ಅಥವಾ

ಒಟ್ಟು 12 ಕಡೆಗಳಲ್ಲಿ , 7 ವಚನಕಾರರು , 7 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸುಜ್ಞಾನ ಅಜ್ಞಾನವೆಂಬ ಉಭಯದ ಭೇದ, ದೀಪದ ಕುಡಿವೆಳಗಿನ ಧೂಮದ ಪರಿಯಂತೆ. ಅರಿವು ಮರವೆ ಬೇರೆ ಎಡೆದೆರಪಿಲ್ಲದೆ ಪುದಿದು, ಆತ್ಮನಲ್ಲಿ ಎಡೆಬಿಡುವಿಲ್ಲದಿಪ್ಪುದು, ಹೆರೆಹಿಂಗುವ ಪರಿಯಿನ್ನೆಂತೊ ? ಪಂಕ ಸಲಿಲದಂತೆ, ಪಾಷಾಣ ಪಾವಕನಂತೆ, ತೈಲ ರಜ್ಜುವಿನ ಯೋಗದಂತೆ ಹೆರೆಹಿಂಗಿದಡೆ ಅರಿಯಬಾರದು. ಕೂಡಿದ್ದಡೆ ಅರಿವಿಂಗೆ ವಿರೋಧ. ಗೋವು ಮಾಣಿಕವ ನುಂಗಿದಂತೆ. ಇದಾರಿಗೂ ಅಸಾಧ್ಯ, ಗುಡಿಯ ಗುಮ್ಮಟನೊಡೆಯ ಅಗಮ್ಯೇಶ್ವರಲಿಂಗ ಅವನರಿದವಂಗಲ್ಲದಿಲ್ಲ.
--------------
ಮನುಮುನಿ ಗುಮ್ಮಟದೇವ
ತರುವಿನ ಕಿಚ್ಚಿನಂತೆ, ಅರಗಿನ ಉರಿಯ ಯೋಗದಂತೆ ಮಾಣಿಕ್ಯದ ಮೈಸಿರಿಯಂತೆ ಅಪ್ಪು ಹೆಪ್ಪಳಿಯದೆ ಮೌಕ್ತಿಕವಾದಂತೆ ಕರ್ಪುರದ ಘಟ್ಟದಲ್ಲಿ ಕಿಚ್ಚು ಹುಟ್ಟುತಲೆ ದರ್ಪ ಗೆಡುವಂತೆ ಅರಿವು ತಲೆದೋರಿದಲ್ಲಿ ಇಂದ್ರಿಯ ನಷ್ಟವಪ್ಪುದು ಸ್ವಾನುಭಾವಾತ್ಮಕನ ಸನ್ನದ್ಧ. ಇಂತೀ ಉಭಯಸ್ಥಲದ ಭೇದ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ಎನ್ನ ಸರ್ವಾಂಗವೆಲ್ಲವೂ ಲಿಂಗವಾದ ಪರಿಕ್ರಮವೆಂತೆಂದಡೆ; ಶ್ರೀಗುರು ಬಸವಣ್ಣನುಪದೇಶಿಸಿದ ಇಷ್ಟಲಿಂಗವೆನ್ನ ಸರ್ವಾಂಗದಲ್ಲಿ ಭಿನ್ನ ನಾಮಂಗಳಿಂದ ಪ್ರಕಾಶಿಸುತ್ತಿಹುದು. ಅದೆಂತೆಂದಡೆ ; ಸ್ಥೂಲಾಂಗದಲ್ಲಿ ಇಷ್ಟಲಿಂಗವೆಂದು, ಸೂಕ್ಷ್ಮಾಂಗದಲ್ಲಿ ಪ್ರಾಣಲಿಂಗವೆಂದು ಕಾರಣಾಂಗದಲ್ಲಿ ಭಾವಲಿಂಗವೆಂದು ತ್ರಿಭೇದವಾಗಿಹುದು. ಇಂತು ಅಂಗವ ಕುರಿತು ಮೂರು ತೆರನಾಯಿತ್ತು. ಇನ್ನು ಇಂದ್ರಿಯಂಗಳ ಕುರಿತು ಆರು ತೆರನಾಗಿರ್ಪುದು. ಅದು ಹೇಗೆಂದಡೆ; ಹೃದಯದಲ್ಲಿ ಮಹಾಲಿಂಗವೆಂದು, ಶ್ರೋತ್ರದಲ್ಲಿ ಪ್ರಸಾದಲಿಂಗವೆಂದು, ತ್ವಕ್ಕಿನಲ್ಲಿ ಜಂಗಮಲಿಂಗವೆಂದು, ನೇತ್ರದಲ್ಲಿ ಶಿವಲಿಂಗವೆಂದು, ಜಿಹ್ವೆಯಲ್ಲಿ ಗುರುಲಿಂಗವೆಂದು, ಘ್ರಾಣದಲ್ಲಿ ಆಚಾರಲಿಂಗವೆಂದು, ಇಂತು ಷಡಿಂದ್ರಿಯಂಗಳಲ್ಲಿ ಷಡ್ವಿಧಲಿಂಗವಾಗಿ ತೋರಿತ್ತು. ಇಂತೀ ಮರ್ಯಾದೆಯಲ್ಲಿ ಜ್ಞಾನ-ಕರ್ಮೇಂದ್ರಿಯಂಗಳಲ್ಲಿಯೂ ಲಿಂಗವೆ ಪ್ರಕಾಶಿಸುತ್ತಿಹುದು. ಅದು ಹೇಗಂದಡೆ; ಜ್ಞಾನೇಂದ್ರಿಯಂಗಳಿಗೆಯೂ ಕರ್ಮೇಂದ್ರಿಯಂಗಳಿಗೆಯೂ ಭೇದವಿಲ್ಲ. ಅದೆಂತೆಂದಡೆ, ಶ್ರೋತ್ರಕ್ಕೂ ವಾಕ್ಕಿಗೂ ಭೇದವಿಲ್ಲ, ಶಬ್ದಕ್ಕೂ ವಚನಕ್ಕೂ ಭೇದವಿಲ್ಲ; ತ್ವಕ್ಕಿಗೂ ಪಾಣಿಗೂ ಭೇದವಿಲ್ಲ, ಸ್ಪರ್ಶಕ್ಕೂ ಆದಾನಕ್ಕೂ ಭೇದವಿಲ್ಲ; ನೇತ್ರಕ್ಕೂ ಪಾದಕ್ಕೂ ಭೇದವಿಲ್ಲ, ರೂಪಿಗೂ ಗಮನಕ್ಕೂ ಭೇದವಿಲ್ಲ, ಜಿಹ್ವೆಗೂ ಗುಹ್ಯಕ್ಕೂ ಭೇದವಿಲ್ಲ, ರಸಕ್ಕೂ ಆನಂದಕ್ಕೂ ಭೇದವಿಲ್ಲ; ಘ್ರಾಣಕ್ಕೂ ಗುದಕ್ಕೂ ಭೇದವಿಲ್ಲ, ಗಂಧಕ್ಕೂ ವಿಸರ್ಜನಕ್ಕೂ ಭೇದವಿಲ್ಲ, ಇನ್ನು ಶ್ರೋತ್ರವೆಂಬ ಜ್ಞಾನೇಂದ್ರಿಯಕ್ಕೂ ವಾಕ್ಕೆಂಬ ಕರ್ಮೇಂದ್ರಿಯಕ್ಕೂ ಶಬ್ದ ವಿಷಯ, ಮೂಲಭೂತ ಆಕಾಶ, ಈಶಾನಮೂರ್ತಿ ಅಧಿದೇವತೆ. ತ್ವಕ್ಕೆಂಬ ಜ್ಞಾನೇಂದ್ರಿಯಕ್ಕೂ ಪಾಣಿಯೆಂಬ ಕರ್ಮೇಂದ್ರಿಯಕ್ಕೂ ಸ್ಪರ್ಶನ ವಿಷಯ, ಮೂಲಭೂತ ವಾಯು, ತತ್ಪುರುಷಮೂರ್ತಿ ಅಧಿದೇವತೆ. ದೃಕ್ಕೆಂಬ ಜ್ಞಾನೇಂದ್ರಿಯಕ್ಕೂ ಪಾದವೆಂಬ ಕರ್ಮೇಂದ್ರಿಯಕ್ಕೂ ರೂಪು ವಿಷಯ, ಮೂಲಭೂತ ಅಗ್ನಿ, ಅಘೋರಮೂರ್ತಿ ಅಧಿದೇವತೆ. ಜಿಹ್ವೆಯೆಂಬ ಜ್ಞಾನೇಂದ್ರಿಯಕ್ಕೂ ಗುಹ್ಯವೆಂಬ ಕರ್ಮೇಂದ್ರಿಯಕ್ಕೂ ರಸ ವಿಷಯ, ಮೂಲಭೂತ ಅಪ್ಪು, ವಾಮದೇವಮೂರ್ತಿ ಅಧಿದೇವತೆ, ಘ್ರಾಣವೆಂಬ ಜ್ಞಾನೇಂದ್ರಿಯಕ್ಕೂ ಪಾಯುವೆಂಬ ಕರ್ಮೇಂದ್ರಿಯಕ್ಕೂ ಗಂಧ ವಿಷಯ, ಮೂಲಭೂತ ಪೃಥ್ವಿ, ಸದ್ಯೋಜಾತಮೂರ್ತಿ ಅಧಿದೇವತೆ. ಇಂತೀ ಜ್ಞಾನೇಂದ್ರಿಯಂಗಳಿಗೆಯೂ ಕರ್ಮೇಂದ್ರಿಯಂಗಳಿಗೆಯೂ ಹೃದಯವೆ ಆಶ್ರಯಸ್ಥಾನವಾದ ಕಾರಣ, ಹೃದಯ ಆಕಾಶವೆನಿಸಿತ್ತು. ಅಲ್ಲಿ ಸ್ಥೂಲ ಸೂಕ್ಷ್ಮ ಕಾರಣ ರೂಪಿಂದೆಲ್ಲಾ ಇಂದ್ರಿಯಂಗಳಿರುತ್ತಿಹವು. ಗುರೂಪದೇಶದಿಂದ ಎಲ್ಲಾ ಇಂದ್ರಿಯಂಗಳಲ್ಲಿಯೂ ಲಿಂಗವೆ ಪ್ರಕಾಶಿಸುತ್ತಿಹುದು. ಅದು ಹೇಗೆಂದಡೆ; ಘ್ರಾಣದ ಘ್ರಾಣವೆ ಆಚಾರಲಿಂಗ; ಜಿಹ್ವೆಯ ಜಿಹ್ವೆಯೆ ಗುರುಲಿಂಗ; ನೇತ್ರದ ನೇತ್ರವೆ ಶಿವಲಿಂಗ; ತ್ವಕ್ಕಿನ ತ್ವಕ್ಕೆ ಜಂಗಮಲಿಂಗ; ಶ್ರೋತ್ರದ ಶ್ರೋತ್ರವೆ ಪ್ರಸಾದಲಿಂಗ; ಹೃದಯದ ಹೃದಯವೆ ಮಹಾಲಿಂಗ. ಈ ಆರು ಲಿಂಗಕ್ಕೆ ಅಂಗಸ್ಥಲ ಆರು; ಅವಾವುವೆಂದಡೆ; ಐಕ್ಯ ಶರಣ ಪ್ರಾಣಲಿಂಗಿ ಪ್ರಸಾದಿ ಮಹೇಶ್ವರ ಭಕ್ತ ಎಂದೀ ಆರು ಅಂಗಸ್ಥಲಗಳು. ಇವಕ್ಕೆ ವಿವರ; ಆತ್ಮಾಂಗದಲ್ಲಿ ಸದ್ಭಾವ ಹಸ್ತದಿಂದ ಎಲ್ಲಾ ಇಂದ್ರಿಯಂಗಳ ಪರಿಣಾಮವನು ಸಮರಸಭಕ್ತಿಯಿಂದ ಮಹಾಲಿಂಗಕ್ಕರ್ಪಿಸುವಾತನೆ ಐಕ್ಯ. ವ್ಯೋಮಾಂಗದಲ್ಲಿ ಸುಜ್ಞಾನಹಸ್ತದಿಂದ ಸುಶಬ್ದದ್ರವ್ಯವನು ಆನಂದಭಕ್ತಿಯಿಂದ ಪ್ರಸಾದಲಿಂಗಕ್ಕರ್ಪಿಸುವಾತನೆ ಶರಣ. ಅನಿಲಾಂಗದಲ್ಲಿ ಮನೋಹಸ್ತದಿಂದ ಸುಸ್ಪರ್ಶನದ್ರವ್ಯವನು ಅನುಭಾವಭಕ್ತಿಯಿಂದ ಶಿವಲಿಂಗಕ್ಕರ್ಪಿಸುವಾತನೆ ಪ್ರಾಣಲಿಂಗಿ. ಅನಲಾಂಗದಲ್ಲಿ ನಿರಹಂಕಾರಹಸ್ತದಿಂದ ಸುರೂಪುದ್ರವ್ಯವನು ಅವಧಾನಭಕ್ತಿಯಿಂದ ಶಿವಲಿಂಗಕ್ಕರ್ಪಿಸುವಾತನೆ ಪ್ರಸಾದಿ, ಜಲಾಂಗದಲ್ಲಿ ಸುಬುದ್ಧಿ ಹಸ್ತದಿಂದ ಸುರಸದ್ರವ್ಯವನು ನೈಷಿ*ಕಾಭಕ್ತಿಯಿಂದ ಗುರುಲಿಂಗಕ್ಕರ್ಪಿಸುವಾತನೆ ಮಾಹೇಶ್ವರ. ಭೂಮ್ಯಂಗದಲ್ಲಿ ಸುಚಿತ್ತಹಸ್ತದಿಂದ ಸುಗಂಧದ್ರವ್ಯವನು ಸದ್ಭಕ್ತಿಯಿಂದ ಆಚಾರಲಿಂಗಕ್ಕರ್ಪಿಸುವಾತನೆ ಭಕ್ತ. ಇನ್ನು ಷಡಾಧಾರಂಗಳಲ್ಲಿ ಷಡಕ್ಷರರೂಪದಿಂದ ಷಡ್ಲಿಂಗ ಸ್ಥಾಪ್ಯವಾಗಿಹವು. ಅದು ಹೇಗೆಂದಡೆ, ನಕಾರವೆ ಆಚಾರಲಿಂಗ, ಮಕಾರವೆ ಗುರುಲಿಂಗ, ಶಿಕಾರವೆ ಶಿವಲಿಂಗ, ವಾಕಾರವೆ ಜಂಗಮಲಿಂಗ, ಯಾಕಾರವೆ ಪ್ರಸಾದಲಿಂಗ, ಓಂಕಾರವೆ ಮಹಾಲಿಂಗ, ಎಂದು ಆರು ತೆರನಾಗಿಹವು. ಅದೆಂತೆಂದಡೆ; ಆಧಾರದಲ್ಲಿ ನಕಾರ, ಸ್ವಾಧಿಷಾ*ನದಲ್ಲಿ ಮಕಾರ, ಮಣಿಪೂರಕದಲ್ಲಿ ಶಿಕಾರ, ಅನಾಹತದಲ್ಲಿ ವಾಕಾರ, ವಿಶುದ್ಧಿಯಲ್ಲಿ ಯಕಾರ, ಆಜ್ಞೆಯಲ್ಲಿ ಓಂಕಾರ, ಇಂತೀ ಮರ್ಯಾದೆಯಲ್ಲಿ ಷಡ್ಧಾತುವಿನಲ್ಲಿ ಷಡಕ್ಷರರೂಪಿಂದ ಷಡ್ಲಿಂಗ ಸ್ಥಾಪ್ಯವಾಗಿಹವು. ಅದು ಹೇಗೆಂದಡೆ; ತ್ವಙ್ಮಯವಾಗಿಹುದು ಓಂಕಾರ, ರುಧಿರಮಯವಾಗಿಹುದು ನಕಾರ, ಮಾಂಸಮಯವಾಗಿಹುದು ಮಕಾರ, ಮೇಧೋಮಯವಾಗಿಹುದು ಶಿಕಾರ, ಅಸ್ಥಿಮಯವಾಗಿಹುದು ವಾಕಾರ, ಮಜ್ಜಾಮಯವಾಗಿಹುದು ಯಕಾರ. ಇಂತೀ ಷಡ್ಧಾತುವೆ ಷಡಕ್ಷರಮಯವಾಗಿ, ಅವೆ ಲಿಂಗಂಗಳಾಗಿ, ಒ?ಹೊರಗೆ ತೆರಹಿಲ್ಲದೆ ಸರ್ವಾಂಗವೆಲ್ಲವೂ ಲಿಂಗಮಯವಾದ ಇರವು. ಅದು ತಾನೆ ಶಿವನಿರವು, ಅದು ತಾನೆ ಶಿವನ ಭವನ. ಅದು ತಾನೆ ಶಿವನ ವಿಶ್ರಾಮಸ್ಥಾನ. ಇಂತೀ ಷಟ್ಸ್ಥಲಬ್ರಹ್ಮವನರಿದಾತನೆ ಶರಣ, ಆತನೆ ಲಿಂಗೈಕ್ಯ. ಇಂತೀ ಷಟ್ಸ್ಥಲಬ್ರಹ್ಮವೆಂಬುದು ಅಪ್ರಮಾಣ ಅಗೋಚರ ಅನಿರ್ವಾಚ್ಯವಾದ ಕಾರಣ, ವಚಿಸುತ್ತ ವಚಿಸುತ್ತ ವಚಿಸುತ್ತ ವಚನಗೆಟ್ಟಿತ್ತು. ಉಪ್ಪು ನೀರೊಳು ಕೂಡಿದಂತೆ, ವಾರಿಕಲ್ಲು ಅಂಬುಧಿಯೊಳು ಬಿದ್ದಂತೆ, ಶಿಖಿಕರ್ಪೂರ ಯೋಗದಂತೆ ಆದೆನಯ್ಯಾ ಕೂಡಲಚೆನ್ನಸಂಗಯ್ಯನಲ್ಲಿ, ಬಸವಣ್ಣನ ಭಾವಹಸ್ತ ಮುಟ್ಟಿದ ಕಾರಣ.
--------------
ಚನ್ನಬಸವಣ್ಣ
ನಡೆವಾತನ ಕಾಲ ತರಿದು, ಕೊಡುವಾತನ ಕೈಯ ಮುರಿದು, ನುಡಿವಾತನ ನಾಲಗೆಯ ಕಿತ್ತು, ನೋಡುವಾತನ ಕಣ್ಣ ಕಳೆದು, ಅರಿದೆಹೆನೆಂಬ ಸೂತಕವ ಮುನ್ನವೆ ಮರೆದು, ಅರಿದ ಮತ್ತೆ ತರುವಿನ ಶಾಖೆಯಲ್ಲಿ ತೋರುವ ಅರಗಿನ ಉರಿಯ ಯೋಗದಂತೆ, ತನುವಿನ ಮೇಲಣ ಕುರುಹು, ಮನದ ಮೇಲಣ ಸೂತಕ. ನೆನಹು ನಿಷ್ಪತ್ತಿಯಾದಲ್ಲಿ, ಕಾಮಧೂಮ ಧೂಳೇಶ್ವರ, ಏನೂ ಎನಲಿಲ್ಲ.
--------------
ಮಾದಾರ ಧೂಳಯ್ಯ
ಇಷ್ಟದ ಪೂಜೆಯನರಿವುದಕ್ಕೆ ಕೋಲ ಸುತ್ತಿದ ನೂಲಿನಂತಿರಬೇಕು. ಭಾವದ ಭ್ರಮೆ ಹಿಂಗುವುದಕ್ಕೆ ಸಾವಧಾನದಲ್ಲಿ ಸಾವಯವವಾದ ಸಾವಿನಂತೆ, ಭಾವ ಎಯ್ದಬೇಕು. ಇಷ್ಟ ಪ್ರಾಣದಲ್ಲಿ ಉರಿ ಅರಗಿನ ಯೋಗದಂತೆ, ಕ್ರೀಯಲ್ಲಿ ಕರಗಬೇಕು. ಇದೇ ದೃಷ್ಟ, ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
--------------
ಮೆರೆಮಿಂಡಯ್ಯ
ಬೀಜವೃಕ್ಷ ಯೋಗದಂತೆ ಭಕ್ತಸ್ಥಲ, ಜಲಮೌಕ್ತಿಕ ಯೋಗದಂತೆ ಮಾಹೇಶ್ವರಸ್ಥಲ, ಅನಲಕಾಷ* ಯೋಗದಂತೆ ಪ್ರಸಾದಿಸ್ಥಲ, ಕೀಟಭ್ರಮರ ಯೋಗದಂತೆ ಪ್ರಾಣಲಿಂಗಿಸ್ಥಲ, ಕರಕವಾರಿ ಯೋಗದಂತೆ ಶರಣಸ್ಥಲ, ಶಿಖಿಕರ್ಪುರ ಯೋಗದಂತೆ ಐಕ್ಯಸ್ಥಲ. ಇಂತು ನಿರ್ಭಾವ ನಿರ್ಭೇದ್ಯವಾದಂಗೆ ಸೌರಾಷ್ಟ್ರ ಸೋಮೇಶ್ವರನಲ್ಲೆ ಲಿಂಗೈಕ್ಯವು.
--------------
ಆದಯ್ಯ
ಮರಾಳನ ಗದಕ ತೇಜಿಯ ಚಿತ್ತ ಪನ್ನಗನ ವಳಿ ಹೊಳಹಿನಂತೆ ಘಟಾತ್ಮನ ಭೇದ. ಇದು ನಿರುತ ಸ್ವಯಾನುಭಾವದಿಂದ ಸಂಬಂಧಿಸಿ ಉರಿ ಲೋಹದ ಯೋಗದಂತೆ ಆಗದೆ, ಉರಿ ಕರ್ಪೂರದಿರವಿನಂತೆ ಆಗಬೇಕು. ಇದು ಸಾವಧಾನ ಸಂಬಂಧ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 73 ||
--------------
ದಾಸೋಹದ ಸಂಗಣ್ಣ
-->