ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ಶ್ರೀಶೈಲದ ಮಧ್ಯದಲ್ಲಿ ಒಂದು ಪರುಷರಸದ ಬಾವಿ ಹುಟ್ಟಿತ್ತು, ಆ ಬಾವಿಯೊಳಗೆ ಕಬ್ಬುನದ ಅದಿರು ಹುಟ್ಟಿ ಸಿದ್ಧರಸವ ನುಂಗಿತ್ತು. ಇದ್ದವನ ಸುದ್ದಿಯ ಸತ್ತವ ಹೇಳಿ, ಕಾಣದವ ಕೇಳಿ ಹೋದ, ಸದಾಶಿವಮೂರ್ತಿಲಿಂಗ ಬಚ್ಚಬರಿಯ ಬಯಲು.
--------------
ಅರಿವಿನ ಮಾರಿತಂದೆ
ಶ್ರೀಕರ ಬ್ರಹ್ಮಾದಿಗಳೇನು ಕಾರಣ ಯೋನಿ, ನಾನಾ ಭವಂಗಳಲಿ ಬಂದರಯ್ಯ. ಧ್ಯಾನ ಮೌನ ಸಮಾದ್ಥಿಕಾರಣದ ಸಮತೆಯನು ಭೇದಿಸಲು ಅರಿಯದೆ, ನಾನಾ ಭವಂಗಳ ಮಗ್ನವಾಗಿ, ಅನಾದಿ ಸಂಸಿದ್ಧ ಕಪಿಲಸಿದ್ಧಮಲ್ಲಿಕಾರ್ಜುನ ಆದಿಯಕ್ಷರ ಸಮತೆ ಸಮಗೂಡದು
--------------
ಸಿದ್ಧರಾಮೇಶ್ವರ
ಶೀಲವಂತರೆಲ್ಲ ಶೂಲದ ಹೆಣನೆಂಬೆ. ಕ್ರಿಯಸ್ಥರೆಲ್ಲ ಬೇಡಿಬಂದಿಕಾರರೆಂಬೆ. ವ್ರತಸ್ಥರೆಲ್ಲ ಢಾಲಿಬಂದಿಕಾರರೆಂಬೆ. ನೇಮಸ್ಥರೆಲ್ಲ ಆಳುಗಳೆಂಬೆ. ಲಿಂಗ ಇದ್ದವರಿಗೆ ಹೊಲೆಯರೆಂಬೆ. ಲಿಂಗವಿಲ್ಲದವರಿಗೆ ಉತ್ತಮರೆಂಬೆ. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಶರಣ ಸಕಾಯನೆಂಬೆನೆ ಸಕಾಯನಲ್ಲ. ಅಕಾಯನೆಂಬೆನೆ ಅಕಾಯನಲ್ಲ. ಅದೇನು ಕಾರಣವೆಂದಡೆ; ಶಿವಕಾಯವಾದ ನಿಜಬೋಧವೆ ಕಾಯವಾದ ಕಾರಣ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನ ಶರಣನು, ಪರಕಾಯರೂಪನು.
--------------
ಸ್ವತಂತ್ರ ಸಿದ್ಧಲಿಂಗ
ಶ್ರೀಗುರುಸ್ವಾಮಿ ಕರುಣಿಸಿಕೊಟ್ಟ ಇಷ್ಟಬ್ರಹ್ಮವೇ ಬಸವಣ್ಣನೆನಗೆ. ಆ ಬಸವಣ್ಣನೆ ನವಲಿಂಗಸ್ವರೂಪವಾಗಿಪ್ಪನಯ್ಯ. ಅದು ಹೇಗೆಂದಡೆ- ತನುತ್ರಯಂಗಳಲ್ಲಿ ಇಷ್ಟ ಪ್ರಾಣ ಭಾವವೆಂದು ಇಂದ್ರಿಯಂಗಳಲ್ಲಿ ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗವೆನಿಸಿಪ್ಪನಯ್ಯ. ಅದು ಹೇಗೆಂದಡೆ- ನಾಸಿಕದಲ್ಲಿ ಅಂಗಲಿಂಗಸಂಗ ಚತುರ್ವಿಂಶತಿ ಸ್ವರೂಪನೊಳಕೊಂಡು ಆಚಾರಲಿಂಗವಾಗಿ ಎನ್ನ ನಾಸಿಕದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಜಿಹ್ವೆಯಲ್ಲಿ ಅಂಗಲಿಂಗಸಂಗ ಅಷ್ಟಾದಶ ಸ್ವರೂಪನೊಳಕೊಂಡು ಗುರುಲಿಂಗವಾಗಿ ಎನ್ನ ಜಿಹ್ವೆಯಲ್ಲಿ ಇಂಬುಗೊಂಡನಯ್ಯ ಬಸವಣ್ಣ. ನೇತ್ರದಲ್ಲಿ ಅಂಗಲಿಂಗಸಂಗ ಷೋಡಶ ಸ್ವರೂಪನೊಳಕೊಂಡು ಶಿವಲಿಂಗವಾಗಿ ಎನ್ನ ನೇತ್ರದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ತ್ವಕ್ಕಿನಲ್ಲಿ ಅಂಗಲಿಂಗಸಂಗ ಸಪ್ತಾದಶ ಸ್ವರೂಪನೊಳಕೊಂಡು ಜಂಗಮಲಿಂಗವಾಗಿ ಎನ್ನ ತ್ವಕ್ಕಿನಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಶ್ರೋತ್ರದಲ್ಲಿ ಅಂಗಲಿಂಗಸಂಗ ತ್ರೆ ೈದಶ ಸ್ವರೂಪನೊಳಕೊಂಡು ಪ್ರಸಾದಲಿಂಗವಾಗಿ ಎನ್ನ ಶ್ರೋತ್ರದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಹೃದಯದಲ್ಲಿ ಅಂಗಲಿಂಗಸಂಗ ತ್ರಯೋದಶ ಸ್ವರೂಪವನೊಳಕೊಂಡು ಮಹಾಲಿಂಗವಾಗಿ ಎನ್ನ ಹೃದಯದಲ್ಲಿ ಇಂಬುಗೊಂಡನಯ್ಯ ಬಸವಣ್ಣ. ಇಂತೀ ಬಸವಣ್ಣನೆ ಅಂಗ ಲಿಂಗ ಹಸ್ತ ಮುಖ ಶಕ್ತಿ ಭಕ್ತಿ ಪದಾರ್ಥ ಪ್ರಸಾದ. ಇಂತಿವನರಿದು ಅರ್ಪಿಸಿದೆನಾಗಿ ಎನ್ನ ತನುವಿನಲ್ಲಿ ಶುದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಎನ್ನ ಮನದಲ್ಲಿ ಸಿದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಎನ್ನ ಪ್ರಾಣದಲ್ಲಿ ಪ್ರಸಿದ್ಧಪ್ರಸಾದವಾಗಿ ಇಂಬುಗೊಂಡನಯ್ಯ ಬಸವಣ್ಣ. ಇಂತೀ ಶುದ್ಧಸಿದ್ಧ ಪ್ರಸಿದ್ಧ ಪ್ರಸಾದದೊಳಗೆ ಮುಳುಗಿದ್ದ ಭೇದವನರಿದು ಬೋಳಬಸವೇಶ್ವರನ ಅನುಭಾವ ಸಂಪರ್ಕದಿಂದ ಸಿದ್ಧೇಶ್ವರನ ಘನಪ್ರಕಾಶ ಸಾಧ್ಯವಾಯಿತ್ತಾಗಿ ಪರಂಜ್ಯೋತಿ ಮಹಾಲಿಂಗಗುರು ಸಿದ್ದಲಿಂಗಪ್ರಭುವಿನಲ್ಲಿ ಎರಡರಿಯದಿರ್ದೆನಯ್ಯ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
ಶಿವನೆ, ನೀನು ಗುರುವಾದೆ ಲಿಂಗವಾದೆ ಜಂಗಮವಾದೆ ಭಕ್ತನಾದೆ. ಗುರುವಾಗಿದ್ದು ಭಕ್ತನೊಳಡಗಿದೆ. ಅದೇನು ಕಾರಣವೆಂದಡೆ ಗುರುವಿಂಗೆ ಅರ್ಥಪ್ರಾಣಾಭಿಮಾನವನು ಕೊಟ್ಟು, ಆತ ಭೋಗಿಸಿದ ಬಳಿಕ ತಾನಾ ಪ್ರಸಾದ ಮುಂತಾಗಿ ಭೋಗಿಸುವನಾಗಿ, ಆ ಗುರುವು ತನ್ನೊಳಡಗಿದ. ಲಿಂಗವಾಗಿದ್ದು ಭಕ್ತನೊಳಡಗಿದೆ. ಅದೇನು ಕಾರಣವೆಂದಡೆ ಲಿಂಗಕ್ಕೆ ಅರ್ಥಪ್ರಾಣಾಭಿಮಾನವನು ಕೊಟ್ಟು, ಆತ ಭೋಗಿಸಿದ ಬಳಿಕ ತಾನಾ ಪ್ರಸಾದ ಮುಂತಾಗಿ ಭೋಗಿಸುವನಾಗಿ, ಆ ಲಿಂಗವು ಭಕ್ತನೊಳಡಗಿದ. ಜಂಗಮವಾಗಿದ್ದು ಭಕ್ತನೊಳಡಗಿದೆ. ಅದೇನು ಕಾರಣವೆಂದಡೆ ಜಂಗಮಕ್ಕೆ ಅರ್ಥಪ್ರಾಣಾಭಿಮಾನವನು ಕೊಟ್ಟು, ಆ ಜಂಗಮವು ಭೋಗಿಸಿದ ಬಳಿಕ ತಾನಾ ಪ್ರಸಾದ ಮುಂತಾಗಿ ಭೋಗಿಸುವನಾಗಿ, ಆ ಜಂಗಮವು ಭಕ್ತನೊಳಡಗಿದ. ಇಂತಡಗುವರೆ ಹಿರಿಯರು; ಇಂತಡಗುವರೆ ಗುರುವರು; ಇಂತಡಗುವರೆ ಮಹಿಮರು; ಇವರಿಗೆ ಭಾಜನವೊಂದೆ ಭೋಜನವೊಂದೆ. ಈ ನಾಲ್ಕು ಒಂದಾದ ಘನಕ್ಕೆ ಪರಿಯಾಣಬೇರೆಂಬ ಶಾಸ್ತ್ರದ ಸೂತಕಿಗಳನೆನಗೆ ತೋರದಿರಯ್ಯಾ, ಮಸಣಯ್ಯಪ್ರಿಯ ಗಜೇಶ್ವರಾ.
--------------
ಗಜೇಶಮಸಣಯ್ಯಗಳ ಪುಣ್ಯಸ್ತ್ರೀ
ಶಾಂಭವಲೋಕದ ಕುಂಬ್ಥಿನಿಯುದರದ ಮೇಲೆ ಅಂಗನೆ ಅರುದಿಂಗಳ ಹಡೆದಳು ನೋಡಾ. ಅರುದಿಂಗಳ ಅದಾರನೂ ಅರಿಯದೆ ನಿರ್ವಯಲನೆ ಅರಿವುತ್ತರಿವುತ್ತ ಬೆರಗಾಗಲು ಕುಂಬ್ಥಿನಿಯುದರದಂಗನೆ ಸತ್ತುದ ಕಂಡು ಇಹಲೋಕ ಪರಲೋಕ ಆವ ಲೋಕವ ಹೊಗದೆ ಲೋಕಶ್ರೇಷ್ಠವಲ್ಲವೆಂದು ದೇಹವಿಲ್ಲದ ದೇವನ ಉದರವ ಬಗೆದು ಹೊಕ್ಕು ಅಗಣಿತನಪ್ರಮಾಣನಾದ ಲಿಂಗೈಕ್ಯಂಗೆ ನಮೋ ನಮೋಯೆಂದು ಬದುಕಿದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಶಿರವ ಸೀರೆಯ ಕರವ ಕಂಗಳ ಶಿಶುವನಿಕ್ಕಿಯೆರದರು. ಭಾಷೆ ಬಳಸಿ ಹಂಗು ಹಳಸಿಹೋಯಿತ್ತು. ಸಿಮ್ಮಲಿಗೆಯ ಚೆನ್ನರಾಮನೆಂಬ ಲಿಂಗಜಂಗಮಕ್ಕೆ ಕೊಟ್ಟಿಹೆನೆಂಬ ಶಬ್ದ ಅಳಿದರುಳಿಯಿತು.
--------------
ಚಂದಿಮರಸ
ಶಿವ ಶಿವ ! ಪರಶಿವಮೂರ್ತಿ ಮಹಾಲಿಂಗವು ಕರುಣಿಸಿದ ಕರುಣದಿಂದ ನಾನಂಜೆ ಅಂಜೆನು. ವಾಙ್ಮನೋತೀತವು ಲಿಂಗವಾಗಿ ಅಂಗದ ಮೇಲೆ ನಿರಂತರವಾಗಿ ಸನ್ನಹಿತವಾಗಿ ಅಂಗಲಿಂಗ ಗುರುಲಿಂಗ ಏಕವಾಗಿ [ಪ್ರಾ]ಣಲಿಂಗವಾದನಾಗಿ [ಪ್ರಾ]ಣಲಿಂಗ. ಜಿಹ್ವೆಯಲ್ಲಿ ಮಂತ್ರಮಯ ಗುರುಲಿಂಗವಾಗಿ ಬಿಜಯಂಗೈದನಾಗಿ ಜಿಹ್ವೆಲಿಂಗ. ಕಂಗಳಲ್ಲಿ ಶಿವಲಿಂಗಮೂರ್ತಿಯಂ ತುಂಬಿದನಾಗಿ ಕಂಗಳು ಲಿಂಗ. ತ್ವಕ್ಕಿನಲ್ಲಿ ಜಂಗಮಲಿಂಗಮೂರ್ತಿಯಂ ತುಂಬಿದನಾಗಿ ತ್ವಕ್ಕು ಲಿಂಗ. ಕಿವಿಗಳಲ್ಲಿ ಲಿಂಗಮಹಾತ್ಮೆಯ ಶ್ರುತಿ ಪುರಾಣ ಪುರಾತರ ವಚನಂಗಳ ತುಂಬಿದನಾಗಿ ಶ್ರೋತ್ರ ಲಿಂಗವು. ಶಿವನ ಶ್ರೀಪಾದಕಮಲಪ್ರಸಾದವ ವಾಸಿಸುವಂತೆ ಮಾಡಿದನಾಗಿ ಘ್ರಾಣಲಿಂಗವು. ಲಿಂಗವ ನಿರಂತರ ಸ್ಪರ್ಶವ ಮಾಡುವಂತೆ ಮಾಡಿದನಾಗಿ ಹಸ್ತ ಲಿಂಗವಾದವು. ಲಿಂಗವನೆ ಭಾವಿಸುವಂತೆ ಮಾಡಿದನಾಗಿ ಭಾವ ಲಿಂಗವು. ಮನದಲ್ಲಿ ನೆನಹು ಭರಿತವಾಗಿ ಮನ ಲಿಂಗವು. ಸುವಿಚಾರ ಸಂಪೂರ್ಣವ ಗ್ರಹಿಸಿತ್ತಾಗಿ ಬುದ್ಧಿ ಲಿಂಗವು. ನಿಶ್ಚಯಪದವ ಹಿಡಿಯಿತ್ತಾಗಿ ಅಹಂಕಾರ ಲಿಂಗವು. ನಿರಂತರ ಮರೆಯದಂತೆ ಮಾಡಿದನಾಗಿ ಚಿತ್ತ ಲಿಂಗವು. ಇಂತು ಅಂತರಂಗ ಬಹಿರಂಗ ಲಿಂಗ, ಸರ್ವಾಂಗಲಿಂಗವ ಮಾಡಿ, ಸದ್ಗುರುಲಿಂಗವಾಗಿ ಜಂಗಮಲಿಂಗವಾಗಿ ಪ್ರಾಣಲಿಂಗವಾಗಿ ಪ್ರಸಾದಲಿಂಗವಾಗಿ ಪ್ರಸಾದವನಿಕ್ಕಿ ಸಲಹಿದನು. ಈ ಮಹಾಘನಪರಿಣಾಮವ ಶಿವ! ಶಿವ ನೀನೇ ಬಲ್ಲೆ ಶಿವ ಶಿವ! ಮಹಾದೇವ, ಶಿವ ಶಿವ! ಮಹಾದೇವ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ನೀನೇ ಬಲ್ಲೆ.
--------------
ಉರಿಲಿಂಗಪೆದ್ದಿ
ಶಾಂತ್ಯತೀತೋತ್ತರಕಲೆ, ಶಾಂತ್ಯತೀತಕಲೆಗಳಿಲ್ಲದಂದು, ಶಾಂತಿಕಲೆ ವಿದ್ಯಾಕಲೆಗಳಿಲ್ಲದಂದು, ಪ್ರತಿಷ್ಠೆಕಲೆ ನಿವೃತ್ತಿಕಲೆಗಳಿಲ್ಲದಂದು, ಮಹಾಸಾದಾಖ್ಯ ಶಿವಸಾದಾಖ್ಯವಿಲ್ಲದಂದು, ಅಮೂರ್ತಿಸಾದಾಖ್ಯ ಮೂರ್ತಿಸಾದಾಖ್ಯವಿಲ್ಲದಂದು, ಕರ್ತೃಸಾದಾಖ್ಯ ಕರ್ಮಸಾದಾಖ್ಯವಿಲ್ಲದಂದು, ಅವಾಚ್ಯಪ್ರಣವವಾಗಿದ್ದನಯ್ಯ ಇಲ್ಲದಂತೆ, ನಮ್ಮ ಅಪ್ರಮಾಣಕೂಡಲಸಂಗಮದೇವನು.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಶ್ವೇತ ಪೀತ ಕಪೋತ ಹರಿತ ಕೃಷ್ಣ ಮಾಂಜಿಷ್ಟವೆಂಬ ಷಡುವರ್ಣವೆಂದೆನ್ನ. ಉಂಡು ಉಪವಾಸಿ ಬಳಸಿ ಬ್ರಹ್ಮಚಾರಿಯೆಂದೆನ್ನ. ಲಿಂಗವಿಂತುಟೆನ್ನ, ಲಿಂಗೈಕ್ಯವ ನುಡಿಯ. ಅಭಂಗನ ನಿಲವ ಭಂಗಿತರೆತ್ತ ಬಲ್ಲರು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಶ್ರೀಗುರುವಿನಿಂದದ್ಥಿಕರು ಆವ ಲೋಕದೊಳಗಿಲ್ಲವಯ್ಯಾ. ಶ್ರೀಗುರುವಿನಂತೆ ಪರೋಪಕಾರಿಗಳ ಮತ್ತಾರನೂ ಕಾಣೆನಯ್ಯಾ. ಅದೆಂತೆಂದೊಡೆ : ಎನ್ನ ಕಂಗಳ ಭಕ್ತರ ಮಾಡಿದನಯ್ಯಾ ಶ್ರೀಗುರು ಪರಮಶಿವಲಿಂಗಕ್ಕೆ. ಎನ್ನ ಕಿವಿಗಳ ಭಕ್ತರ ಮಾಡಿದನಯ್ಯಾ ಶ್ರೀಗುರು ಪರಮಶಿವಲಿಂಗಕ್ಕೆ. ಎನ್ನ ನಾಸಿಕ ನಾಲಗೆಗಳ ಭಕ್ತರ ಮಾಡಿದನಯ್ಯಾ ಶ್ರೀಗುರು ಪರಮಶಿವಲಿಂಗಕ್ಕೆ. ಎನ್ನ ಕರಚರಣಂಗಳ ಭಕ್ತರ ಮಾಡಿದನಯ್ಯಾ ಶ್ರೀಗುರು ಪರಮಶಿವಲಿಂಗಕ್ಕೆ. ಎನ್ನ ತನುಮನಪ್ರಾಣಂಗಳ ಭಕ್ತರ ಮಾಡಿದನಯ್ಯಾ ಶ್ರೀಗುರು ಪರಮಶಿವಲಿಂಗಕ್ಕೆ. ಎನ್ನ ಸಕಲಕರಣೇಂದ್ರಿಯಂಗಳ ಭಕ್ತರ ಮಾಡಿದನಯ್ಯ ಶ್ರೀಗುರು ಪರಮಶಿವಲಿಂಗಕ್ಕೆ. ಇಂತಿವು ಮೊದಲಾಗಿ ಎನ್ನ ಸರ್ವ ಅವಯವಂಗಳನೆಲ್ಲ ಸದ್ಭಕ್ತರ ಮಾಡಿ ಲಿಂಗಾರ್ಪಿತಕ್ಕೆ ಅನುಗೊಳಿಸಿದ ಶ್ರೀಗುರುವಿನ ಮಹಾಘನ ನಿಲವಿಂಗೆ ನಮೋ ನಮೋ ಎಂಬೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಶ್ರೀಗುರುವಾದಾತನು ಸಕಲಾಗಮಂಗಳ ಹೃದಯವನರಿತು ತನ್ನ ತಾನರಿದು ಸರ್ವಾಚಾರ ತನ್ನಲ್ಲಿ ನೆಲೆಗೊಂಡು ಉಪದೇಶವ ಮಾಡುವ ಕ್ರಮವೆಂತೆಂದಡೆ: ಬ್ರಾಹ್ಮಣನ ಮೂರು ವರುಷ ನೋಡಬೇಕು, ಕ್ಷತ್ರಿಯನ ಆರು ವರುಷ ನೋಡಬೇಕು, ವೈಶ್ಯನ ಒಂಬತ್ತು ವರುಷ ನೋಡಬೇಕು, ಶೂದ್ರನ ಹನ್ನೆರಡು ವರುಷ ನೋಡಬೇಕು, ನೋಡಿದಲ್ಲದೆ ದೀಕ್ಷೆ ಕೊಡಬಾರದು _ ವೀರಾಗಮೇ. ``ಬ್ರಾಹ್ಮಣಂ ತ್ರೀಣಿ ವರ್ಷಾಣಿ ಷಡಬ್ದಂ ಕ್ಷತ್ರಿಯಂ ತಥಾ ವೈಶ್ಯಂ ನವಾಬ್ದಮಾಖ್ಯಾತಂ ಶೂದ್ರಂ ದ್ವಾದಶವರ್ಷಕಂ ಈ ಕ್ರಮವನರಿಯದೆ, ಉಪಾಧಿವಿಡಿದು ಉಪದೇಶವ ಮಾಡುವಾತ ಗುರುವಲ್ಲ, ಉಪಾಧಿವಿಡಿದು ಉಪದೇಶವ ಮಾಡಿಸಿಕೊಂಬಾತ ಶಿಷ್ಯನಲ್ಲ. ಇವರಿಬ್ಬರ ನಿಲವು ಒಂದೆ ಠಕ್ಕನ ಮನೆಗೆ ಠಕ್ಕ ಬಿದ್ದಿನ ಬಂದಂತೆ ಈ ಗುರುಶಿಷ್ಯರಿಬ್ಬರನು ರೌರವನರಕದಲ್ಲಿಕ್ಕುವ ಕೂಡಲಚೆನ್ನಸಂಗಯ್ಯ.
--------------
ಚನ್ನಬಸವಣ್ಣ
ಶೈವಕ್ಕೆ ಕೈಲಾಸ, ವೈಷ್ಣವಕ್ಕೆ ವೈಕುಂಠ, ಚೌದ್ಧಂಗೆ ಮೋಕ್ಷಗಾಮಿನಿಯೆಂಬ ಗೊತ್ತುಗಳು ಬೇರಾದಲ್ಲಿ, ಪೃಥ್ವಿ ಅಪ್ಪು ತೇಜ ವಾಯು ಆಕಾಶ ಬೇರಾದುದಿಲ್ಲ. ಸುವರ್ಣ ಒಂದು ಆಭರಣ ಹಲವಾದಂತೆ. ಪರಬ್ರಹ್ಮವಸ್ತುವೊಂದೆಂಬುದಕ್ಕೆ ಇದೆ ದೃಷ್ಟ. ಮತ್ತಿದಿರು ದೈವವುಂಟೆಂದು ಗದಿಯಬೇಡ. ನೆರೆ ನಂಬಿ, ಸದಾಶಿವಮೂರ್ತಿಲಿಂಗವಲ್ಲದಿಲ್ಲಾಯೆಂದೆ.
--------------
ಅರಿವಿನ ಮಾರಿತಂದೆ
ಶಿವಶಿವಾ, ಎನ್ನ ಮನವು ನಿಮ್ಮ ನೆನೆಯಲೊಲ್ಲದೆ ಅನ್ಯಕ್ಕೆ ಹರಿವುತಿರ್ಪುದು ನೋಡಾ. ಗುರು ಚರ ಲಿಂಗದ ಸೇವೆಯೆಂದೊಡೆ ಹಿಂದುಳಿವುತಿರ್ಪುದು ನೋಡಾ. ಅನ್ಯರ ಒಡವೆಯಾದ ಹೊನ್ನು ಹೆಣ್ಣು ಮಣ್ಣೆಂದೊಡೆ ಮುಂದುವರಿದು ಓಡುತಿರ್ಪುದು ನೋಡಾ. ಈ ಮನದ ಉಪಟಳವು ಘನವಾಯಿತ್ತು. ಇನ್ನೇನು ಗತಿಯಯ್ಯ ಎನಗೆ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ

ಇನ್ನಷ್ಟು ...
-->