದೆ ಮಹಾಂತ ಶರಣಾರ್ಥಿ. | 4 | ಸುಳ್ಳೆ ಭಾವದ ಭ್ರಮಿಗೆ ಭವಭವ ಸುಳ್ಳೆ ತಾ ತಿರುತಿರುಗಿ ಬಳಲುತೆ ಸುಳ್ಳೆ ಉತ್ಪತ್ತಿ ಸ್ಥಿತಿ ಲಯಂಗಳಾಗಿ ಮಣ್ಣಾಯಿತು ಸುಳ್ಳೆ ತಾ ಮಹಾಮೇರು ಮಹತ್ವವು ಸುಳ್ಳೆ ಈ ಮಾಯಾ ಗಮನವು ಸುಳ್ಳೆ ಶರಣರ ಐಕ್ಯ ಮಾಡಿದಿ ಮಹಾಂತ ಶರಣಾರ್ಥಿ | 5 | ಸುಳ್ಳೆ ಅಷ್ಟಾವರಣದರ್ಚನೆ ಸುಳ್ಳೆ ತಾ ಅಷ್ಟಾಂಗಯೋಗವು ಸುಳ್ಳೆ ಬೆಳಗಿನ ಬೆಳಗು ಅದ್ವೆ ೈತಾದಿ ನಿಜಮುಕ್ತಿ ಸುಳ್ಳೆ ಖರೇ ಮಾಡಿ ಸಲೆ ಕಾಡಿದಿ ಸುಳ್ಳೆ ಸುಳ್ಳೆನಿಸುತ್ತೆ ಹಬ್ಬಿದಿ ಸುಳ್ಳೆ ಆಟವನಾಡಿ ಮೆರೆಯುವ ಮಹಾಂತ ಶರಣಾರ್ಥಿ. | 6 | ಸುಳ್ಳೆ ತಾ ಶಿವ ಸುಳ್ಳೆ ನೀ ಗುರು ಸುಳ್ಳೆ ನಾ ಶಿಷ್ಯಾಗಿ ಈ ಭವಕರ ಸುಳ್ಳೆ ಲಿಂಗವ ಕಂಡು ಜಂಗಮತೀರ್ಥಪ್ರಸಾದ ಸುಳ್ಳೆ ಭಸ್ಮ ಶಿವೇಕ್ಷಮಣಿ ಮಂತ್ರ ಸುಳ್ಳೆ ಅನುಗೊಳಿಸ್ಯಾತ್ಮ ತತ್ವವ ಸುಳ್ಳೆ ಧ್ಯಾನವ ಹುಡುಕಿ ಮಾಡಿದಿ ಮಹಾಂತ ಶರಣಾರ್ಥಿ | 7 | ಸುಳ್ಳೆ ಹುಡುಕಿ ನಾ ನನ್ನ ಮರೆದೆ ಸುಳ್ಳೆ ಹುಡುಕಿ ನಾ ನಿನ್ನ ಅರಿದೆ ಸುಳ್ಳೆ ಹುಡುಕಿ ಮುಕ್ತಿ ಮೆರೆದೆನು ಸುಳ್ಳೆ ತಾನಾಯಿತು ಸುಳ್ಳೆ ಬಂದಿತು ಸುಳ್ಳೆ ನಿಂದಿತು ಸುಳ್ಳೆ ಹೊಂದಿತು ಸುಳ್ಳೆ ಹೋಯಿತು ಸುಳ್ಳೆ ಖರೆ ಮಾಡಿಸದೆ ಕಾಡಿದಿ ಮಹಾಂತ ಶರಣಾರ್ಥಿ | 8 | ಸುಳ್ಳೆ ಇಪ್ಪತ್ತೈದು ನಿಜಪದ ಸುಳ್ಳೆ ಹತ್ತೊಂಬತ್ತು ವಚನಗಳು ಸುಳ್ಳೆ ಈ ಪರಿವದ್ರ್ಥಿನೊಂಬತ್ತೆಂದೆನು ಹಾಡು ಸುಳ್ಳೆ ಹಾಡುವದಾಯ್ತು ಹಾಡು ಸುಳ್ಳೆ ಹದಿನೇಳ್ನೂರೈವತ್ತು ಸರ್ವಕೆ ಸುಳ್ಳೆ ತಿಳಿದರೆಡುಳ್ಳೆ ಮಾಡಿದಿ ಮಹಾಂತ ಶರಣಾರ್ಥಿ | 9 |
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ದಿನದಿನಕ್ಕೆ ಫಲರಸ ಬಲಿವಂತೆ ಮಾಡುವ ಕ್ರೀ ಸನ್ನದ್ಧನಾಗಿ, ಅರಿವ ಅರಿವು ಫಲರಸ ಬಲಿದು ಫಳವಾದಂತೆ ಕ್ರೀ ಜ್ಞಾನದಲ್ಲಿ ನಿಂದು, ಜ್ಞಾನ ಕ್ರೀಯನವಗವಿಸಿದಲ್ಲಿ, ಉಭಯನಾಮ ನಷ್ಟವಾಯಿತ್ತು, ಸದಾಶಿವಮೂರ್ತಿಲಿಂಗವನರಿತಲ್ಲಿ.
--------------
ಅರಿವಿನ ಮಾರಿತಂದೆ
ಪ್ರಾಣಲಿಂಗಿಯ ಯೋಗಸಂಬಂಧವೆಂತುಟೆಂದಡೆ : ಫಲರಸ ವರುಣನ ಕಿರಣ ಕೊಂಡಂತಿರಬೇಕು. ಪಯದೊಳಗಣ ನವನೀತದಂತಿರಬೇಕು. ವಾಯುವಿನ ಗಂಧದ ತೆರದಂತಿರಬೇಕು. ದೃಷ್ಟಿಯ ಚಿತ್ತದಂತಿರಬೇಕು. ಅಪ್ಪುವಿನ ಮೆಚ್ಚಿಕೆಯಂತಿರಬೇಕು. ಹೀಂಗೆ ಲಿಂಗದಲ್ಲಿ ಒಪ್ಪವಿಟ್ಟ ಶರಣಂಗೆ ಅರ್ಚನೆಯ ಮಾಡಿದಡೂ ಸರಿ, ಅರ್ಪಣದಲ್ಲಿ ಒಪ್ಪವಿಟ್ಟಡೂ ಸರಿ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಸಪ್ಪೆಯ ವ್ರತವೆಂಬುದ ನಾವರಿಯೆವು, ನೀವು ಹೇಳಿರಯ್ಯಾ. ಸರ್ವ ಫಲರಸ ಘೃತ ತೈಲ ಮಧುರ ವಿದಳಧಾನ್ಯ ಮುಂತಾದವಕ್ಕೆ ಎಲ್ಲಕ್ಕೂ ತಮ್ಮ ತಮ್ಮಲ್ಲಿಯ ರುಚಿ ಸಪ್ಪೆಯ ನೇಮವನೊಂದನೂ ಕಾಣೆ. ಇದ ನೀವೆ ಬಲ್ಲಿರಿ. ಸಪ್ಪೆ ಯಾವುದೆಂದಡೆ ಸುಖದುಃಖಂಗಳೆಂಬುದನರಿಯದೆ, ತನುವಾಡಿದಂತೆ ಆಡದೆ, ಮನ ಹರಿದಂತೆ ಹರಿಯದೆ, ಬಯಕೆ ಅರತು ಭ್ರಾಮಕ ಹಿಂಗಿ ಸರ್ವವಿಕಾರ ವಿಸರ್ಜನವಾಗಿ, ಹಿಂದಾದುದ ಮರೆದು ಮುಂದಕ್ಕೆ ಗತಿಯೆಂದು ಒಂದ ಕಾಣದೆ, ಹಿಂದು ಮುಂದೆಂದು ಒಂದನರಿಯದಿದ್ದುದೆ ಸಪ್ಪೆ. ಇದು ಅಂತರಂಗದ ವ್ರತ ಲವಣವ ಬಿಟ್ಟುದು ಬಹಿರಂಗ ಶೀಲ. ಇಂತೀ ಉಭಯವ್ರತ ಏಕವಾದಲ್ಲಿ ಸರ್ವಸಪ್ಪೆ ಸಂದಿತ್ತು ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ಸಪ್ಪೆಯ ವ್ರತ ಅರ್ಪಿತವಾಯಿತ್ತು.
--------------
ಅಕ್ಕಮ್ಮ
-->