ಅಥವಾ

ಒಟ್ಟು 58 ಕಡೆಗಳಲ್ಲಿ , 22 ವಚನಕಾರರು , 54 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಂದಡೆ; ಹೊನ್ನು ಹೆಣ್ಣು ಮಣ್ಣು ಹಿಡಿದು ನೆಟ್ಟನೆ ಭಕ್ತನಾಗಿ ನಿಲ್ಲಬೇಕು. ಸುಳಿದಡೆ; ಹೊನ್ನು ಹೆಣ್ಣು ಮಣ್ಣು ಬಿಟ್ಟು ನೆಟ್ಟನೆ ಜಂಗಮವಾಗಿ ಸುಳಿಯಬೇಕು. ನಿಂದು ಭಕ್ತನಲ್ಲದ, ಸುಳಿದು ಜಂಗಮವಲ್ಲದ ಉಭಯಭ್ರಷ್ಟರನೇನೆಂಬೆ ಗುಹೇಶ್ವರಯ್ಯಾ ?
--------------
ಅಲ್ಲಮಪ್ರಭುದೇವರು
ಅಕ್ಕಿ ಬೇಳೆ ಬೆಲ್ಲ ಉಪ್ಪು ಮೆಣಸು ಅಡಕೆ ಫಲ ರಸ ದ್ರವ್ಯ ಮುಂತಾದ ದ್ರವ್ಯಕ್ಕೆ ವ್ರತವೊ ? ಮುಟ್ಟುವ ತಟ್ಟುವ ಸೋಂಕುವ ಚಿತ್ತಕ್ಕೆ ವ್ರತವೊ ? ಇವು ಬಾಹ್ಯದಲ್ಲಿ ಮಾಡುವ ಸೌಕರಿಯವಲ್ಲದೆ ವ್ರತಕ್ಕೆ ಸಲ್ಲ. ವ್ರತವಾವುದೆಂದಡೆ ತನ್ನಯ ಸ್ವಪ್ನದಲ್ಲಿ ತನಗಲ್ಲದುದ ಕಂಡಡೆ, ತಾ ಮುಟ್ಟದುದ ಮುಟ್ಟಿದಡೆ, ತಾ ಕೊಳ್ಳದುದ ಕೊಂಡಡೆ, ಆ ಸೂಕ್ಷ್ಮತನುವಿನಲ್ಲಿ ಆ ತನುವಂ ಬಿಟ್ಟು ನಿಂದುದು ವ್ರತ. ಸ್ಥೂಲತನುವಿನಲ್ಲಿ ಸರ್ವರ ನಿಂದೆಗೊಡಲಾಗದೆ, ಮಾಡಿಕೊಂಡ ನೇಮಕ್ಕೆ ಕೇಡುಬಂದಲ್ಲಿ ಆ ಅಂಗಕ್ಕೆ ಓಸರಿಸದೆ ನಿಂದುದು ಆಚಾರ. ಇಂತೀ ಅಂತರಂಗದಲ್ಲಿ ವ್ರತ, ಬಹಿರಂಗದಲ್ಲಿ ಆಚಾರ, ಇಂತೀ ಉಭಯ ಸಿದ್ಭವಾಗಿ ನಡೆವುದೆ ವ್ರತ ಆಚಾರz ಇಂತಿವನರಿದು ಮರೆದಲ್ಲಿ, ತಾ ಮಾಡಿಕೊಂಡ ಕುತ್ತಕ್ಕೆ ಹಾಡಿ ಮದ್ದನರೆದಂತೆ, ಜಗಕ್ಕೆ ಭಕ್ತನಾಗಿ ಆತ್ಮಂಗೆ ಅನುಸರಣೆಯಾದಲ್ಲಿ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ಸಲ್ಲದ ನೇಮ.
--------------
ಅಕ್ಕಮ್ಮ
ಭಕ್ತನಾಗಿ ಹುಟ್ಟಿ ಮತ್ತೊಬ್ಬರಲ್ಲಿ ಬೇಡುವುದೆ ಕಷ್ಟ. ಹೊತ್ತು ಹೋರಿ ಭೂಮಿಯ ಅಗೆವಲ್ಲಿ ಮೊತ್ತದ ಜೀವಂಗಳು ಸತ್ತುದ ದೃಷ್ಟವ ಕಂಡಲ್ಲಿಯೆ ಮಾಡುವ ಮಾಟ ನಷ್ಟ. ಇದನರಿತು ವಿರಕ್ತರಾಗಿ ಹೋದಲ್ಲಿ, ಮತ್ತೊಬ್ಬರ ಅಪ್ಪಾ ಅಣ್ಣಾ ಎಂದು ಚಿತ್ತ ಕಲಕುವದು ಕಷ್ಟ. ಈ ಹೊತ್ತ ದೇಹಕ್ಕೆ ನಗೆಯ ಚಿತ್ತದ ಕಾಯಕ, ಇದನೊಪ್ಪುಗೊ, ಆತುರವೈರಿ ಮಾರೇಶ್ವರಾ.
--------------
ನಗೆಯ ಮಾರಿತಂದೆ
ಹೆಂಡಿರು_ಮಕ್ಕಳಿಗೆ ಕುಲದೈವ ಮನೆದೈವವಲ್ಲದೆ ಎನಗೆ ಕುಲದೈವ ಮನೆದೈವವಿಲ್ಲೆಂಬ ಭಂಡನ ಭಕ್ತಿಯ ಪರಿಯ ನೋಡಾ. [ಆ] ಯುಕ್ತಿಶೂನ್ಯಂಗೆ ಮುಂದೆ ದೃಷ್ಟವ ಹೇಳಿಹೆನು: ತನ್ನ ಹೆಂಡತಿ ಮತ್ತೊಬ್ಬನ ಮೆಚ್ಚಿಕೊಂಡು ಹೋಗುತ್ತಿರೆ, ಹೋದರೆ ಹೋಗಲಿ ಎಂದು ಸೈರಿಸಬಲ್ಲಡೆ ತಾನವರೊಳಗಲ್ಲ. ಅಕಟಕಟಾ ಲೌಕಿಕಕ್ಕೆ ಆಜ್ಞೆಯುಂಟು ಪಾರಮಾರ್ಥಕ್ಕೆ ಆಜ್ಞೆಯಿಲ್ಲವೆ ! ಇದು ಕಾರಣ_ಕೂಡಲಚೆನ್ನಸಂಗಯ್ಯಾ ಭಕ್ತನಾಗಿ ಭವಿಯ ಬೆರಸುವ ಅನಾಚಾರಿಯ ತೋರದಿರಯ್ಯಾ.
--------------
ಚನ್ನಬಸವಣ್ಣ
ಅಹಂಕಾರವರತು ಗುರುವಾಗಿ, ಜಗವರತು ಲಿಂಗವಾಗಿ, ತ್ರಿವಿಧವರತು ಜಂಗಮವಾಗಿ, ಸಕಲೇಂದ್ರಿಯದ ಲಂಪಟವರತು ಭಕ್ತನಾಗಿ ಸಂಸಾರವೆಂಬ ಗಡಬಡೆಯಲ್ಲಿ ಸಿಲುಕದೆ, ಆವ ಸ್ಥಲದಲ್ಲಿ ನಿಂದು ನೋಡಿದಡೂ ಭಾವಶುದ್ಧವಾಗಿ ಗುರುವಿಂಗೆ ಗುರುವಾಗಿ, ಲಿಂಗಕ್ಕೆ ಲಿಂಗವಾಗಿ ಜಂಗಮಕ್ಕೆ ಜಂಗಮವಾಗಿ ಭಕ್ತರ ಯುಕ್ತಿಯ ಮಾರಿಕೊಂಡಿಪ್ಪ ಸದ್ಭಕ್ತ ಕಾಲಾಂತಕ ಬ್ಥೀಮೇಶ್ವರಲಿಂಗವು ತಾನೆ.
--------------
ಡಕ್ಕೆಯ ಬೊಮ್ಮಣ್ಣ
ಬಿರುಗಾಳಿ ಬೀಸಿ ಮರ ಮುರಿವಂತಹ ಸುಳುಹ ಸುಳಿಯದೆ, ತಂಗಾಳಿ ಪರಿಮಳದೊಡಗೂಡಿ ಸುಳಿವಂತೆ ಸುಳಿಯಬೇಕು. ಸುಳಿದಡೆ ನೆಟ್ಟನೆ ಜಂಗಮವಾಗಿ ಸುಳಿಯಬೇಕು. ನಿಂದಡೆ ನೆಟ್ಟನೆ ಭಕ್ತನಾಗಿ ನಿಲ್ಲಬೇಕು. ಸುಳಿದು ಜಂಗಮವಾಗಲರಿಯದ, ನಿಂದು ಭಕ್ತನಾಗಲರಿಯದ ಉಭಯಭ್ರಷ್ಟರನೇನೆಂಬೆ ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ತಂಗಾಳಿ ಪರಿಮಳದೊಡಗೂಡಿ ಸುಳಿವಂತೆ, ಆ ಸುಳುಹಾಗಿ ಸುಳಿಯಬೇಕು. ನಿಂದಡೆ ನೆಟ್ಟನೆ ಭಕ್ತನಾಗಿ ನಿಂದು ಸಹಜ ಮಾಟವ ಮಾಡಬೇಕು. ಸುಳಿದಡೆ ನೆಟ್ಟನೆ ಪರಮಜಂಗಮವಾಗಿ ಸುಳಿಯಬೇಕು. ನಿಂದು ಭಕ್ತನಾಗಲರಿಯದ, ಸುಳಿದು ಜಂಗಮವಾಗಲರಿಯದ ಉಭಯಭ್ರಷ್ಟರನೇನೆಂಬೆನಯ್ಯಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಭಕ್ತ ಜಂಗಮದ ಸಕೀಲಸಂಬಂಧವೆಂತಿಪ್ಪುದೆಂಬುದನಾರು ಬಲ್ಲರಯ್ಯಾ ? ಅದು ಉಪಮಾತೀತ ! ಭಕ್ತನೊಳಗೆ ಜಂಗಮವಡಗಿದಡೆ ಭಕ್ತನಾಗಿ ಕ್ರಿಯಾನಿಷ್ಪತ್ತಿಯಲ್ಲಿ ಸಮರಸಸುಖಿಯಾಗಿಪ್ಪ ನೋಡಯ್ಯಾ. ಜಂಗಮದೊಳಗೆ ಭಕ್ತನಡಗಿದಡೆ, ಕರ್ತೃಭೃತ್ಯಭಾವವಳಿದು ಸಂಬಂಧ ಸಂಶಯದೋರದೆ, ಅರಿವರತು ಮರಹು ನಷ್ಟವಾಗಿ, ಸ್ವತಂತ್ರ ಶಿವಚಾರಿಯಾಗಿರಬೇಕು ನೋಡಯ್ಯಾ. ಈ ಉಭಯಭಾವಸಂಗದ ಪರಿಣಾಮವ ಕಂಡು ಕೂಡಲಚೆನ್ನಸಂಗಯ್ಯನಲ್ಲಿ ಬಸವಪ್ರಭುದೇವರ ಶ್ರೀಪಾದಕ್ಕೆ ನಮೋ ನಮೋ ಎಂದು ಬದುಕಿದೆನು
--------------
ಚನ್ನಬಸವಣ್ಣ
ಬೇಡಿ ತಂದು ದಾಸೋಹವ ಮಾಡುವನ್ನಬರ, ಪಂಗುಳನ ಪಯಣದಂತೆ. ಯಾಚಕತ್ವ ಭಕ್ತಂಗುಂಟೆ ? ಭಕ್ತನಾಗಿ ಹುಟ್ಟಿ ಭಕ್ತರ ಬೇಡಿತಂದು ಮಾಡಿ ಮುಕ್ತಿಯನರಸಲುಂಟೆ ? ಅದು ಅಮರೇಶ್ವರಲಿಂಗವ ಮುಟ್ಟದೆ ಇತ್ತಲೆ ಉಳಿಯಿತ್ತು.
--------------
ಆಯ್ದಕ್ಕಿ ಮಾರಯ್ಯ
ರಾಜ್ಯ ಹೋದಲ್ಲಿ ರಾಯತನ ಉಂಟೆ? ಪೂಜೆ ಅಡಗಿದಲ್ಲಿ ಪುಣ್ಯದ ಹಂಗುಂಟೆ? ಮಾಟಕೂಟ ನಷ್ಟವಾದಲ್ಲಿ ಮಹಾಮನೆಯ ಎಡೆಯಾಟವುಂಟೆ? ಸಟ್ಟೆಯನೊಪ್ಪಿಸಿದವಂಗೆ ಮತ್ತೆ ಒಪ್ಪದ ಚೀಟುಂಟೆ? ಭಕ್ತನಾಗಿ ಮಾಡಿ ಕಂಡೆ, ಭೃತ್ಯನಾಗಿ ಕಾಯಿದು ಕಂಡೆ ಮತ್ತೆ ನೀ ನೀವೊಪ್ಪಿ ಕೊಟ್ಟಿರಿ. ಎನ್ನಂಗದಲ್ಲಿ ಮತ್ರ್ಯರೂಪನ ರೂಪ ನಿಮಗೆ ಒಪ್ಪಿಸಿದೆಯೆಂಬುದಕ್ಕೆ ಮೊದಲೇ ಬಚ್ಚಬಯಲಾಯಿತ್ತು. ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಭಕ್ತನಾಗಿ ಲಿಂಗ ಜಂಗಮವ ಪೂಜಿಸಬೇಕು. ಭಕ್ತನಾಗಿ ತನ್ನ ತಾ ಪೂಜಿಸಿಕೊಂಬುದು ಎಂತಯ್ಯಾ ಸ್ವಾಮಿಭೃತ್ಯಸಂಬಂಧವು ಎಂತಯ್ಯಾ ಪೂರುಸುವುದು ಕೂಡಲಸಂಗಮದೇವಾ, ಕಣ್ಣಕಟ್ಟಿ ಕನ್ನಡಿಯ ತೋರುವಂತೆ ! 185
--------------
ಬಸವಣ್ಣ
ಅಂದು ನೀ ಬಂದ ಬೆಂಬಳಿಯಲ್ಲಿ ನಾ ಬಂದೆ. ಅಂದಂದಿನ ಸಂದೇಹ ಹರಿಯಿತ್ತು. ನೀ ಭಕ್ತನಾಗಿ ನಾ ಜಂಗಮವಾಗಿ, ಗುಹೇಶ್ವರಲಿಂಗವೆಂಬುದಕ್ಕೆ ಅಂಗವಾಯಿತ್ತು.
--------------
ಅಲ್ಲಮಪ್ರಭುದೇವರು
ವಿಶ್ವಾಸದಿಂದ ಭಕ್ತನಾಗಿ, ಆ ವಿಶ್ವಾಸದೊಳಗಣ ನೈಷ್ಠೆಯಿಂದ ಮಹೇಶ್ವರನಾಗಿ, ಆ ನೈಷ್ಠೆಯೊಳಗಣ ಸಾವಧಾನದಿಂದ ಪ್ರಸಾದಿಯಾಗಿ, ಆ ಸಾವಧಾನದೊಳಗಣ ಸ್ವಾನುಭಾವದಿಂದ ಪ್ರಾಣಲಿಂಗಿಯಾಗಿ, ಆ ಸ್ವಾನುಭಾವದೊಳಗಣ ಅರಿವಿನಿಂದ ಶರಣನಾಗಿ, ಆ ಅರಿವು ನಿಜದಲ್ಲಿ ಸಮರಸಭಾವವನೈದಿ ನಿರ್ಭಾವಪದದೊಳು ನಿಂದ ಭೇದವೇ ಐಕ್ಯಸ್ಥಲ ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಶಿವ ಭಕ್ತನಾಗಿ ಮುಂದೆ ಬಂದು ಮಂದಿರವ ಕಟ್ಟಿದ, ಶಿವ ಜಂಗಮವಾಗಿ ಕರ್ತುರೂಪ ತಾಳಿ ಹಿಂದುಳಿದು ಬಂದ, ಉಭಯವು ಒಂದಾಗಿ ಜಗಹಿತಾರ್ಥವಾಗಿ ಬಂದ ಅಂದ, ಸದಾಶಿವಮೂರ್ತಿಲಿಂಗವು ತಾನೆ.
--------------
ಅರಿವಿನ ಮಾರಿತಂದೆ
ಲಿಂಗವನರಿಯರು ಲಿಂಗದ ಮುಖವನರಿಯರು. ಪೂಜಿಸಲರಿಯರು ಅರ್ಚಿಸಲರಿಯರು ಅರ್ಪಿಸಲರಿಯರು. ನಾನೇ ಭಕ್ತನು ನಾನೇ ಮಾಹೇಶ್ವರನು ನಾನೇ ಪ್ರಸಾದಿಯೆಂಬರು. ಶಿವಾಚಾರಪರಾಙ್ಮುಖರು ನೋಡಾ. ಶಿವ ಶಿವಾ, ಪ್ರಾಣಲಿಂಗಿ ಐಕ್ಯನೆಂಬುದು ಮಹಾಕ್ರೀ. ಅದನೆಂತೂ ಅರಿಯರು. ಗುರು ಲಿಂಗ ಜಂಗಮ ಒಂದೆಂಬುದನೂ ವೇದ ಶಾಸ್ತ್ರ ಆಗಮ ಪುರಾಣ ಪುರಾತನರ ನಡೆ ನುಡಿಯಿಂದರಿದು ಕ್ರೀಯನರಿದು ಕಾಲವನರಿದು ಮನ ವಂಚನೆಯಿಲ್ಲದೆ ಶಿವಲಿಂಗವ ಪೂಜಿಸಬೇಕು, ಸದ್ಭಕ್ತಿಯಿಂ ಭಕ್ತನಾಗಿ. `ನ ಗುರೋರಧಿಕಂ ನ ಗುರೋರಧಿಕಂ ಎಂಬುದನರಿದು ಪರಧನ ಪರಸ್ತ್ರೀ ಪರದೈವವ ತ್ಯಜಿಸಿ ತನು ಮನ ಧನದಲ್ಲಿ ವಂಚನೆಯಿಲ್ಲದೆ ಮನೋವಾಕ್ಕಾಯಶುದ್ಧನಾಗಿ ಅಷ್ಟವಿಧಾರ್ಚನೆ ಷೋಡಶೋಪಚಾರದಿಂ ಅರ್ಚಿಸಬೇಕು ಶ್ರೀಗುರುಲಿಂಗಕ್ಕೆ ಮಾಹೇಶ್ವರನಾಗಿ. ಜಂಗಮ ಪರಶಿವನೆಂದರಿದು ಭೋಗಮೂರ್ತಿ ಎಂದರಿದು ಮನೋವಾಕ್ಯಾಯಶುದ್ಧನಾಗಿ ಧನವಂಚನೆಯಿಲ್ಲದೆ ಸರ್ವಪದಾರ್ಥ ಸರ್ವಭೋಗಂಗಳನರ್ಪಿಸಿ ಜಂಗಮಲಿಂಗಾರ್ಚನೆಯಂ ಮಾಡಿ ಜಂಗಮಪ್ರಸಾದವಂ ಪಡೆದು ಪ್ರಸಾದವ ಭೋಗಿಸಿ ಪ್ರಸಾದಿಯಾಗಿ ಜಂಗಮಲಿಂಗಾರ್ಚನೆಯಂ ಮಾಡುವುದಯ್ಯಾ ಪ್ರಸಾದಿಯಾಗಿ. ಇಂತು ಭಕ್ತ ಮಾಹೇಶ್ವರ ಪ್ರಸಾದಿ ತನುವಿಡಿದು `ಏಕ ಮೂರ್ತಿಸ್ತ್ರಧಾ ಭೇದಾಃ ಎಂಬುದನರಿದು ಕ್ರಿಯೆಯಲ್ಲಿ ಕ್ರಿಯೆಯನರಿದು ತನುವಿಡಿದು ಸಕಲನಾಗಿ ನಡೆವ ಸ್ಥಲ ಈ ಮೂರು ಪ್ರಾಣಲಿಂಗಿ ಶರಣನೈಕ್ಯನೆಂಬುದು ಇವು ಮೂರುಸ್ಥಲ. ಮನವಿಡಿದು ನಡೆವುದು ನಿಷ್ಕಲಸ್ಥಲವನೊಂದುಮಾಡಿ ಏಕೀಭವಿಸಿ ನಡೆವುದು. ಇವು ಮೂರುಸ್ಥಲಕ್ಕೆ ನಿಷ್ಕ್ರಿಯಾಸಂಬಂಧ. ಈ ಮಹಾವರ್ಮವನೂ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ ನಿಮ್ಮ ಶರಣರೇ ಬಲ್ಲರು, ವಾಙ್ಮನೋತೀತರು ಉಪಮಾತೀತರು, ಘನ ಮಹಾ[ಕ್ರೀಯ].
--------------
ಉರಿಲಿಂಗಪೆದ್ದಿ
ಇನ್ನಷ್ಟು ... -->