ಅಥವಾ

ಒಟ್ಟು 4 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದ್ವಾದಶಮಾಸ, ಚತುದರ್ಶಿ, ದ್ವಾದಶಿ, ಅಮವಾಸಿಯೊಳಗೆ ಮಾಘಮಾಸದ ಚತುರ್ದಶಿ, ಶಿವರಾತ್ರಿ ಅಮವಾಸ್ಯೆ ಫಲಪುಣ್ಯ ಮಹಾದೊಡ್ಡದು ಎಂದು ಸ್ಕಂದಪುರಾಣ ಬ್ರಹ್ಮೋತ್ತರಕಾಂಡ, ಶ್ರುತಿವಾಕ್ಯಗಳಿಂದ ಕೇಳಿ, ಅಂತಪ್ಪ ಮಾಘಮಾಸದ ಚತುರ್ದಶಿದಿವಸ ಒಂದೊತ್ತು ಉಪವಾಸವ ಮಾಡಿ, ಪತ್ರಿ, ಪುಷ್ಪ. ಕಡ್ಡಿ, ಬತ್ತಿಯ ತಂದು ಸಾಯಂಕಾಲಕ್ಕೆ ಸ್ನಾನವ ಮಾಡಿ, ಜಂಗಮವ ಕರತಂದು ಅರ್ಚಿಸಿ, ಲಿಂಗವ ಪತ್ರಿ, ಪುಷ್ಪ, ಅಭೀಷೇಕ, ಕಡ್ಡಿ, ಬತ್ತಿ, ಏಕಾರತಿ ಪಂಚಾರತಿಗಳಿಂದ ಪೂಜಿಸಿ, ಪಾದೋದಕವ ಸೇವಿಸಿ, ಆ ಮೇಲೆ ತಮ್ಮ ಗೃಹದಲ್ಲಿ ಮಾಡಿದ ಉತ್ತಮವಾದ ಫಲಹಾರ ಜೀನಸುಗಳು ಅಂಜೂರ, ದ್ರಾಕ್ಷಿ, ಹಲಸು, ತೆಂಗು, ಕಾರಿಕ, ಬಾಳೇಹಣ್ಣು ಮೊದಲಾದ ಫಲಹಾರ ಮತ್ತಂ, ಬೆಂಡು, ಬೆತ್ತಾಸ, ಖರ್ಜೂರ, ದೂದುಪೇಡೆ, ಬುಂದೆ, ಲಡ್ಡು ಮೊದಲಾದ ಫಲಹಾರ. ಇಂತಪ್ಪ ಫಲಹಾರ ಜೀನಸು ಎಡೆಮಾಡಿ ಪ್ರಸಾದವೆಂದು ಕೈಕೊಂಡು, ಲಿಂಗಕ್ಕೆ ತೋರಿ ತೋರಿ ತಮ್ಮ ಮನಬಂದ ಪದಾರ್ಥವ ಅಂಗಕ್ಕೆ ಗಡಣಿಸಿಕೊಂಡು, ನಾವು ಇಂದಿನ ದಿವಸ ಉದಯದಿಂ ಸಾಯಂಕಾಲದ ಪರಿಯಂತರವಾಗಿ, ಒಂದೊತ್ತು ಉಪವಾಸ ಮಾಡಿ ಶಿವಯೋಗ ಮಾಡಿದೆವೆಂದು ಮೂಢ ಮಂದಮತಿ ಅಧಮರ ಮುಂದೆ ತಮ್ಮ ಬಿಂಕವ ಪೇಳಿ, ರಾತ್ರಿಯಲ್ಲಿ ಜಾಗರಣಿ ಮಾಡಬೇಕೆಂದು ತಮ್ಮ ಅಂಗದ ಮೇಲಣ ಲಿಂಗವ ಬಿಗಿಬಿಗಿದು ಕಟ್ಟಿಕೊಂಡು ಸ್ಥಾವರಲಿಂಗದ ಗುಡಿಗೆ ಹೋಗಿ ಆ ಲಿಂಗದ ಪೂಜೆಯಿಂದ ಬೆಳಗ ಕಳೆದು ಉದಯಕ್ಕೆ ಶಿವರಾತ್ರಿ ಅಮವಾಸೆ ದೊಡ್ಡದೆಂದು ಹಳ್ಳ ಹೊಳೆಗೆ ಹೋಗಿ, ಛಳಿಯಲ್ಲಿ ತಣ್ಣೀರೊಳಗೆ ಮುಳುಗಿ, ಸ್ನಾನವ ಮಾಡಿ ಬಂದು ಜಂಗಮವ ಕರಿಸಿ, ಮೃಷ್ಟಾನ್ನವ ಹೊಟ್ಟೆತುಂಬ ಘಟ್ಟಿಸಿ, ಶಿವರಾತ್ರಿ ಶಿವಯೋಗದ ಪಾರಣೆಯಾಯಿತೆಂದು ಮಹಾ ಉಲ್ಲಾಸದಿಂ ತಮ್ಮೊಳಗೆ ತಾವೇ ಇಪ್ಪರಯ್ಯಾ. ಇಂತಪ್ಪ ಅವಿಚಾರಿಗಳಾದ ಅಜ್ಞಾನ ಜೀವಾತ್ಮರಿಗೆ ವೀರಮಾಹೇಶ್ವರರೆಂದಡೆ ಪರಶಿವಯೋಗಿಗಳಾದ ಶಿವಶರಣರು ನಗುವರಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಧ್ಯಾನ ಧಾರಣ ಸಮಾಧಿಯೆಂತೆಂದಡೆ ಸದ್ಗುರುವೆ ಕರುಣಿಪುದು. ಕೇಳಯ್ಯ ಮಗನೆ : ಧ್ಯಾನ ಯೋಗವೆಂತೆಂದಡೆ : ಷಡಾಧಾರಚಕ್ರದೊಳಗೆ ಆಧಾರ ಮೊದಲಾಗಿ ಆಜ್ಞೆ ಕಡೆತನಕ ಇಷ್ಟಲಿಂಗವ ಧ್ಯಾನಿಸಿ ಅರ್ಚಿಸಿ ಪೂಜಿಸಿ ಅಲ್ಲಿ ತ್ರಿಕೂಟ ಸಂಗಮದಲ್ಲಿ ಗಂಗಾ ಯಮುನಾ ಸರಸ್ವತಿ ನದಿಗಳು ಕೂಡಿದ ಠಾವಿನಲ್ಲಿ ಪ್ರಮಥಗಣಂಗಳು ಮೊದಲಾಗಿ ಅಲ್ಲಿ ಮಜ್ಜನವ ನೀಡುತ್ತಿಹರು. ಅಲ್ಲಿ ಸೂರ್ಯಪೀಠದ ಮೇಲೆ ಗುರುವು ಮೂರ್ತವ ಮಾಡಿರಲು ಅವರ ಪಾದಾರ್ಚನೆಯಂ ಮಾಡಿ, ಪಾದೋದಕದ ನದಿಗಳಲ್ಲಿ ಸ್ನಾನವ ಮಾಡಿ ಅವರ ಸಂಗಡ ಏಳನೆಯ ಮಂಟಪಕ್ಕೆ ಹೋಗಿ ಅಲ್ಲಿ ಪಶ್ಚಿಮಚಕ್ರದಿಂದ ನಿರಂಜನಜಂಗಮವು ಶಿಖಾಚಕ್ರದಲ್ಲಿರ್ದ ಬಸವಾದಿ ಪ್ರಮಥರು ಮೊದಲಾದವರು ಬಿಜಯಮಾಡಿ, ಅಲ್ಲಿ ಅಸಂಖ್ಯಾತ ಪ್ರಮಥರು, ನೂತನ ಗಣಂಗಳು ಸಹವಾಗಿ ಲಿಂಗಾರ್ಚನೆಯ ಮಾಡುತ್ತಿಹರು. ಆ ಲಿಂಗಾರ್ಚನೆ ಎಂತೆಂದಡೆ : ಮೊದಲು ಚಿದ್ಭಸ್ಮವನೆ ಧರಿಸಿ, ಆನಂದೋದಕದಿಂದ ಲಿಂಗಕ್ಕೆ ಕ್ರಿಯಾಮಜ್ಜನವ ನೀಡಿ, ಅಷ್ಟತನುವಿನ ಅಷ್ಟಸುಗಂಧವ ಧರಿಸಿ, ಕರಣಂಗಳ ಸಂಚಲವಿಲ್ಲದ ಗುಣತ್ರಯದಕ್ಷತೆಯ ಧರಿಸಿ, ಸಾವಿರದೈವತ್ತು ಪ್ರಣವದ ಪರಿಮಳ ತುಂಬಿರ್ದ ಪುಷ್ಪವ ಧರಿಸಿ, ದಶವಾಯುಗಳ ಗುಣಧರ್ಮಂಗಳ ಜ್ಞಾನಾಗ್ನಿಯೊಳು ನೀಡಿ, ದಶಾಂಗದ ಸದ್ವಾಸನೆಯ ಧೂಪವ ಧರಿಸಿ, ಹೃದಯವೆಂಬ ಪ್ರಣತಿಯಲ್ಲಿ ದೃಢಚಿತ್ತವೆಂಬ ಬತ್ತಿಯನಿರಿಸಿ, ಅರುಹೆಂಬ ತೈಲವನೆರದು, ಮಹಾಜ್ಞಾನವೆಂಬ ಜ್ಯೋತಿಯ ಮುಟ್ಟಿಸಿ ಅದರಿಂದೊದಗಿದ ಏಕಾರತಿ ತ್ರಿಯಾರತಿ ಪಂಚಾರತಿ ಕಡ್ಡಿ ಬತ್ತಿ ಮೊದಲಾದ ಮಹಾಪ್ರಕಾಶದ ದೀಪವ ಧರಿಸಿ, ಕ್ರಿಯಾ ಜ್ಞಾನ ಇಚ್ಫಾ ಆದಿ ಪರ ಚಿತ್‍ಶಕ್ತಿ ಮೊದಲಾದವರು ಆರತಿಯ ಪಿಡಿದಿಹರು. ಆ ಮೇಲೆ ಪಾದತೀರ್ಥವ ಸಲಿಸಿ, ಮತ್ತೆ ಐವತ್ತು ದಳದಲ್ಲಿರ್ದ ಐವತ್ತು ರುದ್ರಕನ್ನಿಕೆಯರು ಅಡುಗೆಯ ಮಾಡಿ, ಅವರಿಗೆ ಇಚ್ಫಾಪದಾರ್ಥವ ನೀಡುತ್ತಿಹರು. ಅವರ ಒಕ್ಕುಮಿಕ್ಕ ಪ್ರಸಾದವನುಂಡು ಫಲದಾಕಾಂಕ್ಷೆಗಳಿಲ್ಲದೆ ಉಲುಹಡಗಿದ ನಿಜ ಪ್ರಭಾಲತೆ ಪರ್ಣದ ವೀಳ್ಯವನಿತ್ತು ಅವರ ತಾಂಬೂಲ ಪ್ರಸಾದವ ಕೊಂಡು ಪರಿಣಾಮಿಸಿ ಮನ ಭಾವಂಗಳಿಂದ ಪ್ರತ್ಯಕ್ಷವಾಗಿ ಕಂಡು, ಧ್ಯಾನಿಸುವುದೇ ಧ್ಯಾನ ಯೋಗ. ಇನ್ನು ಧಾರಣಯೋಗದ ವಿವರ : ಕರದೊಳಗೆ ಇಷ್ಟಲಿಂಗವ ಮೂರ್ತವ ಮಾಡಿಸಿ ಮನದೊಳಗೆ ಪ್ರಾಣಲಿಂಗವ ಮೂರ್ತವ ಮಾಡಿಸಿ ಭಾವದೊಳಗೆ ತೃಪ್ತಿಲಿಂಗವ ಮೂರ್ತವ ಮಾಡಿಸಿ ಕರ ಮನ ಭಾವದೊಳಗೆ ಪ್ರತ್ಯಕ್ಷವಾಗಿ ಕಂಡು ಧರಿಸಿಕೊಂಡಿಪ್ಪುದೀಗ ಧಾರಣಯೋಗ. ಇನ್ನು ಸಮಾಧಿಯೋಗದ ವಿವರ : ಆ ಇಷ್ಟ ಪ್ರಾಣ ಭಾವಲಿಂಗವ ಏಕವ ಮಾಡಿ, ಅಲ್ಲಿ ಐಕ್ಯವಾಗಿಪ್ಪುದೀಗ ಸಮಾಧಿಯೋಗ ಎಂದರುಹಿದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಅಯ್ಯಾ, ತನ್ನ ತಾನರಿಯದೆ ನಾವು ಏಕಾರತಿ ದ್ವಿಯಾರತಿ [ತ್ರಿಯಾರತಿ] ಚತುರಾರತಿ ಪಂಚಾರತಿ ಷಡಾರತಿ ಸಪ್ತಾರತಿ ಅಷ್ಟಾರತಿ ನವಾರತಿ ದಶಾರತಿ ಕಡ್ಡಿಬತ್ತಿ ಕರ್ಪುರಾರತಿ ಮೊದಲಾದ ಅಷ್ಟವಿಧಾರ್ಚನೆ ಷೋಡಶೋಪಚಾರದಿಂದರ್ಚಿಸುವ ಇಷ್ಟಲಿಂಗಪೂಜಕರೆಂದು ನುಡಿದುಕೊಂಬ ಬದ್ಧಭವಿ ಶುದ್ಧಶೈವ ಮರುಳುಮಾನವರೆನಗೊಮ್ಮೆ ತೋರದಿರಯ್ಯ. ಅದೇನು ಕಾರಣವೆಂದಡೆ, ತನ್ನ ಅಂಗ ಮನ ಪ್ರಾಣೇಂದ್ರಿಯಂಗಳಲ್ಲಿ ಮುಸುಕಿದ ಅಜ್ಞಾನಾಂಧಕಾರದ ಅರುವತ್ತಾರುಕೋಟಿ ಕರಣಂಗಳೆಂಬ ಕಂಚಿನಾರತಿಗಳ ಹಂಚು ಹರಿಗಡಿದು, ಅಷ್ಟತನುಗಳ ಸುಟ್ಟುರುಹಿದ ಬೂದಿಯಿಂದ ಬೆಳಗಿ, ಚಿಜ್ಜಲದಿಂದ ತೊಳೆದು ಕಳೆದುಳಿಯಲರಿಯದೆ, ತನ್ನ ಹೃದಯಮಂದಿರದಲ್ಲಿ ನೆಲಸಿರುವ ಚಿದ್ಘನ ಚಿತ್ಪ್ರಕಾಶ ಚಿನ್ಮಯ ಶ್ರೀಗುರುಲಿಂಗಜಂಗಮಕ್ಕೆ ಮನೋಪ್ರಕೃತಿಯಳಿದ ಉನ್ಮನವೆಂಬ ಏಕಾರತಿ, ಲಿಂಗಾಂಗವೆಂಬುಭಯವಳಿದ ದ್ವಿಯಾರತಿ, ಮಲತ್ರಯಂಗಳಳಿದ ತ್ರಿಯಾರತಿ, ಚತುಃಕರಣಂಗಳಳಿದ ಚತುರಾರತಿ, ಪಂಚಭೂತ ಪಂಚವಾಯು ಪಂಚೇಂದ್ರಿಯ ಪಂಚಕ್ಲೇಶ ಪಂಚಮೂರ್ತಿಗಳ ಫಲಪದಂಗಳ ಕಳೆದುಳಿದ ಪಂಚಾರತಿ, ಷಡ್ವರ್ಗ ಷಡೂರ್ಮೆ ಷಡ್ಭ್ರಮೆ ಷಡ್ಭಾವವಿಕಾರಂಗಳಳಿದ ಷಡಾರತಿ, ಸಪ್ತಧಾತು ಸಪ್ತವ್ಯಸನಂಗಳಳಿದ ಸಪ್ತಾರತಿ, ಅಂತರಂಗದಷ್ಟಮದ ಬಹಿರಂಗದಷ್ಟಮದಂಗಳಳಿದ ಅಷ್ಟಾರತಿ, ನವಗ್ರಹಂಗಳಳಿದ ನವಾರತಿ, ದಶೇಂದ್ರಿಯ ದಶವಾಯುಗಳಳಿದ ದಶಾರತಿ. ಅಹಂಕಾರಗಳಳಿದ ಕಡ್ಡಿಬತ್ತಿ, ತನುತ್ರಯ ಗುಣತ್ರಯ ಅವಸ್ಥಾತ್ರಯ ಮನತ್ರಯ ಆತ್ಮತ್ರಯ ಭಾವತ್ರಯಂಗಳ ಕಳೆದುಳಿದ ಕರ್ಪುರಾರತಿಯ ಬೆಳಗಿ ನಿರ್ವಯಲಪದವನೈದಲರಿಯದೆ, ಬಹಿರಂಗದ ಭಿನ್ನಕ್ರೀ ಭಿನ್ನಜ್ಞಾನ ಭಿನ್ನಭಕ್ತಿ ಮುಂದುಗೊಂಡು, ಗಡ್ಡ ಜಡೆ ಮುಡಿಗಳ ಬಿಟ್ಟುಕೊಂಡು, ಲಾಂಛನವ ಹೊದ್ದುಕೊಂಡು, ಕಾಂಚನಕ್ಕೆ ಕೈಯೊಡ್ಡುತ ಕಂಚಗಾರನಂತೆ ನಾನಾ ಜಿನಸಿನ ಕಂಚ ನೆರಹಿ ಹರವಿಕೊಂಡು, ಪರಮಶಿವಲಿಂಗ ಪೂಜಕರೆಂದು ಬಗಳುವ ಪಂಚಮಹಾಪಾತಕರಿಗೆ ಕಿರಾತರು ಮೆಚ್ಚುವರಲ್ಲದೆ ಪುರಾತರು ಮೆಚ್ಚುವರೆ ? ಬದ್ಧಭವಿಯಾದ ಶೈವರು ಮೆಚ್ಚುವರಲ್ಲದೆ ಶುದ್ಧ ಸುಶೀಲ ನಿರಾಭಾರಿ ವೀರಶೈವರು ಮೆಚ್ಚುವರೆ ? ಅಜ್ಞಾನಿಗಳು ಮೆಚ್ಚುವರಲ್ಲದೆ ನಿವ್ರ್ಯಾಪಾರಿಗಳು ಮೆಚ್ಚರು. ಭಿನ್ನಕ್ರೀಯಸ್ಥರು ಮೆಚ್ಚುವರಲ್ಲದೆ ಅಭಿನ್ನಕ್ರೀಯಸ್ಥರು ಮೆಚ್ಚರು. ಇಂತಪ್ಪ ಲಿಂಗಾಂಗಸಮರಸದ ನಿರ್ಗುಣಪೂಜೆಯನೆಸಗಲರಿಯದ ಭಿನ್ನಜ್ಞಾನ ಭಿನ್ನಪೂಜೆಯನೆಸಗುವ ಮರುಳುಗಳಿಗೆ ಆರು ಮೆಚ್ಚುವರು ? ಹುಚ್ಚು ಮರುಳುಗಳಿರಾ ಸುಮ್ಮನಿರಿಯೆಂದಾತ ನಿಮ್ಮ ಶರಣ ಕಲಿದೇವರದೇವ.
--------------
ಮಡಿವಾಳ ಮಾಚಿದೇವ
-->