ಅಥವಾ

ಒಟ್ಟು 134 ಕಡೆಗಳಲ್ಲಿ , 8 ವಚನಕಾರರು , 123 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾಸಿರದಳಕಮಲವೆಂದಡೆ ಸೂಸಿಕೊಂಡಿರುವ ಮನ. ಪವನವೆಂದಡೆ ಎಲ್ಲೆಡೆಯಲ್ಲಿ ಸೂಸಿ ಆಡುವಂತಹದು. ಬಿಂದುವೆಂದಡೆ ಆಗುಮಾಡುವಂತಹದು. ಈ ಮನ ಪವನ ಬಿಂದು ಮೂರನು ಒಡಗೂಡಿ ನೋಡಲು, ಪರಂಜ್ಯೋತಿಪ್ರಕಾಶದಂತಹ ಬೆಳಗೆ ಎನ್ನ ಕಂಗಳ ಮುಂದೆ ನಿಂದಿತ್ತು. ಆ ಮಹಾಬೆಳಗನೆ ಕಂಗಳಲ್ಲಿ ಹೆರೆಹಿಂಗದೆ ನೋಡಿದಡೆ, ಎನ್ನಂಗದ ಒಳಹೊರಗೆ ಪರಿಪೂರ್ಣವಾಗಿದ್ದಿತ್ತು ಕಾಣಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ, ನಿಮ್ಮ ಪಾದಕರುಣದಿಂದ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಈ ಪರಂಜ್ಯೋತಿ ಪ್ರಕಾಶವಾದ ಬೆಳಗ ನೋಡಿ ನೋಟವ ಮರೆದೆ, ಕೂಡಿ ಕೂಟವ ಮರೆದೆ. ತಾನು ತಾನಾಗಿಪ್ಪ ಮಹಾಬೆಳಗಿನಲ್ಲಿ ನಾನು ಓಲಾಡಿ ಸುಖಿಯಾದೆನಯ್ಯಾ, ಚೆನ್ನಮಲ್ಲೇಶ್ವರನ ಕರುಣವಿಡಿದು ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಬಟ್ಟಬಯಲಿನಲ್ಲಿ ಒಂದು ಮರ ಹುಟ್ಟಿತ್ತು. ಅದಕ್ಕೆ ಸುತ್ತಲು ಬೇರು ಆವರಿಸಿತ್ತು. ಅದಕ್ಕೆ ಶತಕೋಟಿ ಕೊನೆ ಬಿಟ್ಟಿತ್ತು. ಅಡಗಿದ ಬೇರನೆ ಸವರಿ, ಶತಕೋಟಿ ಕೊನೆಯನೆ ಕಡಿಯೆ, ಮರ ಒಣಗಿತ್ತು, ಉಲುಹು ನಿಂದಿತ್ತು, ಎಲೆ ಉದುರಿತ್ತು. ತರಗೆಲೆಯಾದ ಶರಣರ ಚರಣವಿಡಿದು ನಿಜಮುಕ್ತಳಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಬಟ್ಟ ಬಯಲಲ್ಲಿ ಒಂದು ಶರಧಿ ಹುಟ್ಟಿತ್ತು. ಆ ಶರಧಿಯ ನಡುವೆ ಒಂದು ಕಮಲ ಹುಟ್ಟಿತ್ತು. ಆ ಕಮಲದ ನೆಲೆಯ ಕಾಣಲರಿಯದೆ ತೊಳಲಿ ಬಳಲಿ, ಜಗದೊಳಗೆ ನಚ್ಚುಮಚ್ಚಿಗೊಳಗಾಗಿ, ಚುಚ್ಚಳ ಪೂಜೆಗೆ ಸಿಲ್ಕಿ, ಕುಲಕೆ ಛಲಕೆ ಕೊಂದಾಡಿ, ಭವಕ್ಕೆ ಗುರಿಯಾಗುವ ಮನುಜರ ಕಂಡು ನಾಚಿತ್ತೆನ್ನ ಮನವು. ಆ ಮನದ ಬೆಂಬಳಿಗೊಂಡು ಹೋದವರೆಲ್ಲ ಮರುಳಾಗಿ ಹೋದರು. ಇದ ನೋಡಿ ನಾನು ಬಟ್ಟಬಯಲಲ್ಲಿ ನಿಂದು ನೋಡಿದಡೆ, ಶರಧಿ ಬತ್ತಿತ್ತು ಕಮಲ ಕಾಣಬಂದಿತ್ತು. ಆ ಕಮಲ ವಿಕಾಸವಾಯಿತ್ತು ಪರಿಮಳವೆಂಬ ವಾಸನೆ ತೀಡಿತ್ತು. ಆ ವಾಸನೆವಿಡಿದು ಜಗದಾಸೆಯ ಹಿಂಗಿ ಮಾತು ಮಥನವ ಕೆಡಿಸಿ, ಮಹಾಜ್ಯೋತಿಯ ಬೆಳಗಿನಲಿ ಓಲಾಡುವ ಶರಣರ ಆಸೆ ರೋಷ ಪಾಶಕ್ಕೊಳಗಾದ ಈ ಜಗದ ಹೇಸಿಗಳೆತ್ತಬಲ್ಲರು, ಈ ಮಹಾಶರಣರ ನೆಲೆಯ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ ?
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಕಂಡಿಹೆ ಕೇಳಿಹೆನೆಂಬ ದ್ವಂದ್ವವ ಹಿಂಗಿ, ಉಂಡಿಹೆ ಉಟ್ಟಿಹೆನೆಂಬ ಹಂಗ ಬಿಟ್ಟು, ನಡೆದಿಹೆ ನುಡಿದಿಹೆನೆಂಬ ಮಾಟವ ನಿಲಿಸಿ, ಜಗದಾಟವ ನಿಲಿಸಿ, ಮಾಟಕೂಟ ಜಪಕೋಟಲೆಯೊಳು ಸಿಕ್ಕದೆ ದಾಟಿ ಹೋದ ಶರಣರ ಪಾದಕ್ಕೆ ಶರಣೆಂದು ಬದುಕಿದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಕಂಡಿಹೆ ಕೇಳಿಹೆನೆಂದು ಮುಂದುಗಾಣದೆ ಸಂದೇಹದಲ್ಲಿ ಮುಳುಗಿ. ಕಳವಳಿಸಿ ಕಾತರಿಸುವ ಅಣ್ಣಗಳಿರಾ, ನೀವು ಕೇಳಿರೆ, ಹೇಳಿಹೆನು. ಕಾಣಬಾರದ ಘನವ ಹೇಳಬಾರದಾಗಿ, ಹೇಳುವುದಕ್ಕೆ ನುಡಿಯಿಲ್ಲ, ನೋಡುವುದಕ್ಕೆ ರೂಪಿಲ್ಲ. ಇಂತಪ್ಪ ನಿರೂಪದ ಮಹಾಘನವು ಶರಣರ ಹೃದಯದಲ್ಲಿ ನೆಲೆಗೊಂಬುದಲ್ಲದೆ, ಈ ಜನನ ಮರಣಕ್ಕೊಳಗಾಗುವ ಮನುಜರೆತ್ತ ಬಲ್ಲರು ಆ ಮಹಾಘನದ ನೆಲೆಯ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ ?
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಕತ್ತಲೆ ಬೆಳಗೆಂಬುದಿಲ್ಲ ನಿತ್ಯನಾದವಂಗೆ, ಚಿತ್ತ ಪರಚಿತ್ತವೆಂಬುದಿಲ್ಲ ವಸ್ತುವಿನ ನೆಲೆಯ ಕಂಡವಂಗೆ. ನಿತ್ಯ ಅನಿತ್ಯವೆಂಬುದಿಲ್ಲ ಕರ್ತೃ ತಾನಾದವಂಗೆ. ಈ ಮೂರರ ಗೊತ್ತುವಿಡಿದು ನಿಶ್ಚಿಂತನಾಗಿ ನಿರ್ವಯಲನೈದುವ ಶರಣರ ಪಾದಕ್ಕೆ ಶರಣೆಂದು ಸುಖಿಯಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಕೈಲಾಸ ಮರ್ತ್ಯಲೋಕ ಎಂಬರು. ಕೈಲಾಸವೆಂದಡೇನೊ, ಮರ್ತ್ಯಲೋಕವೆಂದಡೇನೊ ? ಅಲ್ಲಿಯ ನಡೆಯೂ ಒಂದೆ, ಇಲ್ಲಿಯ ನಡೆಯೂ ಒಂದೆ. ಅಲ್ಲಿಯ ನುಡಿಯೂ ಒಂದೆ, ಇಲ್ಲಿಯ ನುಡಿಯೂ ಒಂದೆ ಕಾಣಿರಯ್ಯಾ ಎಂಬರು. ಕೈಲಾಸದವರೆ ದೇವರ್ಕಳೆಂಬರು; ಸುರಲೋಕದೊಳಗೆ ಸಾಸಿರಕಾಲಕ್ಕಲ್ಲದೆ ಅಳಿದಿಲ್ಲವೆಂಬರು. ನರಲೋಕದೊಳಗೆ ಸತ್ತು ಸತ್ತು ಹುಟ್ಟುತಿಹರೆಂಬರು. ಇದ ಕಂಡು ನಮ್ಮ ಶರಣರು ಸುರಲೋಕವನು ನರಲೋಕವನು ತೃಣವೆಂದು ಭಾವಿಸಿ, ಭವವ ದಾಂಟಿ ತಮ್ಮ ತಮ್ಮ ಹುಟ್ಟನರಿದು, ಮಹಾಬೆಳಗನೆ ಕೂಡಿ, ಬೆಳಗಿನಲ್ಲಿ ಬಯಲಾದರಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಮತಿಗೆಟ್ಟು ಧೃತಿಗುಂದಿ ಬೇಳಾದೆನಯ್ಯಾ, ಗತಿಗೆಟ್ಟು ವ್ರತಗೆಟ್ಟು ಧಾತುಗೆಟ್ಟ ಬಾಹಿರ ನಾನಯ್ಯಾ, ಕಹಿಸೋರೆ ಮುತ್ತಂತಾಯಿತ್ತೆನ್ನ ಭಕ್ತಿ. ನಡೆಲಿಂಗ ಜಂಗಮ ಮನೆಗೆ ಬರಲು ಇಂಬುಗೊಳಲರಿಯದೆ ಕೆಟ್ಟ ಕೇಡನೇನೆಂದುಪಮಿಸುವೆನಯ್ಯಾ, ನವರತ್ನವ ಕಿತ್ತು ಮಡುವಿನೊಳಗೆ ಹಾಯ್ಕಿದ ಕಪಿಯಂತಾಯಿತ್ತೆನ್ನ ಭಕ್ತಿ ಕೂಡಲಸಂಗಮದೇವರ ತಂದುಕೊಟ್ಟಡೆ ನಿಮ್ಮ ಚಮ್ಮಾವುಗೆಯ ಹೊತ್ತು ಕುಣಿದಾಡುವೆನು ಕಾಣಾ, ಚೆನ್ನಬಸವಣ್ಣಾ.
--------------
ಬಸವಣ್ಣ
ಮಾರಂಕನಿರಿವಲ್ಲಿ ಘಾಯಖಂಡೆಯ ತೋರಿದಾತನೆ ತೆತ್ತಿಗ, ಕೈಯ ಕೈದು ಬಿದ್ದಲ್ಲಿ ಎತ್ತಿಕೊಟ್ಟಾತನೆ ಹಿತವ. ಕೂಡಲಸಂಗನ ಶರಣ ಸೊಡ್ಡಳ ಬಾಚರಸರ ಕರುಣವುಳ್ಳನ್ನಕ್ಕರ ಇನ್ನು ನಾನು ಅಂಜುವನಲ್ಲ ಕಾಣಾ, ಚೆನ್ನಬಸವಣ್ಣಾ.
--------------
ಬಸವಣ್ಣ
ಬಡಗವಾಗಿಲ ¥õ್ಞಳಿಯ ಭರವಸದಿಂ ಪೊಕ್ಕು, ಪಶ್ಚಿಮದ್ವಾರದ ಧವಳಾರಮಂ ಪಶ್ಚಿಮದಿ ಪೊಕ್ಕು, ತ್ರಿವಿಧಗತಿಯ ಶೂನ್ಯಸಿಂಹಾಸನದ ಮೇಲೆ ತರಹರವಾದಡೆ ನಂಬುವುದೆನ್ನ ಮನವು. ಕೂಡಲಸಂಗಮದೇವರು ಸಾಕ್ಷಿಯಾಗಿ, ನೀನು ನಮ್ಮ ಕೋಪಿಸಿದಡೆ ಕೋಪಿಸು, ಚೆನ್ನಬಸವಣ್ಣಾ.
--------------
ಬಸವಣ್ಣ
ಅಯ್ಯಾ, ನಾ ಕಾಬುದಕ್ಕೆ ನನ್ನ ಶಕ್ತಿಯಲ್ಲ ನಿಮ್ಮಿಂದವೆ ಕಂಡೆನಯ್ಯಾ. ಅದೇನು ಕಾರಣವೆಂದಡೆ; ತನುವ ತೋರಿದಿರಿ, ಮನವ ತೋರಿದಿರಿ, ಘನವ ತೋರಿದಿರಿ. ತನುವ ಗುರುವಿಗಿತ್ತು, ಮನವ ಲಿಂಗಕ್ಕಿತ್ತು, ಧನವ ಜಂಗಮಕ್ಕಿತ್ತು, ಇವೆಲ್ಲವು ನಿಮ್ಮೊಡನೆ ಎಂದು ನಿಮಗಿತ್ತು. ತಳ್ಳಿಬಳ್ಳಿಯನೆ ಹರಿದು ನಿಮ್ಮಲ್ಲಿಯೆ ನೆಲೆಗೊಂಡ ಕಾರಣ, ಚೆನ್ನಮಲ್ಲೇಶ್ವರನ ಪಾದದಲ್ಲಿ ನಿರ್ಮುಕ್ತಳಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಕಾಲ,_ಕಾಲವರವತ್ತು; ಕಾಲ ಕಾಲವನೆ ಅರಿವುದು. ಕಾಲ_ಕಾಲವೈವತ್ತು; ಕಾಲ ಕಾಲವನೆ ಅರಿವುದು. ಕಾಲ_ಕಾಲ ನಾಲ್ವತ್ತು; ಕಾಲ ಕಾಲವನೆ ಅರಿವುದು. ಕಾಲ_ಕಾಲ ಮೂವತ್ತು; ಕಾಲ ಕಾಲವನೆ ಅರಿವುದು. ಕಾಲ_ಕಾಲ ಇಪ್ಪತ್ತು; ಕಾಲ ಕಾಲವನೆ ಅರಿವುದು. ಕಾಲ_ಕಾಲ ಹತ್ತು; ಕಾಲ ಕಾಲವನೆ ಅರಿವುದು. ಇಂತೀ ಕಾಲಂಗಳ ಕಾಲವನರಿವಡೆ ಗುಹೇಶ್ವರಲಿಂಗದಲ್ಲಿ ಹೇಳು ಚೆನ್ನಬಸವಣ್ಣಾ ?
--------------
ಅಲ್ಲಮಪ್ರಭುದೇವರು
ಭವವಿಲ್ಲದಡೇನು, ಬಂಧನವಿಲ್ಲದಡೇನು, ಶಿವಗಣಂಗಳೆಲ್ಲರ ಮನಕ್ಕೆ ಬಾರದುದೆ ಭವಬಂಧನ ನೋಡಾ. ಪರಹಿತಾರ್ಥವಾಗಬೇಕೆಂದು ಲಿಂಗವ ಕೊಟ್ಟಡೆ ನಿಮ್ಮ ಪ್ರಮಥರ ಮುಂದೆ ಶಿವ ಮುನಿದು ಮತ್ರ್ಯಲೋಕಕ್ಕೆ ಕಳುಹಿಸಿದನು. ಅಂಗದ ಮೇಲೆ ಲಿಂಗವುಳ್ಳುದೆಲ್ಲವೂ ಸಂಗಮನಾಥನೆಂದು ನಂಬಿದಲ್ಲಿ ನಿಮ್ಮ ಪ್ರಮಥರೆನ್ನನೊಳಗಿಟ್ಟುಕೊಂಡರು. ಜಂಗಮಮುಖದಲ್ಲಿ ಲಿಂಗವನರಿಸಿಕೋ ಎಂದಡೆ ದಾಸೋಹವೆಂಬ ಪಸರವನಿಕ್ಕಿದೆನು. ಕೂಡಲಸಂಗಮದೇವರ ಮುಂದೆ ಜಂಗಮಮುಖದಲ್ಲಿ ಎಂದು ಸುಖಿಯಪ್ಪೆನು ಹೇಳಾ, ಚೆನ್ನಬಸವಣ್ಣಾ.
--------------
ಬಸವಣ್ಣ
ಅಯ್ಯಾ, ನರರೊಳು ಹುಟ್ಟಿ, ಮರಹಿನೊಳಗೆ ಬಿದ್ದವಳ ತಂದು, ಮಹಾಶರಣರು ಎನಗೆ ಕುರುಹ ತೋರಿದರು. ಗುರುವೆಂಬುದನರುಹಿದರು; ಜಂಗಮವೆ ಜಗದ ಕರ್ತುವೆಂದರುಹಿದರು. ಅವರ ನೆಲೆವಿಡಿದು ಮನವ ನಿಲಿಸಿದೆ, ಕಾಯ ಜೀವವೆಂಬುದನರಿದೆ, ಭವಬಂಧನವ ಹರಿದೆ, ಮನವ ನಿರ್ಮಲವ ಮಾಡಿದೆ. ಬೆಳಗಿದ ದರ್ಪಣದಂತೆ ಚಿತ್ತ ಶುದ್ಭವಾದಲ್ಲಿ, ನೀವು ಅಚ್ಚೊತ್ತಿದ್ದ ಕಾರಣದಿಂದ ನಿಮ್ಮ ಪಾದವಿಡಿದು ನಾನು ನಿಜಮುಕ್ತಳಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಇನ್ನಷ್ಟು ... -->