ಅಥವಾ

ಒಟ್ಟು 3 ಕಡೆಗಳಲ್ಲಿ , 1 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಂದಿ, ಮೊಲ, ಪಶುವ ತಿಂದವನೇ ಭಕ್ತ. ಆನೆ, ಕುದುರೆ, ನಾಯಿಯ ತಿಂದವನೇ ಮಹೇಶ್ವರ. ಕೋಣ, ಎಮ್ಮೆ, ಹುಲಿಯ ತಿಂದವನೇ ಪ್ರಸಾದಿ. ಕೋಡಗ, ಸರ್ಪ, ಉಡವ ತಿಂದವನೇ ಪ್ರಾಣಲಿಂಗಿ. ಬೆಕ್ಕನು, ಹರಿಣವನು, ಕರುಗಳನು ತಿಂದವನೇ ಶರಣನು. ಹದ್ದು, ಕಾಗೆ, ಪಿಪೀಲಿಕನ ತಿಂದವನೇ ಐಕ್ಯ. ಇಂತೀ ಎಲ್ಲವ ಕೊಂದು ತಿಂದವನ ಕೊಂದು ಯಾರೂ ಇಲ್ಲದ ದೇಶಕ್ಕೆ ಒಯ್ದು ಅಗ್ನಿ ಇಲ್ಲದೇ ಸುಟ್ಟು, ನೀರಿಲ್ಲದೆ ಅಟ್ಟು, ಕಾಲಿಲ್ಲದೆ ನಡೆದು, ಕಣ್ಣಿಲ್ಲದೆ ನೋಡಿ, ಕೈಯಿಲ್ಲದೆ ಪಿಡಿದು, ಪರಿಮಾಣವಿಲ್ಲದ ಹರಿವಾಣದಲ್ಲಿ ಗಡಣಿಸಿಕೊಂಡು, ಹಿಂದು ಮುಂದಿನ ಎಡಬಲದ ಸಂಶಯಂ ಬಿಟ್ಟು ನಿಶ್ಚಿಂತನಾಗಿ, ಸ್ವಸ್ಥ ಪದ್ಮಾಸನದಲ್ಲಿ ಮುಹೂರ್ತವ ಮಾಡಿ, ಏಕಾಗ್ರಚಿತ್ತಿನಿಂದ ಹಲ್ಲು ಇಲ್ಲದೆ ಮೆಲ್ಲಬಲ್ಲರೆ ಆತನೇ ಅಚ್ಚಪ್ರಸಾದಿ, ನಿಚ್ಚಪ್ರಸಾದಿ, ಸಮಯಪ್ರಸಾದಿ, ಏಕಪ್ರಸಾದಿ, ಗುರು ಲಿಂಗ ಜಂಗಮ ಪಾದೋದಕ ಪ್ರಸಾದಿ ಎಂಬೆನಯ್ಯಾ. ಇಂತೀ ಭೇದವನು ತಿಳಿಯದೆ ಭಕ್ತರ ಮನೆಯಲ್ಲಿ ಉನ್ನತಾಸನದ ಗದ್ದುಗೆಯ ಮೇಲೆ ಕುಳಿತು, ಅಷ್ಟವಿಧಾರ್ಚನೆ ಷೋಡಶೋಪಚಾರಗಳಿಂದ ಪೂಜೆಗೊಂಬ ಗುರುಮೂರ್ತಿಗಳು, ಚರಮೂರ್ತಿಗಳು ಇಂತೀ ಉಭಯರು ಸತ್ತ ಶವದಿಂದತ್ತತ್ತ ನೋಡಾ. ಇಂತೀ ವಿಚಾರವನು ತಿಳಿಯದೆ ನಾವು ಪರಮವಿರಕ್ತರು, ಪಟ್ಟದಯ್ಯಗಳು, ಚರಮೂರ್ತಿಗಳು, ಗುರುಸ್ಥಲದ ಅಯ್ಯತನದ ಮೂರ್ತಿಗಳೆಂದು ಪಾದಪೂಜೆಯ ಮಾಡಿಸಿಕೊಂಡು ಪಾದವ ಪಾಲಿಸುವರೆಂದು ಭಕ್ತರಿಗೆ ತೀರ್ಥವೆಂದು ಕೊಡುವಂಥವರು ಬೀದಿಬಾಜಾರದಲ್ಲಿ ಕುಳಿತು ಸೆರೆಯ ಮಾರುವ ಹೆಂಡಗಾರರು ಇವರಿಬ್ಬರು ಸರಿ ಎಂಬೆ. ಇಂತೀ ನಿರ್ಣಯವನು ತಿಳಿಯದೆ ಭಕ್ತರನಡ್ಡಗೆಡಹಿಸಿಕೊಂಡು. ಪ್ರಸಾದವೆಂದು ತಮ್ಮ ಎಡೆಯೊಳಗಿನ ಕೂಳ ತೆಗೆದು ಕೈಯೆತ್ತಿ ನೀಡುವರು. ಪೇಟೆ ಬಜಾರ, ಬೀದಿಯಂಗಡಿ ಕಟ್ಟೆಯಲ್ಲಿ ಕುಳಿತು ಹೋತು ಕುರಿಗಳನು ಕೊಂದು ಅದರ ಕಂಡವನು ಕಡಿದು ತಕ್ಕಡಿಯಲ್ಲಿ ಎತ್ತಿ ತೂಗಿ ಮಾರುವ ಕಟುಕರು ಇವರಿಬ್ಬರು ಸರಿ ಎಂಬೆ. ಇಂತೀ ಭೇದವ ತಿಳಿಯದೆ ಗುರುಲಿಂಗಜಂಗಮವೆಂಬ ತ್ರಿಮೂರ್ತಿಗಳು ಪರಶಿವಸ್ವರೂಪರೆಂದು ಭಾವಿಸಿ ಪಾದೋದಕ ಪ್ರಸಾದವ ಕೊಂಬ ಭಕ್ತನು ಕೊಡುವಂತ ಗುರುಹಿರಿಯರು ಇವರ ಪಾದೋದಕ ಪ್ರಸಾದವೆಂತಾಯಿತಯ್ಯಾ ಎಂದಡೆ. ಹಳೆನಾಯಿ ಮುದಿಬೆಕ್ಕು ಸತ್ತ ಮೂರುದಿನದ ಮೇಲೆ ಆರಿಸಿಕೊಂಡು ಬಂದು ಅದರ ಜೀರ್ಣಮಾಂಸವನು ತಿಂದು ಬೆಕ್ಕು, ನಾಯಿ, ಹಂದಿಯ ಉಚ್ಚಿಯ ಕುಡಿದಂತಾಯಿತಯ್ಯಾ. ಇಂತಿದರನುಭಾವವನು ಸ್ವಾನುಭಾವಗುರುಮೂರ್ತಿಗಳಿಂದ ತನ್ನ ಸ್ವಯಾತ್ಮಜ್ಞಾನದಿಂದ ವಿಚಾರಿಸಿ ತಿಳಿದು ನೋಡಿ, ಇಂತಿವರೆಲ್ಲರೂ ಕೂಳಿಗೆ ಬಂದ ಬೆಕ್ಕು ನಾಯಿಗಳ ಹಾಗೆ ಅವರ ಒಡಲಿಗೆ ಕೂಳನು ಹಾಕಿ, ಬೆಕ್ಕು ನಾಯಿಗಳ ಅಟ್ಟಿದ ಹಾಗೆ ಅವರನು ಅಟ್ಟಬೇಕು ನೋಡಾ. ಇಂತಿವರಲ್ಲಿ ಪಾದೋದಕ ಪ್ರಸಾದವ ಕೊಳಲಾಗದು. ಈ ಹೊಲೆಯ ಮಾದಿಗರ ಮೇಳಾಪವನು ಬಿಟ್ಟು ಸತ್ತು ಚಿತ್ತಾನಂದ ನಿತ್ಯಪರಿಪೂರ್ಣವೆಂಬ ಗುರುಲಿಂಗಜಂಗಮದ ಪಾದೋದಕ ಪ್ರಸಾದವ ಕೊಳಬಲ್ಲರೆ ಆ ಭಕ್ತರಿಗೆ ಮೋಕ್ಷವೆಂಬುದು ಕರತಳಾಮಳಕ ನೋಡೆಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಪ್ರಸಾದ ಪ್ರಸಾದವೆಂದು ನುಡಿಯಬಹುದಲ್ಲದೆ, ಪ್ರಸಾದದ ಘನವನಾರು ಬಲ್ಲರಯ್ಯಾ ? ಪ್ರಸಾದವೆಂಬುದು ಪರಕ್ಕೆಪರವಾಗಿರ್ಪುದು. ಪ್ರಸಾದವೆಂಬುದು ಪÀರತರ ಮುಕ್ತಿದೋರುವುದು. ಪ್ರಸಾದವೆಂಬುದು ಪರಮಪದವಿಯನೀವುದು. ಪ್ರಸಾದವೆಂಬುದು ಪರಂಜ್ಯೋತಿಸ್ವರೂಪವನುಳ್ಳುದು. ಪ್ರಸಾದವೆಂಬುದು ಪರಬ್ರಹ್ಮನಾಮವುಳ್ಳದು. ಪ್ರಸಾದವೆಂಬುದು ಮಹಾಜ್ಞಾನಪ್ರಕಾಶವನುಳ್ಳುದು. ಪ್ರಸಾದವೆಂಬುದು ಸ್ವಾನುಭಾವಸಮ್ಯಜ್ಞಾನ, ಜ್ಞಾನ, ಸುಜ್ಞಾನ, ಮಹಾಜ್ಞಾನ, ಶಿವಜ್ಞಾನವೆಂಬ ಷಡ್ವಿದಜ್ಞಾನಸ್ವರೂಪವಾದ ಕರಕಮಲದಲ್ಲಿ ಪ್ರಕಾಶಮಯವಾಗಿ ತೋರುವ ಘನಮಹಾಲಿಂಗವು. ಅಂತಪ್ಪ ಘನಮಹಾ ಇಷ್ಟಬ್ರಹ್ಮದಲ್ಲಿ ಎರಡಳಿದು ಕೂಡಿ ಬೆರೆದು ಬೇರಿಲ್ಲದೆ ಇರಬಲ್ಲಡೆ ಆತನೆ ಅಚ್ಚಪ್ರಸಾದಿ, ನಿಚ್ಚಪ್ರಸಾದಿ, ಸಮಯಪ್ರಸಾದಿ, ಏಕಪ್ರಸಾದಿ ಇಂತೀ ಚತುರ್ವಿಧಪ್ರಸಾದದೇಕಸ್ವರೂಪಾದ ಮಹಕ್ಕೆ ಮಹವಾದ, ಘನಕ್ಕೆ ಘನವಾದ ಪರಶಿವನ ಮಹಾಪ್ರಸಾದಿಯೆಂದನು ಕಾಣಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಗುರುವೆಂಬವನೇ ಹೊಲೆಯ. ಲಿಂಗಾಂಗಿ ಎಂಬವನೇ ಮಾದಿಗ. ಜಂಗಮವೆಂಬವನೇ ಸಮಗಾರ. ಈ ಮೂವರೊಳಗೆ ಹೊಕ್ಕು ಬಳಕೆಯ ಮಾಡಿದಾತನೇ ಭಕ್ತ. ಆ ಭಕ್ತನೆಂಬುವನೇ ಡೋರ. ಇಂತೀ ಚತುರ್ವಿಧ ಭೇದವ ತಿಳಿದು, ಪಾದೋದಕ ಪ್ರಸಾದವ ಕೊಡಬಲ್ಲರೆ ಗುರುಲಿಂಗಜಂಗಮವೆಂಬೆ. ಈ ನಿರ್ಣಯವ ತಿಳಿದು ಪಾದೋದಕ ಪ್ರಸಾದ ಕೊಳ್ಳಬಲ್ಲರೆ ಭಕ್ತ, ಮಹೇಶ್ವರ, ಪ್ರಸಾದಿ, ಪ್ರಾಣಲಿಂಗಿ, ಶರಣೈಕ್ಯರೆಂಬ ಷಟ್‍ಸ್ಥಲಬ್ರಹ್ಮಿ ಎಂಬೆ. ಆತನೇ ಅಚ್ಚಪ್ರಸಾದಿ, ನಿಚ್ಚಪ್ರಸಾದಿ, ಸಮಯಪ್ರಸಾದಿ, ಏಕಪ್ರಸಾದಿ. ಇಂತೀ ಕ್ರಮವರಿತು ಪಾದೋದಕ ಪ್ರಸಾದವ ಕೊಳ್ಳಬಲ್ಲರೆ ಮೋಕ್ಷವಾಗುವುದಕ್ಕೆ ತಡವಿಲ್ಲವಯ್ಯ. ಈ ಭೇದವ ತಿಳಿಯದೆ ಅಯ್ಯಾ, ಹಸಾದ ಮಹಾಪ್ರಸಾದ ಪಾಲಿಸಿರೆಂದು, ಕರುಣಿಸಿರೆಂದು ಕೃಪೆ ಮಾಡಿ ಭೂತದೇಹಿಗಳೆದುರಿಗೆ ಪಾತಕಮನುಜರು ಅಡ್ಡಡ್ಡ ಬಿದ್ದು ಎದಿ ವಡ್ಡುಗಟ್ಟಿ ಮೊಳಕಾಲು ಗೂಡುಗಟ್ಟಿ ಹಣೆ ಬುಗುಟಿ ಎದ್ದು ಈ ಪರಿಯಲ್ಲಿ ಅಯ್ಯಾ ಪ್ರಸಾದ ಪಾಲಿಸೆಂದು ಪಡಕೊಂಡು ಲಿಂಗಕ್ಕೆ ತೋರಿ ತೋರಿ ತಮ್ಮ ಉದರಾಗ್ನಿ ಅಡಗಿಸಿಕೊಂಡು, ಕಡೆಯಲ್ಲಿ ಎಣ್ಣೆಯ ನಾತಕ್ಕೆ ಅಲಗ ನೆಕ್ಕುವ ಶ್ವಾನನ ಹಾಗೆ ತಮ್ಮ ನಾಲಿಗಿಯಲಿ ತಳಗಿ ತಾಬಾಣವ ನೆಕ್ಕಿ ನೆಕ್ಕಿ, ಆ ತಳಗಿ ತಾಬಾಣ ಸವೆದು ಸಣ್ಣಾಗಿ ಹೋದವಲ್ಲದೆ, ಇಂತಪ್ಪ ಮತಿಭ್ರಷ್ಟ ಹೊಲೆಯ ಮಾದಿಗರಿಗೆ ಪರಶಿವನ ಮಹಾಪ್ರಸಾದ ಸಾಧ್ಯವೇ? ಸಾಧ್ಯವಲ್ಲ. ಮುಂದೆ ಎಂಬತ್ತುನಾಲ್ಕುಲಕ್ಷ ಯೋನಿದ್ವಾರದಲ್ಲಿ ತಿರುಗಿ ತಿರುಗಿ ಭವದತ್ತ ಮುಖವಾಗಿ ನರಕವನೆ ಭುಂಜಿಸುವದು ಉಂಟೆಂದ ನಿಮ್ಮ ಶರಣ ವೀರಾಧಿವೀರ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
-->