ಅಥವಾ

ಒಟ್ಟು 5 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರು ತನ್ನ ವಿನೋದಕ್ಕೆ ಗುರುವಾದ ಗುರು ತನ್ನ ವಿನೋದಕ್ಕೆ ಲಿಂಗವಾದ ಗುರು ತನ್ನ ವಿನೋದಕ್ಕೆ ಜಂಗಮವಾದ ಗುರು ತನ್ನ ವಿನೋದಕ್ಕೆ ಪಾದೋದಕವಾದ ಗುರು ತನ್ನ ವಿನೋದಕ್ಕೆ ಪ್ರಸಾದವಾದ ಗುರು ತನ್ನ ವಿನೋದಕ್ಕೆ ವಿಭೂತಿಯಾದ ಗುರು ತನ್ನ ವಿನೋದಕ್ಕೆ ರುದ್ರಾಕ್ಷಿಯಾದ ಗುರು ತನ್ನ ವಿನೋದಕ್ಕೆ ಮಹಾಮಂತ್ರವಾದ. ಇಂತೀ ಭೇದವನರಿಯದೆ, ಗುರು ಲಿಂಗ ಜಂಗಮ ಪಾದತೀರ್ಥ ಪ್ರಸಾದ ವಿಭೂತಿ ರುದ್ರಾಕ್ಷಿ ಓಂ ನಮಃ ಶಿವಾಯಯೆಂಬ ಮಂತ್ರವ ಬೇರಿಟ್ಟು ಅರಿಯಬಾರದು. ಅದಲ್ಲದೆ ಒಂದರಲ್ಲಿಯೂ ವಿಶ್ವಾಸ ಬೇರಾದಡೆ ಅಂಗೈಯಲ್ಲಿರ್ದ ಲಿಂಗವು ಜಾರಿತ್ತು. ಮಾಡಿದ ಪೂಜೆಗೆ ಕಿಂಚಿತ್ತು ಫಲಪದವಿಯ ಕೊಟ್ಟು ಭವಹೇತುಗಳ ಮಾಡುವನಯ್ಯಾ. ಇಷ್ಟಲಿಂಗದಲ್ಲಿ ನೈಷ್ಠೆ ನಟ್ಟು ಬಿಟ್ಟು ತ್ರಿವಿಧವ ಮರಳಿ ಹಿಡಿಯದೆ ವಿರಕ್ತನಾದನಯ್ಯಾ ಗುರು ಚೆನ್ನಮಲ್ಲಿಕಾರ್ಜುನಾ
--------------
ಅಕ್ಕಮಹಾದೇವಿ
ಫಲಪದವಿಯ ಬಯಸಿ ಮಾಡಲಾಗದು ಗುರುಭಕ್ತಿಯ. ಫಲಪದವಿಯ ಬಯಸಿ ಮಾಡಲಾಗದು ಲಿಂಗಪೂಜೆಯ. ಫಲಪದವಿಯ ಬಯಸಿ ಮಾಡಲಾಗದು ಜಂಗಮಾರ್ಚನೆಯ. ಅದೇನು ಕಾರಣವೆಂದೊಡೆ : ಬಯಕೆಯ ಭಕ್ತಿಯ, ಪೂರ್ವಪುರಾತನರು ಮಚ್ಚರು. ನಮ್ಮ ಅಖಂಡೇಶ್ವರದೇವನು ಹಂಗಿನ ಭಕ್ತರನೊಲ್ಲ ನೋಡಾ.
--------------
ಷಣ್ಮುಖಸ್ವಾಮಿ
ಬೇವಿನಮರಕ್ಕೆ ಬೆಲ್ಲದ ಕಟ್ಟೆಯ ಕಟ್ಟಿ, ಚಿನ್ನಿ ಸಕ್ಕರೆಯ ಖಾತವ ಹಾಕಿ, ಜೇನುತುಪ್ಪ ನೊರೆವಾಲೆಂಬ ನೀರೆರೆದರೆ, ಬೇವಿನಮರವಳಿದು ಬೆಲ್ಲದ ಮರವಾಗಬಲ್ಲುದೆ ? ಮಾವಿನಮರಕ್ಕೆ ವಿಷದ ಕಟ್ಟೆಯ ಕಟ್ಟಿ, ಉಪ್ಪಿನ ಖಾತವ ಹಾಕಿ, ಬೇವಿನ ಈಚಲ ತಾಡಿನ ಹಣ್ಣು ಮೊದಲಾದ ತ್ರಿವಿಧ ಹಣ್ಣಿನ ರಸವೆಂಬ ನೀರೆರೆದರೆ ಮಾವಿನಮರವಳಿದು ಬೇವು ಈಚಲ ತಾಡ ಮೊದಲಾದ ತ್ರಿವಿಧ ವೃಕ್ಷವಾಗುವುದೆ ? ಇಂತೀ ದೃಷ್ಟಾಂತದಂತೆ ಲೋಕದ ಮಧ್ಯದಲ್ಲಿ ಸಂಸಾರವಿಷಯರಸಪೂರಿತವಾದ ಕಡುಪಾತಕ ಜಡಜೀವಿಗಳಾದ ಕುರಿಮನುಜರ ತಂದು ಭಿನ್ನಜ್ಞಾನಿಗಳಾದ ಆಶಾಬದ್ಭ ಗುರುಮೂರ್ತಿಗಳು ಅಂತಪ್ಪ ಜಡಮತಿಗಳಿಗೆ ವಿಭೂತಿಯ ಪಟ್ಟವಗಟ್ಟಿ, ರುದ್ರಾಕ್ಷಿಯ ಧರಿಸಿ, ಅವನ ಮಸ್ತಕದ ಮೇಲೆ ಪತ್ರಿ ಪುಷ್ಪವನಿಟ್ಟು, ಮೂರೇಳು ಪೂಜೆಯ ಮಾಡಿ, ಇದಕ್ಕೆ ದೃಷ್ಟಾಂತ : ಹಸಿಯ ಕುಳ್ಳಲ್ಲಿ ಬೆಂಕಿಯನಿಟ್ಟು ಊದಿ ಪುಟುಮಾಡುವ ಮರುಳರಂತೆ, ಬರಡು ಆವಿನ ಹಾಲ ಕರಸಿಹೆನೆಂಬ ಅಧಮನಂತೆ, ದುಮ್ಮಡಿಯ ಹಚ್ಚಿ ಊದಿ ಕಿವಿಯೊಳಗಣ ತೊನಸಿ ತೆಗೆವ ಗಂಧಿಗಾರನಂತೆ, ಅಂತಪ್ಪ ಮಲತ್ರಯಯುಕ್ತವಾದ ಜೀವಾತ್ಮರ ದಕ್ಷಿಣ ವಾಮಭಾಗದ ಕರ್ಣದಲ್ಲಿ ತಾರಕಮಂತ್ರದುಪದೇಶವನು ತಮ್ಮ ನಿಲವ ತಾವರಿಯದ ಭಿನ್ನಭಾವದ ಗುರುಮೂರ್ತಿಗಳು ಊದಿ ಊದಿ ಬಾಯಾರಿ ಗಂಟಲೊಣಗಿ ಧ್ವನಿಬಿದ್ದು ದಣಿದು ಹೋದರಲ್ಲದೆ ಸದ್ಭಕ್ತ ಶರಣಜನಂಗಳು ಮಾಡಲರಿಯರು. ಮತ್ತಂ, ಚಿದಂಶಿಕನಾದಾತ್ಮನು ಶಿವಕೃಪೆಯಿಂ ಸುಜ್ಞಾನೋದಯವಾಗಿ, ಸಕಲಪ್ರಪಂಚವನ್ನೆಲ್ಲ ನಿವೃತ್ತಿಯ ಮಾಡಿ, ಶ್ರೀಗುರುಕಾರುಣ್ಯವ ಪಡೆದ ಲಿಂಗಾಂಗಸಂಬಂಧಿಯಾದ ಸದಾಚಾರಸದ್ಭಕ್ತ ಶರಣಜನಂಗಳಿಗೆ ವೇದಾಂತಿ, ಸಿದ್ಧಾಂತಿ ಯೋಗಮಾರ್ಗಿಗಳು ಮೊದಲಾದ ಸಕಲ ಭಿನ್ನಭಾವದ ಜೀವಾತ್ಮರು ವೇದಾಗಮ ಶಾಸ್ತ್ರ ಪುರಾಣ ತರ್ಕ ತಂತ್ರಗಳೆಲ್ಲವು ತಮ್ಮ ವೇದಾಗಮ ಬೋಧಿಸಿ ಶಿವಾಗಮವನೋದಿದ ಶಿವಶರಣರಿಗೆ ಹೇಳಿ ಹೇಳಿ ತಾವೇ ಬೇಸತ್ತು ಬಳಲಿ ಬೆಂಡಾಗಿ ಮುಖಭಂಗಿತರಾಗಿ ಹೋದರಲ್ಲದೆ ಅವರೇನು ಮರಳಿ ಜಡಮತಿಜೀವರಾಗಲರಿಯರು. ಅಂತಪ್ಪ ಶಿವಜ್ಞಾನಸಂಪನ್ನರಾದ ಶರಣಜನಂಗಳು ಎಷ್ಟು ಪ್ರಪಂಚವ ಮಾಡಿದಡೂ ಮಲತ್ರಯಯುಕ್ತವಾದ ಜೀವರಾಗಲರಿಯರು. ಅವರು ಎಷ್ಟು ಕ್ರೀಯವನಾಚರಿಸಿದೊಡೆಯು ಫಲಪದವಿಯ ಪಡೆದು ಭವಭಾರಕ್ಕೆ ಬರುವ ಜಡಮತಿ ನರಕಜೀವಿಗಳಾಗಲರಿಯರು ಎಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
-->