ಅಥವಾ

ಒಟ್ಟು 13 ಕಡೆಗಳಲ್ಲಿ , 8 ವಚನಕಾರರು , 12 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿರ್ವಾಹವಾಯಿತ್ತಯ್ಯಾ ಬಸವಣ್ಣಂಗೆ ಕಪ್ಪಡಿಯ ಸಂಗಯ್ಯನಲ್ಲಿ. ಅಕ್ಕನಾಗಾಯಿ ಮಿಂಡ ಮಲ್ಲಿನಾಥ ಹಡಪದ ಅಪ್ಪಣ್ಣ ಮೊಗವಾಡದ ಕೇಶಿರಾಜ ಕೋಲಶಾಂತಯ್ಯ ಮೊದಲಾದ ಶಿವಗಣಂಗಳೆಲ್ಲರೂ ಬಸವರಾಜನ ಬಯಲ ಬೆರಸಿದರು. ಆ ಬಯಲ ಪ್ರಸಾದದಿಂದ, ನಿರುಪಮ ಪ್ರಭುದೇವರು ಕದಳಿಯಲ್ಲಿ ಬಯಲಾದರು. ಆ ಬಯಲ ಪ್ರಸಾದದಿಂದ, ಮೋಳಿಗೆಯ ಮಾರಯ್ಯ ಕಕ್ಕಯ್ಯ ಪಡಿಹಾರಿ ಉತ್ತಣ್ಣ ಕನ್ನದ ಮಾರಣ್ಣ ಕಲಕೇತ ಬೊಮ್ಮಣ್ಣ ನುಲಿಯ ಚಂದಯ್ಯ ಹೆಂಡದ ಮಾರಯ್ಯ ಶಂಕರ ದಾಸಿಮಯ್ಯ ಏಕಾಂತ ರಾಮಯ್ಯ ಮೇದರ ಕೇತಯ್ಯ ಮೊದಲಾದ ಏಳುನೂರೆಪ್ಪತ್ತು ಅಮರಗಣಂಗಳ ದಂಡು, ಕೈಲಾಸಕ್ಕೆ ನಡೆಯಿತ್ತು, ಬಂದ ಮಣಿಹ ಪೂರೈಸಿತ್ತು. ಸಂದ ಪುರಾತನರೆಲ್ಲರು ಎನ್ನ ಮನದ ಮೈಲಿಗೆಯ ಕಳೆದ ಕಾರಣ, ಕಲಿದೇವರದೇವಯ್ಯಾ, ಇವರೆಲ್ಲರ ಒಕ್ಕಮಿಕ್ಕಪ್ರಸಾದದ ಬಯಲು ಎನಗಾಯಿತ್ತು.
--------------
ಮಡಿವಾಳ ಮಾಚಿದೇವ
ಕಾಷ್ಠವ ಸುವರ್ಣವ ಮಾಡಿದೆನೆಂಬ ಘಾತುಕತನವೆ ನಿಮ್ಮ ಭಕ್ತಿ ? ಸಕಲ ದೇಶ ಕೋಶ ವಾಸ ಭಂಡಾರ ಸವಾಲಕ್ಷ ಮುಂತಾದ ಸಂಬಂಧ, ಸ್ತ್ರೀಯರ ಬಿಟ್ಟು ಬಂದೆನೆಂಬ ಕೈಕೂಲಿಯೆ ನಿಮ್ಮ ಭಕ್ತಿ ? ಬಸವಣ್ಣ ಚೆನ್ನಬಸವಣ್ಣ ಪ್ರಭುದೇವರು ಮುಂತಾದ ಏಳುನೂರೆಪ್ಪತ್ತು ಅಮರಗಣಂಗಳ ಭಾವವಿದ್ದಂತೆ ನಿಮ್ಮ ಅಗಡವೇಕಯ್ಯಾ ? ನಿಮ್ಮ ಅರಿವಿಂಗೆ ಇದಿರಿನಲ್ಲಿ ಕೂಡಿಹೆನೆಂಬ ಭಿನ್ನಭಾವವುಂಟೆ ಅಯ್ಯಾ ? ಕರ್ಪೂರದ ಅರಣ್ಯವ ಕಿಚ್ಚುಹತ್ತಿ ಬೆಂದಲ್ಲಿ ಭಸ್ಮ ಇದ್ದಿಲೆಂದು ಲಕ್ಷಿಸಲುಂಟೆ ? ನಿಮ್ಮ ಭಾವವ ನಿಮ್ಮಲ್ಲಿಗೆ ತಿಳಿದುಕೊಳ್ಳಿ. ನಿಮ್ಮ ಕೂಟಕ್ಕೆ ಎನ್ನ ನಾಚಿಕೆಯ ಬಿಡಿಸಿದ ತೆರನ ತಿಳಿದುಕೊಳ್ಳಿ. ಶಕ್ತಿಯ ಮಾತೆಂದು ಧಿಕ್ಕರಿಸಬೇಡಿ. ಹೊರಗೆ ಕೂಡಿಹೆನೆಂಬುದು ನಿಮ್ಮ ಅರಿವಿಂಗೆ ಹಾನಿ. ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ, ನಿಮ್ಮ ಶರಣರ ನೆಲೆಯ ನೀವೇ ನೋಡಿಕೊಳ್ಳಿ.
--------------
ಮೋಳಿಗೆ ಮಹಾದೇವಿ
ಎನಗೆ ಗುರುಸ್ಥಲವ ತೋರಿದಾತ ಸಂಗನ ಬಸವಣ್ಣನು. ಎನಗೆ ಲಿಂಗಸ್ಥಲದ ತೋರಿದಾತ ಚನ್ನಬಸವಣ್ಣನು. ಎನಗೆ ಜಂಗಮಸ್ಥಲವ ತೋರಿದಾತ ಸಿದ್ಧರಾಮಯ್ಯನು. ಎನಗೆ ಪ್ರಸಾದಿಸ್ಥಲವ ತೋರಿದಾತ ಬಿಬ್ಬಬಾಚಯ್ಯನು. ಎನಗೆ ಪ್ರಾಣಲಿಂಗಿಸ್ಥಲವ ತೋರಿದಾತ ಚಂದಯ್ಯನು. ಎನಗೆ ಶರಣಸ್ಥಲವ ತೋರಿದಾತ ಸೊಡ್ಡಳ ಬಾಚರಸನು. ಎನಗೆ ಐಕ್ಯಸ್ಥಲವ ತೋರಿದಾತ ಅಜಗಣ್ಣನು. ಎನಗೆ ನಿಜಸ್ಥಲವ ತೋರಿದಾತ ಪ್ರಭುದೇವರು. ಇಂತೀ ಸ್ಥಲಗಳ ಕಂಡು ಏಳ್ನೂರೆಪ್ಪತ್ತು ಅಮರಗಣಂಗಳ ಶ್ರೀಪಾದಕ್ಕೆ ಶರಣೆಂದು ಬದುಕಿದೆನು ಕಾಣಾ! ಅಭಿನವ ಮಲ್ಲಿಕಾರ್ಜುನಾ.
--------------
ಡೋಹರ ಕಕ್ಕಯ್ಯ
ಹೊರಗಣ ಒಂಬತ್ತು ಬಾಗಿಲವ ಮುಚ್ಚಿ ಒಳಗಣ ಅಂಬರದ ಬಾಗಿಲ ಬೀಗವ ತೆಗೆದು ಒಳಹೊಕ್ಕು ನೋಡಲು, ಗಂಗೆ ಸರಸ್ವತಿ ಯಮುನೆಯೆಂಬ ತ್ರಿನದಿಗಳು ಕೂಡಿದ ಠಾವಿನಲ್ಲಿ ಸಂಗಮಕ್ಷೇತ್ರವೆಂಬ ರಂಗಮಂಟಪವುಂಟು. ಆ ರಂಗಮಂಟಪದಲ್ಲಿ ರವಿಕೋಟಿಪ್ರಭೆಯಿಂದೆ ರಾಜಿಸುವ ಮಹಾಲಿಂಗವ ಕಂಡು, ಆ ಮಹಾಲಿಂಗಕ್ಕೆ ತನ್ನಾತ್ಮಸಂಬಂಧವಾದ ದ್ರವ್ಯಂಗಳಿಂದರ್ಚಿಸಿ, ಆ ಮಹಾಲಿಂಗದ ಬೆಳಗನು ಕಂಗಳು ತುಂಬಿ ನೋಡಿ ಮನ ಸಂತೋಷಗೊಂಡು, ಅಲ್ಲಿಂದತ್ತ ಪಶ್ಚಿಮದಿಕ್ಕಿನಲ್ಲಿ ಮಹಾಕೈಲಾಸವಿರ್ಪುದನು ತನ್ನ ಸ್ವಾತ್ಮಜ್ಞಾನದಿಂದ ತಿಳಿದು ನೋಡಿ, ಎಡಬಲದ ಬಟ್ಟೆಯ ಮೆಟ್ಟದೆ ನಟ್ಟನಡುಮಧ್ಯಮಾರ್ಗವಿಡಿದು ಹೋಗಿ, ಕೈಲಾಸದ ಪೂರ್ವದಿಕ್ಕಿನ ಹೆಬ್ಬಾಗಿಲ ಉಪ್ಪರ ಗೋಪುರವ ಕಂಡು ಒಳಹೊಕ್ಕು ಹೋಗಿ ಕಂಗಳಿಗೆ ಮಂಗಳವಾದ ಶಿವಮಹಾಸಭೆಯ ಕಂಡು, ಅಲ್ಲಿ ಹೊಡೆವ ಭೇರಿಯನಾದ, ತುಡುಮು ತಾಳ ಮದ್ದಳೆಯನಾದ, ಗಡಗಡ ಝಲ್ಲೆಂಬ ಸಮಾಳ ಕರಡಿ ಕೌಸಾಳನಾದ ನುಡಿಸುವ ವೀಣೆ ಕಿನ್ನರಿ ಸ್ವರಮಂಡಲ ತಂಬೂರಿ ಕಾಮಾಕ್ಷಿಯನಾದ, ಭೋರಿಡುವ ಶಂಖ ಘಂಟೆಯನಾದ, ಸ್ವರಗೈವ ನಾಗಸ್ವರ ಕೊಳಲು ಸನಾಯದ ನಾದ, ಕೂಗಿಡುವ ಕಹಳೆ ಹೆಗ್ಗಹಳೆ ಚಿನಿಕಹಳೆ ಕರಣೆಯನಾದ, ಇಂತಿವು ಮೊದಲಾದ ನಾನಾ ತೆರದ ನಾದಂಗಳನು ಕಿವಿದುಂಬಿ ಕೇಳಿ ಮನದುಂಬಿ ಸಂತೋಷಿಸಿ, ಅಲ್ಲಿಂದ ಮುಂದಕ್ಕೆ ಹೋಗಿ ಸೂರ್ಯವೀಥಿಯ ಕಂಡು ಪೊಕ್ಕು, ಅಲ್ಲಿ ನಿಂದು ಓಲಗಂಗೊಡುವ ಮೂವತ್ತೆರಡು ತೆರದ ತೂರ್ಯಗಣಂಗಳಂ ಕಂಡು, ಅಲ್ಲಿಂದ ಮುಂದಕ್ಕೆ ಹೋಗಿ ಸೋಮವೀಥಿಯ ಕಂಡು ಪೊಕ್ಕು, ಅಲ್ಲಿ ನಿಂದು ಓಲಗಂಗೊಡುವ ಹದಿನಾರು ತೆರದ ಪ್ರಮಥಗಣಂಗಳ ಕಂಡು ಅಲ್ಲಿಂದ ಮುಂದಕ್ಕೆ ಹೋಗಿ ಅನಲವೀಥಿಯ ಕಂಡು ಪೊಕ್ಕು, ಅಲ್ಲಿ ಅಷ್ಟದಿಕ್ಕುಗಳಲ್ಲಿ ನಿಂದು ಓಲಗಂಗೊಡುವ ಅಷ್ಟ ತೆರದ ಅಮರಗಣಂಗಳ ಕಂಡು, ಅಲ್ಲಿಂದ ಮುಂದೆ ಹೋಗಿ ಚತುರ್ದಿಕ್ಕಿನಲ್ಲಿ ನಿಂದು ಓಲಗಂಗೊಡುವ ಚತುಃಶಕ್ತಿಯರ ಸಮ್ಮೇಳವ ಕಂಡು, ಅಲ್ಲಿಂದ ಮುಂದಕ್ಕೆ ಹೋಗಿ ನಟ್ಟನಡುವಿರ್ದ ಶೃಂಗಾರಮಂಟಪದ ಮಹಾಸದರಿನಲ್ಲಿ ಮೂರ್ತಿಗೊಂಡಿರ್ದ ನಿಷ್ಕಲ ಪರಶಿವನ ಕಂಡು ತನು ಉಬ್ಬಿ ಮನ ಕರಗಿ, ಕಂಗಳಲ್ಲಿ ಪರಿಣಾಮಜಲ ಉಕ್ಕಿ ಕಡೆಗೋಡಿವರಿವುತ್ತ, ಉರಿಕರ್ಪುರ ಸಂಯೋಗದಂತೆ ಆ ನಿಷ್ಕಲಪರಶಿವನೊಡನೆ ಬೆರೆದು ಪರಿಪೂರ್ಣವಾದ ಮಹಾಶರಣರ ತೋರಿಸಿ ಬದುಕಿಸಯ್ಯಾ ಎನ್ನ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಕಾಮವಿಲ್ಲದಾತ ಭಕ್ತ , ಕ್ರೋಧವಿಲ್ಲದಾತ ಮಹೇಶ್ವರ, ಲೋಭವಿಲ್ಲದಾತ ಪ್ರಸಾದಿ, ಮೋಹವಿಲ್ಲದಾತ ಪ್ರಾಣಲಿಂಗಿ, ಮದವಿಲ್ಲದಾತ ಶರಣ, ಮತ್ಸರವಿಲ್ಲದಾತ ಐಕ್ಯ. ಅದು ಎಂತೆಂದೊಡೆ : ಕಾಮವಿಲ್ಲದ ಭಕ್ತ ಬಸವಣ್ಣ , ಕ್ರೋಧವಿಲ್ಲದ ಮಹೇಶ್ವರ ಪ್ರಭುರಾಯ, ಲೋಭವಿಲ್ಲದ ಪ್ರಸಾದಿ ಚೆನ್ನಬಸವೇಶ್ವರದೇವರು, ಮೋಹವಿಲ್ಲದ ಪ್ರಾಣಲಿಂಗಿ ಘಟ್ಟಿವಾಳಯ್ಯ, ಮದವಿಲ್ಲದ ಶರಣ ಮೋಳಿಗೆಯ್ಯನವರು, ಮತ್ಸರವಿಲ್ಲದ ಲಿಂಗೈಕ್ಯಳು ನೀಲಲೋಚನ ತಾಯಿ. ಇಂತಿವರು ಮುಖ್ಯವಾದ ಏಳನೂರ ಎಪ್ಪತ್ತು ಅಮರಗಣಂಗಳ ಪಾದಕ್ಕೆ ನಮೋ ನಮೋ ಎಂಬೆನಯ್ಯಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಘಟ್ಟಬೆಟ್ಟದ ನಟ್ಟನಡುವಿನ ಗಿರಿಯಲ್ಲಿ ಹುಟ್ಟಿತೊಂದು ಸೋಜಿಗದಗ್ನಿಯ ಕಳೆ. ಆ ಕಳೆಯ ಬೆಳಗ ಕಾಣೆನೆಂದು ಇಬ್ಬರು ಮುಂದುಗೆಟ್ಟರು, ಮೂವರು ತಾಮಸಕ್ಕೊಳಗಾದರು, ನಾಲ್ವರು ನಡೆಗೆಟ್ಟರು, ಐವರು ಅಂಧಕರಾದರು, ಆರುಮಂದಿ ಹೋರಾಟಗೊಳುತಿರೆ, ಏಳುಮಂದಿ ಕೂಪವ ಬಿದ್ದರು, ಎಂಟುಮಂದಿ ತಂಟುಕಕ್ಕೆ ಒಳಗಾದರು. ಒಂಬತ್ತು [ಮಂದಿ] ಕಣವಿಯ ಹರವರಿಯಲ್ಲಿ [ಹೊಕ್ಕರು.] ಹತ್ತು ಬಗೆಯವರು ಹರಿದಾಡುತಿರೆ, ಇದನು ಕಂಡು, ತರುಗಿರಿಯ ನಡುವೆ ಹರಿವ ಉದಕ ಗಾಳಿ ಬಂದು ಬೆಟ್ಟವನಡರಿ, ಉರಿವ ಜ್ಯೋತಿಯ ತಾಗದ ಮುನ್ನ ನೀರಹರಿಯನಡ್ಡಂಗಟ್ಟಿ, ಗಾಳಿಯ ಹಿಮ್ಮೆಟ್ಟಿಸಿ, ಜ್ಞಾನಪರಬ್ರಹ್ಮದಲ್ಲಿ ನಿಂದವರಾರೆಂದರೆ : ಪ್ರಭುದೇವರು, ಚೆನ್ನಬಸವೇಶ್ವರದೇವರು, ಮೋಳಿಗೆಯ್ಯನವರು, ಸಂಗನಬಸವೇಶ್ವರದೇವರು, ನೀಲಾಂಬಿಕೆ ತಾಯಿ, ಅಕ್ಕನಾಗಮ್ಮ, ಮಹಾದೇವಿಯಕ್ಕ, ಮುಕ್ತಾಯಿ ಮುಖ್ಯವಾದ ಏಳುನೂರಾ ಎಪ್ಪತ್ತು ಅಮರಗಣಂಗಳ ಲೆಂಕರ ಲೆಂಕನಾಗಿ ಎನ್ನ ಆದಿಪಿಂಡಿವ ಧರಿಸಿ, ಮತ್ರ್ಯಕ್ಕೆ ಕಳುಹಿದ ಭೇದವ ಪಿಂಡಜ್ಞಾನದಿಂದಲರಿದು ಆಚರಿಸುತ್ತಿದ್ದೆನಯ್ಯಾ ಎನ್ನಾಳ್ದ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಬಸವಣ್ಣನ ಪ್ರಸಾದವಕೊಂಡು ಎನ್ನ ಕಾಯ ಶುದ್ಧವಾಯಿತ್ತಯ್ಯಾ. ಚೆನ್ನಬಸವಣ್ಣನ ಪ್ರಸಾದವಕೊಂಡು ಎನ್ನ ಜೀವ ಶುದ್ಧವಾಯಿತ್ತಯ್ಯಾ. ಮಡಿವಾಳಯ್ಯನ ಪ್ರಸಾದವಕೊಂಡು ಎನ್ನ ಭಾವ ಶುದ್ಧವಾಯಿತ್ತಯ್ಯಾ. ಶಂಕರದಾಸಿಮಯ್ಯನ ಪ್ರಸಾದವಕೊಂಡು ಎನ್ನ ತನು ಶುದ್ಧವಾಯಿತ್ತಯ್ಯಾ. ಸಿದ್ಧರಾಮಯ್ಯನ ಪ್ರಸಾದವಕೊಂಡು ಎನ್ನ ಮನ ಶುದ್ಧವಾಯಿತ್ತಯ್ಯಾ. ಘಟ್ಟಿವಾಳಯ್ಯನ ಪ್ರಸಾದವಕೊಂಡು ಎನ್ನ ಪ್ರಾಣ ಶುದ್ಧವಾಯಿತ್ತಯ್ಯಾ. ಅಕ್ಕನಾಗಾಯಮ್ಮನ ಪ್ರಸಾದವಕೊಂಡು ಎನ್ನ ಅಂತರಂಗ ಶುದ್ಧವಾಯಿತ್ತಯ್ಯಾ. ಮುಕ್ತಾಯಕ್ಕಗಳ ಪ್ರಸಾದವಕೊಂಡು ಎನ್ನ ಬಹಿರಂಗ ಶುದ್ಧವಾಯಿತ್ತಯ್ಯಾ. ಪ್ರಭುದೇವರ ಪ್ರಸಾದವಕೊಂಡು ಎನ್ನ ಸರ್ವಾಂಗ ಶುದ್ಧವಾಯಿತ್ತಯ್ಯಾ. ಇವರು ಮುಖ್ಯವಾದ ಏಳುನೂರೆಪ್ಪತ್ತು ಅಮರಗಣಂಗಳ ಪ್ರಸಾದವಕೊಂಡು ಬದುಕಿದೆನಯ್ಯಾ ಮಾರೇಶ್ವರಪ್ರಿಯ ಅಮಲೇಶ್ವರಾ, ನಿಮ್ಮ ಶರಣರ ಪಾದಕ್ಕೆ ಅಹೋರಾತ್ರಿಯಲ್ಲಿ ನಮೋ ನಮೋ ಎನುತಿರ್ದೆನು.
--------------
ಆಯ್ದಕ್ಕಿ ಲಕ್ಕಮ್ಮ
ಅನ್ಯದೇಹಿಯೆಂದು ಎನ್ನ ಕಳೆಯದಿರು, ಕರ್ಮದೇಹಿಯೆಂದು ಕೈಯ ಬಿಡದಿರು, ಮತ್ರ್ಯನೆಂದು ಮಾಯಕ್ಕೆ ಗುರಿಮಾಡದಿರು, ಮದಡನೆಂದು ಮನವಿಕಾರಕ್ಕೆ ಗುರಿಮಾಡದಿರು, ಅಜ್ಞಾನಿಯೆಂದು ಅಹಂಕಾರಕ್ಕೆ ಗುರಿಮಾಡದಿರು, ಮದದೇಹಿಯೆಂದು ಮಾಯಾತಮಂಧಕ್ಕೆ ಗುರಿಮಾಡದಿರು, ಜಲ ಅಗ್ನಿಯ ಗುಣವಿರಲೊ ಎನ್ನಯ್ಯ. ಅದು ಎಂತೆಂದೊಡೆ : ಜಲ ಹರಿವೆಡೆಯಲ್ಲಿ ಹೊಲಗೇರಿ ಉತ್ತಮಗೇರಿ ಅಮೇಧ್ಯದಗೇರಿಯೆಂದು ನೋಡಿ ಹರಿವುದೆ ? ಹರಿಯದು ; ಅದಕ್ಕೆಲ್ಲ ಸಮ. ಅಗ್ನಿ ಶ್ವಪಚರ ಮನೆ, ಗೃಹಸ್ಥರ ಮನೆ, ಬೇಡ ಮಾದಿಗ ಹದಿನೆಂಟು ಜಾತಿ ಎಂದು ಅಡಿಯಿಡಲು ಮುನಿವುದೆ ? ಮುನಿಯದು. ಎನ್ನ ಅನ್ಯದೇಹಿಯೆಂದು, ಕರ್ಮದೇಹಿಯೆಂದು, ಮತ್ರ್ಯದೇಹಿಯೆಂದು, ಮದಡದೇಹಿಯೆಂದು, ಅಜ್ಞಾನಿಯೆಂದು ಕಳೆದಡೆ ಹುರುಳಿಲ್ಲ. ಅತ್ತಿಯಹಣ್ಣು ಬಿಚ್ಚಿದರೆ ಬಲು ಹುಳು. ಎನ್ನ ಚಿತ್ತದೊಳವಗುಣವ ವಿಸ್ತರಿಸಿದರೇನು ? ಫಲವಿಲ್ಲ. ನೋಡದೆ ಕಾಡದೆ ಮಾಯಾತಮವಕಳೆದು ಜ್ಞಾನಜ್ಯೋತಿಯ ತೀವು. ಎನ್ನ ನಿಮ್ಮಯ ಶರಣರು ಚೆನ್ನಬಸವಣ್ಣ ಅಕ್ಕನಾಗಮ್ಮ ನೀಲಲೋಚನೆ ನಿಂಬವ್ವೆ ಮಹಾದೇವಿ ಮುಕ್ತಾಯಕ್ಕ ಅಜಗಣ್ಣ ಅಂಬಿಗರ ಚೌಡಯ್ಯ ಕಲಿಕೇತಯ್ಯ ಬ್ರಹ್ಮಯ್ಯ ನಿರ್ಲಜ್ಜಶಾಂತಯ್ಯ ನಿಜಗುಣದೇವರು ಸಿದ್ಧರಾಮಿತಂದೆ ಮರುಳಶಂಕರದೇವರು ಕಿನ್ನರಿಬ್ರಹ್ಮಯ್ಯ ವೀರಗಂಟೆಯ ಮಡಿವಾಳಯ್ಯ ಮೇದರ ಕೇತಯ್ಯಗಳು ಅರವತ್ತುಮೂವರು ಪುರಾತನರು ತೇರಸರು ಷೋಡಶರು ದಶಗಣರು ಮುಖ್ಯವಾದೈನೂರಾ ಎಪ್ಪತ್ತು ಅಮರಗಣಂಗಳ ಆಳಿನಾಳಿನಾ ಮನೆಯ ಕೀಳಾಳ ಮಾಡಿ ಅವರ ಲೆಂಕನಾಗಿ, ಅವರುಟ್ಟ ಮೈಲಿಗೆ, ಉಗುಳ್ದ ತಾಂಬೂಲ ಪಾದೋದಕ, ಅವರೊಕ್ಕ ಪ್ರಸಾದಕೆನ್ನ ಯೋಗ್ಯನಮಾಡೆ ಏಳೇಳು ಜನ್ಮದಲ್ಲಿ ಬರುವೆ ಕಂಡಾ, ಭವವಿರಹಿತ ತಂದೆ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಅಂಗಗುಣಸಂಸಾರಿಗೆ ಲಿಂಗಗುಣಸಂಸಾರವುಂಟೇನಯ್ಯಾ ? ಲಿಂಗಗುಣಸಂಸಾರಿಗೆ ಅಂಗಗುಣಸಂಸಾರವುಂಟೇನಯ್ಯಾ ? ಈ ಲಿಂಗ ಅಂಗವೆಂಬ ಉಭಯ ಮಧ್ಯೆ ಜ್ಞಾನಸಂಸಾರಿಯಾಗಿಪ್ಪ ಶರಣ ಬಸವಣ್ಣ ಚೆನ್ನಬಸವಣ್ಣ ಪ್ರಭುರಾಯ ಮೋಳಿಗೆಯ್ಯಗಳು ಮುಖ್ಯವಾದ ಏಳುನೂರಾ ಎಪ್ಪತ್ತು ಅಮರಗಣಂಗಳ ಪಾದಕ್ಕೆ ನಮೋ ನಮೋ ಎಂಬೆನಯ್ಯಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಕಾಮ ಕ್ರೋಧ ಲೋಭ ಮೋಹ ಮದ ಮತ್ಸರದ ಸೀಮೆಗಳೆನಿಸಿ ಯತಿ ಸಿದ್ಧ ಸಾಧ್ಯರೆಲ್ಲ ವ್ರತಭ್ರಷ್ಟರಾದರು. ಅದು ಎಂತೆಂದೊಡೆ : ಕಾಮವೆಂಬ ಅಗ್ನಿ, ಕ್ರೋಧವೆಂಬ ಕಾಷ*, ಲೋಭವೆಂಬ ಗಾಳಿ ಪುಟಮಾಡಿ, ಮೋಹವೆಂಬರಣ್ಯ, ಮದವೆಂಬ ಕುಳ್ಳು, ಮತ್ಸರವೆಂಬ ಗಿರಿಗೆ ಬೆಂಕಿ ಹತ್ತಿ , ಸುಟ್ಟು ಸುಟ್ಟು ಬೆಂದರು ಹಲಬರು, ನೊಂದರು ಹಲಬರು. ಕಾಮವ ಕಳದು ನಿಃಕಾಮಿಯಾಗಿ, ಕ್ರೋಧವ ಕಳದು ನಿಃಕ್ರೋಧಿಯಾಗಿ, ಲೋಭವ ಕಳದು ನಿರ್ಲೋಭಿಯಾಗಿ, ಮೋಹವ ಕಳದು ನಿರ್ಮೋಹಿಯಾಗಿ, ಮದವ ಕಳದು ನಿರ್ಮದವಾಗಿ, ಮತ್ಸರವ ಕಳದು ನಿರ್ಮತ್ಸರರಾಗಿಪ್ಪ ಚೆನ್ನಬಸವೇಶ್ವರದೇವರು ಪ್ರಭುರಾಯ ಮುಗ್ಧಸಂಗಯ್ಯ ಘಟ್ಟಿವಾಳಯ್ಯ ಮರುಳಶಂಕರದೇವರು ಮುಖ್ಯವಾದ ಏಳ್ನೂರಯೆಪ್ಪತ್ತು ಅಮರಗಣಂಗಳ ಪಾದಕ್ಕೆ ನಮೋ ನಮೋ ಎಂಬೆನಯ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಗ್ರಾಮಮಧ್ಯದ ಮೇಲಣ ಮಾಮರ, ಸೋಮಸೂರ್ಯರ ನುಂಗಿತ್ತಲ್ಲಾ! ಅಮರಗಣಂಗಳ ನೇಮದ ಮಂತ್ರ, ಬ್ರಹ್ಮಾಂಡಕೋಟಿಯ ಮೀರಿತ್ತಲ್ಲಾ! ಸುಮನ ಸುಜ್ಞಾನದೊಳಗಾಡುವ ಮಹಾಮಹಿಮಂಗೆ, ನಿರ್ಮಳವಾಯಿತ್ತು_ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಆದಿಯಾಧಾರವಿಲ್ಲದಂದು, ಕಳೆಮೊಳೆದೋರದಂದು, ಕಾಮನಿಃಕಾಮವಿಲ್ಲದಂದು, ವೀರವಿತರಣವಿಲ್ಲದಂದು, ಯುಗಜುಗವಿಲ್ಲದಂದು, ಪಿಂಡಾಂಡ ಬ್ರಹ್ಮಾಂಡವಿಲ್ಲದಂದು, ಏನೂ ಏನೂ ಇಲ್ಲದಂದು, ಎಲ್ಲಾ ಮೂರ್ತಿಗಳು ನೆಲೆಗೊಳ್ಳದಂದು, ಅಂದು ಏನೆಂದು ಅರಿಯದಿರ್ಪ ನಮ್ಮ ಬಸವಯ್ಯನು. ಒಂದು ಗುಣವನೊಂದು ಅಕ್ಷರಕ್ಕೆ ತಂದಾತ ನಮ್ಮ ಬಸವಯ್ಯನು. ಆ ಅಕ್ಷರವ ರೂಪಮಾಡಿ, ತ್ರಯಾಕ್ಷರದಲ್ಲಿ ಕಳೆಯ ಸಂಬಂಧಿಸಿದಾತ ನಮ್ಮ ಬಸವಯ್ಯನು. ಆ ಕಳೆಯ ಮೂರು ತೆರನ ಮಾಡಿ, ಪೃಥ್ವಿ ಅಪ್ಪು ತೇಜ ವಾಯು ಆಕಾಶ ಎಂಬ ಪಂಚತತ್ವವೆ ಪಂಚವದನವಾಗಿ, ಆ ಪಂಚವದನವೇ ಪಂಚೀಕೃತವನೆಯ್ದಿ, ಜಗದಾದಿ ಸೃಷ್ಟಿಯನನುಮಾಡುವುದಕ್ಕೆ ಕರ್ತನಾದ ನಮ್ಮ ಬಸವಯ್ಯನು. ಆ ಸೃಷ್ಟಿಯ ಮುಖವ ಕಂಡು ಸೃಜಿಸಲು ಪುಟ್ಟಿದರು ಪಂಚಶಕ್ತಿಯರು. ಆ ಪಂಚಶಕ್ತಿಯರಿಗೆ ಪಂಚಮೂರ್ತಿಯರ ಕೈಗೊಳಿಸಿದಾತ ನಮ್ಮ ಬಸವಯ್ಯನು. ಆ ಪಂಚಮೂರ್ತಿಗಳಿಂದುತ್ಪತ್ಯವಾದ ಲೋಕವ ನೋಡಲೆಂದು, ಕೈಲಾಸವನೆ ಕಲ್ಯಾಣವ ಮಾಡಿದಾತ ನಮ್ಮ ಬಸವಯ್ಯನು. ಆ ಕೈಲಾಸವೇ ಕಲ್ಯಾಣವಾಗಲಾ ಕಲ್ಯಾಣಕ್ಕೆ- ಪ್ರಮಥಗಣಂಗಳ, ರುದ್ರಗಣಂಗಳ, ಅಮರಗಣಂಗಳ, ಪುರಾತನಗಣಂಗಳ, ಪುಣ್ಯಗಣಂಗಳ, ಮಹಾಗಣಂಗಳ, ಮುಖ್ಯಗಣಂಗಳ, ಮಹಾಲಿಂಗೈಕ್ಯಸಂಪನ್ನರಂ, ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯರೆಂಬ ಆಚಾರಾದಿ ಮಹಾಲಿಂಗಸಂಪನ್ನರಂ, ಷಟ್‍ಸ್ಥಲಪ್ರಸಾದಪ್ರಸನ್ನರೂಪರಂ, ಆದಿಮುಕ್ತರಂ, ಅನಾದಿಮುಕ್ತರಂ, ಅಜಾತರಂ, ಅಪ್ರಮಾಣರಂ, ಅನಿಮಿಷಲಿಂಗನಿರೀಕ್ಷಣರಂ, ತ್ರಿವಿಧವಿದೂರರಂ, ತ್ರಿವಿಧಲಿಂಗಾಂಗಮೂರ್ತಿಗಳಂ, ಅರ್ಪಿತಸಂಯೋಗರಂ, ಆಗಮವಿದರಂ, ಅನಾದಿಪರಶಿವಮೂರ್ತಿಗಳಂ, ಏಕಲಿಂಗನಿಷ್ಠಾಪರರುಮಪ್ಪ ಮಹಾಪ್ರಮಥಗಣಂಗಳಂ ತಂದು ನೆರಹಿದಾತ ನಮ್ಮ ಬಸವಯ್ಯನು. ಮರ್ತ್ಯಲೋಕವನೆ ಮಹಾಪ್ರಮಥರ ಬಿಡಾರವ ಮಾಡಿದಾತ ನಮ್ಮ ಬಸವಯ್ಯನು. ಆದಿಯಸೃಷ್ಟಿಯನನಾದಿಯಸೃಷ್ಟಿಗೆ ತಂದು, ಅನಾದಿಸೃಷ್ಟಿಯನಾದಿಸೃಷ್ಟಿಗೆ ತಂದು, ಅಜಾತನಬೀಡನಂಗದಲ್ಲಿ ನೆರಹಿದಾತ ನಮ್ಮ ಬಸವಯ್ಯನು. ಭಾವವಿಲ್ಲದ ಭ್ರಮೆಯ ಭ್ರಮೆಗೊಳಿಸಿ ಭಾವಕ್ಕೆ ತಂದಾತ ನಮ್ಮ ಬಸವಯ್ಯನು. ಬಯಲನೊಂದು ರೂಪಮಾಡಿ ಬಣ್ಣಕ್ಕೆ ತಂದು, ಆ ಬಣ್ಣವ ನಿಜದಲ್ಲಿ ನಿಲಿಸಿದಾತ ನಮ್ಮ ಬಸವಯ್ಯನು. ಲಕ್ಷದ ಮೇಲೆ ತೊಂಬತ್ತಾರುಸಾವಿರ ಜಂಗಮಕ್ಕೆ ಇಚ್ಫೆಯನರಿದು ಅರ್ಪಿತವ ಮಾಡಿದಾತ ನಮ್ಮ ಬಸವಯ್ಯನು. ಅಂಗಸಂಗಿಗಳನಂತರಿಗೆ ಅಂಗನೆಯರ ಅನುಭವವ ನಡಸಿದಾತ ನಮ್ಮ ಬಸವಯ್ಯನು. ಮೂವತ್ತಾರುಸಾವಿರ ಮಾಹೇಶ್ವರರಿಗೆ ಮುಖಮೂರ್ತಿಯಾಗಿ, ಅರ್ಪಿತಪ್ರಸಾದವನನುಭವಿಸಿದಾತ ನಮ್ಮ ಬಸವಯ್ಯನು. ಹನ್ನೆರಡುಸಾವಿರ ರಾಣಿಯರ ಅಂಗವನರ್ಪಿತಪ್ರಸಾದಿಗಳ ಮಾಡಿದಾತ ನಮ್ಮ ಬಸವಯ್ಯನು. ಎಂಬತ್ತೆಂಟುಪವಾಡಮಂ ಗೆದ್ದು ಮುನ್ನೂರರುವತ್ತು ಸತ್ತ ಪ್ರಾಣವನೆತ್ತಿ ಮೆರೆದು ಪರಸಮಯವನಳಿದಾತ ನಮ್ಮ ಬಸವಯ್ಯನು. ಇಪ್ಪತ್ತೈದುಸಾವಿರ ಚಾರ್ವಾಕರಂ ನೆಗ್ಗಿಲೊತ್ತಿ, ಅಪ್ರತಿಮ ಶಿವಗಣಂಗಳ ಮಹಾತ್ಮೆಯಂ ಮೆರೆದಾತ ನಮ್ಮ ಬಸವಯ್ಯನು. ಪ್ರಣವದ ಬೀಜವ ಬಿತ್ತಿ, ಪಂಚಾಕ್ಷರಿಯಬೆಳೆಯ ಬೆಳೆದು, ಪರಮಪ್ರಸಾದವನೊಂದು ರೂಪಮಾಡಿ ಮೆರೆದು, ಭಕ್ತಿಫಲವನುಂಡಾತ ನಮ್ಮ ಬಸವಯ್ಯನು. ಚೆನ್ನಬಸವನೆಂಬ ಪ್ರಸಾದಿಯ ಪಡೆದು, ಅನುಭವಮಂಟಪವನನುಮಾಡಿ, ಅನುಭವಮೂರ್ತಿಯಾದ ನಮ್ಮ ಬಸವಯ್ಯನು. ಅರಿವ ಸಂಪಾದಿಸಿ ಆಚಾರವನಂಗಂಗೊಳಿಸಿ, ಏಳುನೂರೆಪ್ಪತ್ತು ಅಮರಗಣಂಗಳ ಅನುಭವಮೂರ್ತಿಗಳ ಮಾಡಿದಾತ ನಮ್ಮ ಬಸವಯ್ಯನು. ಆ ಅನುಭವದಲ್ಲಿ ಐಕ್ಯಪ್ರಸಾದವನಂಗಂಗೊಂಡು, ಮಂತ್ರ ನಿರ್ಮಂತ್ರವಾದಾತ ನಮ್ಮ ಬಸವಯ್ಯನು. ಭಕ್ತಿಸ್ಥಲವನಳಿದು ಭಾವವಡಗಿ ಬಟ್ಟಬಯಲ ಕೂಡಿ, ಸಂಗಯ್ಯನಲ್ಲಿ ಸ್ವಯಲಿಂಗಿಯಾದ ನಮ್ಮ ಬಸವಯ್ಯನು.
--------------
ನೀಲಮ್ಮ
-->