ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಹಳ ಬಹಳ ಕಂಡೆನೆಂದು ನುಡಿವ, ಬಿಸಿಲು ಮಧ್ಯಾಹ್ನದಲ್ಲಿ ಚಂದ್ರಬಿಂಬ ಉದಯವಾದ ಪ್ರತ್ಯಕ್ಷವಾಯಿತ್ತೆಂದು ಹೊರಗೆ ಕಂಡು ಒಳಗೆ ಕಂಡನಲ್ಲದೆ ಏನು ಅಪ್ಪುದು ಕಾಣಾ. ಎರಡೂ ಒಂದೇ. ಮುಂದೆ ಮೀರಿ ಮನಸಮಾದ್ಥಿ ಮಾಡಿದಡೆ ಮುಕ್ತಿಯೆಂದು ಹೇಳುವರು. ಮನ ಮುಳುಗಿದುದೆ ಲಿಂಗವೆಂದೆಂಬರು. ಆ ಲಿಂಗ ಮುಳುಗುವುದು ಸಮಾದ್ಥಿ ಕಾಣಾ, ತಾನಳಿದ ಮೇಲೆ ಮುಕ್ತಿ ಯಾರಿಗೆ ಹೇಳಾ ? ಲಿಂಗಕ್ಕೆ ಅಳಿವು ಬೆಳವುಂಟೆ ಕಾಣಾ ? ಚಿಂತಿಸಿ ಮುಳುಗಿದವರೆಲ್ಲ ಕಡೆಯಿಲ್ಲ ಮೊದಲಿಲ್ಲ ನೋಡಾ. ಇನ್ನು ಉಳಿದದ್ದು ಘನವು. ಉಳಿಯೆ ಹೇಳಾ ನಿಜಕೆಲ್ಲ. ಲಯವಿಲ್ಲ ಭಯವಿಲ್ಲದಾಡಿದ ವಿದೇಹ ತಾನಾದ ವರನಾಗನ ಗುರುವೀರನೆ ಪರಂಜ್ಯೋತಿ ಮಹಾವಿರಕ್ತಿ.
--------------
ಪರಂಜ್ಯೋತಿ
ಅಷ್ಟಾವರಣಗಳು ಯಾರಿಗೆ ಸಾಧ್ಯವಾಯಿತ್ತೆಂದಡೆ ಹೇಳಿಹೆ ಕೇಳಿರಣ್ಣ : ಗುರು ಸಾಧ್ಯವಾಯಿತ್ತು ಗುರುಭಕ್ತಂಗೆ ; ಲಿಂಗ ಸಾಧ್ಯವಾಯಿತ್ತು ನೀಲಲೋಚನೆತಾಯಿಗೆ ; ಜಂಗಮವು ಸಾಧ್ಯವಾಯಿತ್ತು ಬಸವೇಶ್ವರದೇವರಿಗೆ ; ಪಾದೋದಕ ಸಾಧ್ಯವಾಯಿತ್ತು ವೇಮನಾರಾಧ್ಯಂಗೆ ; ಪ್ರಸಾದ ಸಾಧ್ಯವಾಯಿತ್ತು ಬಿಬ್ಬಿಬಾಚಯ್ಯಂಗೆ ; ವಿಭೂತಿ ಸಾಧ್ಯವಾಯಿತ್ತು ಓಹಿಲಯ್ಯಗಳಿಗೆ ; ರುದ್ರಾಕ್ಷಿ ಸಾಧ್ಯವಾಯಿತ್ತು ಚೇರಮರಾಯಗೆ ; ಪಂಚಾಕ್ಷರಿ ಸಾಧ್ಯವಾಯಿತ್ತು ಅಜಗಣ್ಣಂಗೆ. ಇನ್ನು ಷಟ್‍ಸ್ಥಲದ ನಿರ್ಣಯವ ಕೇಳಿ : ಭಕ್ತಸ್ಥಲ ಬಸವಣ್ಣಂಗಾಯಿತ್ತು ; ಮಾಹೇಶ್ವರಸ್ಥಲ ಮಡಿವಾಳಯ್ಯಂಗಾಯಿತ್ತು ; ಪ್ರಸಾದಿಸ್ಥಲ ಚೆನ್ನಬಸವಣ್ಣಂಗಾಯಿತ್ತು ; ಪ್ರಾಣಲಿಂಗಿಸ್ಥಲ ಸಿದ್ಭರಾಮಯ್ಯಂಗಾಯಿತ್ತು ; ಶರಣಸ್ಥಲ ಪ್ರಭುದೇವರಿಗಾಯಿತ್ತು; ಐಕ್ಯಸ್ಥಲ ಅಜಗಣ್ಣಂಗಾಯಿತ್ತು. ಇನ್ನು ಷಡುಸ್ಥಲದ ವಿವರವಂ ಪೇಳ್ವೆನು.- ಭಕ್ತಸ್ಥಲದ ವಿವರವು : ಗುರುಲಿಂಗಜಂಗಮವು ಒಂದೆಯೆಂದು ಕಂಡು ಸದಾಚಾರದಲ್ಲಿ ನಡೆವನು, ತ್ರಿಕಾಲ ಮಜ್ಜನವ ನೀಡುವನು, ಲಾಂಛನಧಾರಿಗಳ ಕಂಡಡೆ ವಂದನೆಯ ಮಾಡುವನು, ಆಪ್ಯಾಯನಕ್ಕೆ ಅನ್ನವ ನೀಡುವನು, ಜಂಗಮಕ್ಕೆ ಪ್ರತಿ ಉತ್ತರವ ಕೊಡನು. ಪೃಥ್ವಿ ಅಂಗವಾಗಿಪ್ಪುದೆ ಭಕ್ತಿಸ್ಥಲವು. ಸಾಕ್ಷಿ : 'ಮಜ್ಜನಂ ತು ತ್ರಿಕಾಲೇಷು ಶುಚಿಪಾಕಸಮರ್ಪಿತಂ | ಭವಿಸಂಗಪರಿತ್ಯಾಗಂ ಇತ್ಯೇತೇ ಭಕ್ತಿಕಾರಣಂ || ಸದಾಚಾರೇ ಶಿವಭಕ್ತಿಃ ಲಿಂಗಜಂಗಮೇಕಾದ್ಥಿಕಂ | ಲಾಂಛನೇನ ಶರಣ್ಯಂ ಚ ಭಕ್ತಿಸ್ಥಲಂ ಮಹೋತ್ತಮಂ ||' ಇನ್ನು ಮಾಹೇಶ್ವರಸ್ಥಲದ ವಿವರವು : ಪರಸ್ತ್ರೀ ಪರನಿಂದೆ ಪರದ್ರವ್ಯ ಪರಹಿಂಸೆ ಅನೃತ ಇವು ಪಂಚಮಹಾಪಾತಕವು, ಇವ ಬಿಟ್ಟು ಲಿಂಗನಿಷ್ಠೆಯಲ್ಲಿ ಇರ್ದು ಜಲವೆ ಅಂಗವಾಗಿಪ್ಪುದೆ ಮಾಹೇಶ್ವರಸ್ಥಲವು. ಸಾಕ್ಷಿ : 'ಪರಸ್ತ್ರೀಯಂ ಪರಾರ್ಥಂ ಚ ವರ್ಜಿತೋ ಭಾವಶುದ್ಧಿಮಾನ್ | ಲಿಂಗನಿಸ್ಸಂಗಿಯುಕ್ತಾತ್ಮಾ ಮಹೇಶಸ್ಥಲಮುತ್ತಮಂ ||' ಇನ್ನು ಪ್ರಸಾದಿಸ್ಥಲದ ವಿವರ : ಲಿಂಗಕ್ಕೆ ಅರ್ಪಿಸಿದುದ ಲಿಂಗನೆನಹಿನಿಂದೆ ಸ್ವೀಕರಿಸುವುದು, ಅನರ್ಪಿತವ ವರ್ಜಿಸುವುದು, ಲಿಂಗದೊಡನೆ ಉಂಬುವುದು, ಅಗ್ನಿಯೆ ಅಂಗವಾಗಿಪ್ಪುದೆ ಪ್ರಸಾದಿಸ್ಥಲ. ಇನ್ನು ಪ್ರಾಣಲಿಂಗಿಸ್ಥಲದ ವಿವರವು : ಸುಗುಣ ದುರ್ಗುಣ ಉಭಯವನತಿಗಳೆದು ಸುಖ ದುಃಖ ಸ್ತುತಿ ನಿಂದೆ ಶತ್ರು ಮಿತ್ರಾದಿಗಳೆಲ್ಲರಂ ಸಮಾನಂಗಂಡು ವಾಯುವೆ ಅಂಗವಾಗಿಪ್ಪುದೆ ಪ್ರಾಣಲಿಂಗಿಸ್ಥಲ. ಇನ್ನು ಶರಣಸ್ಥಲದ ವಿವರವು : ಸತಿಪತಿಭಾವ ಅಂಗಲಿಂಗವಾಗಿಪ್ಪುದು, ಪಂಚೇಂದ್ರಿಯಸುಖ ನಾಸ್ತಿಯಾಗಿಪ್ಪುದು, ಆಕಾಶವೆ ಅಂಗವಾಗಿಪ್ಪುದು, ಇದು ಶರಣಸ್ಥಲವು. ಸಾಕ್ಷಿ : 'ಪತಿರ್ಲಿಂಗಂ ಸತೀ ಚಾsಹಂ ಇತಿ ಯುಕ್ತಂ ಸನಾತನಃ | ಪಂಚೇಂದ್ರಿಯಸುಖಂ ನಾಸ್ತಿ ಶರಣಸ್ಥಲಮುತ್ತಮಂ ||' ಇನ್ನು ಐಕ್ಯಸ್ಥಲದ ವಿವರವು : ಅರಿಷಡ್ವರ್ಗಂಗಳಿಲ್ಲದಿಹರು, ನಿರ್ಭಾವದಲ್ಲಿಹರು, ಷಡೂರ್ಮಿಗಳಿಲ್ಲದಿಹರು, ಅಷ್ಟವಿಧಾರ್ಚನೆ ಇಲ್ಲದಿಹರು, ಉರಿಯುಂಡ ಕರ್ಪುರದ ಹಾಗೆ ಇಹರು, ಆತ್ಮನೆ ಅಂಗವಾಗಿಪ್ಪುದು ಐಕ್ಯಸ್ಥಲವು. ಸಾಕ್ಷಿ : 'ಷಡೂರ್ಮಿಯೋಗಷಡ್ವರ್ಗಂ ನಾಸ್ತಿ ಚಾಷ್ಟವಿಧಾರ್ಚನಂ | ನಿರ್ಭಾವಂ ಶಿವಲಿಂಗೈಕ್ಯಂ ಶಿಖಿಕರ್ಪೂರಸಯೋಗವತ್||' ಹೀಗೆ ಗಣಂಗಳು ನಡೆದ ಮಾರ್ಗದಲ್ಲಿ ನಡೆದಡೆ ಅಂದೇನೊ ಇಂದೇನೊ ? ಇಂತೀ ಅಷ್ಟಾವರಣಗಳ, ಷಡುಸ್ಥಲದ ಮಾರ್ಗವನು ಎನ್ನೊಳು ಅರುಹಿದಾತ, ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
-->