ಅಥವಾ

ಒಟ್ಟು 482 ಕಡೆಗಳಲ್ಲಿ , 81 ವಚನಕಾರರು , 425 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾಯುವ ಹಿಡಿದು, ದಂಡವ ಕೊಂಡು, ಸಾವರ ಹಿಡಿದು, ಸಂಕಲೆಯನಿಕ್ಕಿ, ಈ ವಿದ್ಥಿಯಲ್ಲಿ ಸಯಸಗೊಳ್ಳದೆ, ಭಾವವಾಡಿದಂತೆ ಭ್ರಮೆಗೊಳಗಾಗದೆ, ಮತ್ತಿವನೇನನೂ ಎನ್ನದಿರ್ಪುದೆ, ಸರ್ವಜ್ಞಾನದೊಳಗು. ಆ ನಿಜವಸ್ತು, ತಾನು ತಾನೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ನಿಂದಡೆ; ಹೊನ್ನು ಹೆಣ್ಣು ಮಣ್ಣು ಹಿಡಿದು ನೆಟ್ಟನೆ ಭಕ್ತನಾಗಿ ನಿಲ್ಲಬೇಕು. ಸುಳಿದಡೆ; ಹೊನ್ನು ಹೆಣ್ಣು ಮಣ್ಣು ಬಿಟ್ಟು ನೆಟ್ಟನೆ ಜಂಗಮವಾಗಿ ಸುಳಿಯಬೇಕು. ನಿಂದು ಭಕ್ತನಲ್ಲದ, ಸುಳಿದು ಜಂಗಮವಲ್ಲದ ಉಭಯಭ್ರಷ್ಟರನೇನೆಂಬೆ ಗುಹೇಶ್ವರಯ್ಯಾ ?
--------------
ಅಲ್ಲಮಪ್ರಭುದೇವರು
ಕೈಯಲ್ಲಿ ಹಿಡಿದು ಕಾಬುದು ಕರ್ಮಪೂಜೆಯಲ್ಲವೆ? ಮನದಲ್ಲಿ ನೆನೆದು ಮಾಡುವುದೆಲ್ಲವು ಕಾಯದ ಕರ್ಮವಲ್ಲವೆ? ಭಾವಶುದ್ಧವನರಿವ ಪರಿ ಇನ್ನಾವುದು? ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಇಷ್ಟಲಿಂಗವ ಹಿಡಿದು ಕಷ್ಟಯೋನಿಗೆ ತಿರುಗುವ ಕೆಟ್ಟ ಪಾತಕರ ನೋಡಲಾಗದು. ಜಂಗಮವೆಂದು ಮಾಡಲಾಗದು ಪೂಜೆಯ. ನಮಿಸಿಕೊಳ್ಳಲಾಗದು ಹರನೆಂದು. ಅದೇನು ಕಾರಣವೆಂದೊಡೆ : ತನುಮನಭಾವನಷ್ಟವಾದಿಷ್ಟಲಿಂಗಜಂಗಮವು ಪೂಜೆಗೆ ಯೋಗ್ಯ. ತನುಮನಭಾವವು ತ್ರಿವಿಧಮಲದಲ್ಲಿ ಮುಳುಗಿ ಮಲರೂಪಮನುಜರಿಗೆ, ಗುರುನಿರಂಜನ ಚನ್ನಬಸವಲಿಂಗವೆಂದೊಡೆ ನಾಚಿಕೆಗೊಂಡಿತ್ತು ಆಚಾರ.
--------------
ದೇಶಿಕೇಂದ್ರ ಸಂಗನಬಸವಯ್ಯ
ಸೊಡರ ಹಿಡಿದು ಕುಣಿಯಲ್ಲಿ ಬೀಳುವವರ ಕಂಡು, ವಿದ್ಥಿಯ ಕೈಯಲ್ಲು ನಿಸ್ತರಿಸಲಾರೆನಯ್ಯಾ ನಾನು. ಅಹಂಗಾದೆನಲ್ಲಾ ಎಂಬ ಚಿಂತೆಯ ನಿಸ್ತರಿಸಲಾರೆನಯ್ಯಾ. ವೇದವೆಂಬ ಮಹಾಜ್ಯೋತಿಯ ಹಿಡಿದು ಶಿವಪಥದಲ್ಲಿ ನಡೆಯಲರಿಯದೆ ಪಾಪದ ಕುಣಿಯಲ್ಲಿ ಬೀಳುವವರ ಕಂಡು ನಗೆಯಾದುದಯ್ಯಾ. ಗುರೂಪದೇಶವೆಂಬ ಜ್ಯೋತಿಯ ಹಿಡಿದು, ಶಿವಪಥದಲ್ಲಿ ನಡೆದು ಪ್ರಸಾದವೆಂಬ ನಿಧಾನವ ಕಂಡುಕೊಂಡು ಉಂಡು ಪರಿಣಾಮಿಸಿ ಬದುಕಿದೆನಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಪಾತಕ ಹೊಲೆಯೆಂದರಿದು ಬಿಟ್ಟಲ್ಲಿ, ಮತ್ತಾ ಗುಣ ಸ್ವೀಕರಿಸಬಹುದೆ ? ಇವೆಲ್ಲ ಅಲ್ಲಾ ಎಂದು ಬಲ್ಲತನವ ತಾನರಿದು, ಮತ್ತೆಲ್ಲರಲ್ಲಿ ಬೆರಸಬಹುದೆ ? ಒಡೆದ ಹಂಚಿಂಗೆ, ಹಿಡಿದು ಬಿಟ್ಟ ವ್ರತಕ್ಕೆ, ಮತ್ತಿವ ಒಡಗೂಡಬಹುದೆ ? ಇಂತೀ ಬಿಡುಗಡೆಯನರಿದಲ್ಲಿ, ಅನುಸರಣೆಯ ಮಾಡಿದಡೆ, ಎನ್ನೊಡೆಯ ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವಾದಡೂ ಹರಶರಣರಿಗೆ ದೂರ.
--------------
ಶಿವಲೆಂಕ ಮಂಚಣ್ಣ
ಧರೆಯಗಲದ ಹುಲ್ಲೆ ಹರಿದು ಮೇಯಿತ್ತ ಕಂಡೆ. ಬಲೆಯ ಬೀಸುವ ಗಂಡರಾರೂ ಇಲ್ಲ, ಹರಿದು ಹಿಡಿದಹೆನೆಂದಡೆ ತಲೆ ಕಾಣಬರುತ್ತಲಿದೆ. ಶಿರವ ಹಿಡಿದೆಹೆನೆಂಬವರಿನ್ನಾರೂ ಇಲ್ಲ. ಹರಿದಾಡುವ ಹುಲ್ಲೆಯ ಕಂಡು ಹಲವು ಬೇಳಾರ (ಬೆಳ್ಳಾರ?)ವ ಬಿಟ್ಟು, ಬೇಟೆಕಾರ ಬಲೆಯ ಬೀಸಿದಡೆ ಹುಲ್ಲೆಯಂಜಿ ಹೋಯಿತ್ತು. ಮರುಳುದಲೆಯಲ್ಲಿ ಹುಲ್ಲೆಯನೆಸೆದಯಬೇಕೆಂದು ಸರಳ ಬಿಟ್ಟು ಬಾಣವನೊಂದು ಕೈಯಲ್ಲಿ ಹಿಡಿದು (ಹಿಡಿವಡೆ?) ಹಳ್ಳಕೊಳ್ಳವ ದಾಂಟಿ ಗಟ್ಟಬೆಟ್ಟವ ಕಳೆದು ಅತ್ತ ಬಯಲ ಮರನ ತಾ ಮೊರೆಗೊಂಡಿತ್ತು. ಹತ್ತೆ ಸಾರಿದ ಮೃಗವ ತಾನೆಚ್ಚಡೆ ನಾರಿ ಹರಿದು ಬಿಲ್ಲು ಮುರಿದು ಹುಲ್ಲೆ ಸತ್ತಿತ್ತು. ಅದ ಕಿಚ್ಚಿಲ್ಲದ ನಾಡಿಗೊಯ್ದು ಸುಟ್ಟು ಬಾಣಸವ ಮಾಡಲು ಸತ್ತ ಹುಲ್ಲೆ ಕರಗಿ ಶಬ (ಸಬ?) ಉಳಿಯಿತ್ತು. ಗುಹೇಶ್ವರಾ ನಿಮ್ಮ ಶರಣ ಕಟ್ಟಿದಿರ ಬಾಣಸದ ಮನೆಗೆ ಬಂದನು.
--------------
ಅಲ್ಲಮಪ್ರಭುದೇವರು
ಮನಕ್ಕೆ ನಾಚದ ವಚನ, ವಚನಕ್ಕೆ ನಾಚದ ಮನ ! ಕುಂದು-ಹೆಚ್ಚ ನುಡಿವೆ. ಒಂದು ಮಾತಿನ ಗೆಲ್ಲಕ್ಕೆ ಹಿಡಿದು ಹೋರುವೆ, ಕೂಡಲಸಂಗನ ಶರಣರ ಎನ್ನಾಳ್ದರೆಂಬೆ. 256
--------------
ಬಸವಣ್ಣ
ಓಡ ಕುದುರೆಯ ಮೇಲೆ ಮಸಿಯ ಹಲ್ಲಣವ ಹಾಕಿ, ಬಸಲೆಯ ಹಂಬ ಬಾಯಿಗೆ ಕಟ್ಟಿ, ದೆಸೆವರಿವ ಅಸುರಾವುತ ಚೊಲ್ಲೆಹದ ಬಲ್ಲೆಹವ ಹಿಡಿದು, ಮುಗುಳುನಗೆಯವಳಲ್ಲಿ ಏರಿ ತಿವಿದ. ಚೊಲ್ಲೆಹದ ಬಲ್ಲೆಹ ಮುರಿದು, ಓಡಿನ ಕುದುರೆ ಒಡೆದು, ಮಸಿಯ ಹಲ್ಲಣ ನುಗ್ಗುನುಸಿಯಾಗಿ, ಬಸಲೆಯ ಬಾಯಕಟ್ಟು ಹರಿದು, ಅಸುರಾವುತ ಅವಳ ಕಿಸಲೆಯ ರಸಕ್ಕೊಳಗಾದ. ಅದೇತರಿಂದ ಹಾಗಾದನೆಂಬುದ ನೀನರಿ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಪೂರ್ವದಂದುಗವನಳಿದು ಪುನರ್ಜಾತನಾದ ಶರಣನು ತನ್ನ ತ್ರಿವಿಧಮುಖಭಕ್ತಿಯ ಮಾಡುವಲ್ಲಿ ಪೂರ್ವದಂದುಗ ಬೆರಸಿದರೆ ತಿರುಗ ಬಟ್ಟೆ ಸವೆಯದು. ಮೇಲುಗತಿಮತಿಗಳಸುಖ ದೊರೆಯದು. ಬಿಟ್ಟುದ ಬೆರೆಸಿದರೆ, ಹಿಡಿದು ಹರಿಸದೆ ದಾರಿಕಾರರ ಹೆಜ್ಜೆಗೆ ಶಿರಬಾಗದೆ ತಾನಿಲ್ಲದೆ ಮಾಡುವ ಮಾಟ ಸಕಲರ ಸಂಬೇಟ ನಿಜತತ್ವದ ಕೂಟ ಗುರುನಿರಂಜನ ಚನ್ನಬಸವಲಿಂಗ ನಿಮ್ಮಲ್ಲಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಪಡುವ ಕಚ್ಚಿದ ನಾಯಿ ಒಡೆಯನ ಕುರುಹ ಬಲ್ಲುದೆ? ಹೊನ್ನು ಹೆಣ್ಣು ಮಣ್ಣ ಕಚ್ಚಿದ ಮನುಜರು ನಿಮ್ಮನೆತ್ತ ಬಲ್ಲರಯ್ಯ? ನಿಮ್ಮನರಿಯದ ಮನುಜರು ನಾಯಕುನ್ನಿಗಿಂದಲೂ ಕರಕಷ್ಟ ನೋಡಾ ನಿತ್ಯವ ಹಿಡಿಯದೆ, ಅನಿತ್ಯವ ಹಿಡಿದು, ವ್ಯರ್ಥಕ್ಕೆ ಸತ್ತವರ ನೋಡಿ ಹೇಸಿದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಪರಮಸುಖದ ಪರಿಣಾಮದ ಇರವ ಬಲ್ಲವರಾರೊ? ಅದು ದೊರಕೊಳ್ಳದು ನೋಡಾ ! ತನತನಗೆ ತನ್ನ ಇರವ ಲಿಂಗದಲ್ಲಿರಿಸಿ, ಪರವ ಮನದಲ್ಲಿ ಹಿಡಿದು ಇಹ ಪರವೆಂಬುದೊಂದು ಭ್ರಾಂತಳಿದು, ನಿರತಿಶಯ ಸುಖದೊಳಗೆ ನಿಜವಾಗಿರಬಲ್ಲ ನಿಮ್ಮ ಶರಣನನುಪಮಪ್ರಸಾದಿ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ರೂಪಿನ ದರ್ಪಣವ ಹಿಡಿದು, ತನ್ನಯ ರೂಪ ನೋಡಿದಲ್ಲಿ, ನಿಹಿತದ ಇರವಾಯಿತ್ತು. ಆ ರೂಪ ಕಂಡ ನಿರೂಪಿನ ದೃಷ್ಟಿ, ಅದರೊಳಗೆ ಕೂರ್ತು ತೋರುವ ಬೆಳಗಿನ ಮರೆ. ಉಭಯವ ಹಿಡಿದು ನೋಡುವ ಘಟಪಟನ್ಯಾಯ, ಉಪದೃಷ್ಟಭೇದ. ಹಿಡಿದ ಇಷ್ಟಾಚರಣೆ ಕುರುಹಿನ ಲಕ್ಷಣ. ಪಡಿಬ್ಥಿನ್ನ ಭೇದವಿಲ್ಲದೆ ತೋರಿ ತೋರದಿಪ್ಪ ಉಭಯ ಅಂಗವು ನೀನೆ, ಸಗರದ ಬೊಮ್ಮನೊಡೆಯ ತನುಮನ [ಸಂಗ]ಮೇಶ್ವರಲಿಂಗದಲ್ಲಿ ಲೇಪವಾದ ಶರಣಂಗೆ.
--------------
ಸಗರದ ಬೊಮ್ಮಣ್ಣ
ಕಡಿ[ಯೆ] ಕುಳ್ಳಿರಿಸಿದಲ್ಲಿ, ಕತ್ತಿಯನೆತ್ತಿ ಹೊಡೆ[ಯೆ] ಹೊಡೆ[ಯೆ] ಬದುಕಿದವರುಂಟು, ತಲೆಯ ಕಡಲ ನಡುವೆ ಹಡಗೊ[ಡೆ]ದು ಹಲಗೆಯ ಹಿಡಿದು ತಡಿಗೆ ಸೇರಿ ಬದುಕಿದವರುಂಟು, ತಲೆಯ ಎನ್ನೊಡೆಯ ಕೂಡಲಸಂಗಮದೇವ ಬರೆದ ಬರಹವ ತೊಡೆಯಬಲ್ಲರೆ ಹರಿ ಸುರ ಬ್ರಹ್ಮಾದಿಗಳು.
--------------
ಬಸವಣ್ಣ
ನೀರ ನೆಳಲನೆ ಕಡಿದು, ಮೇರುವೆಂಬುದ ನುಂಗಿ, ಶಾರದೆಯೆಂಬವಳ ಬಾಯ ಕಟ್ಟಿ, ಕಾರ ಮೇಘದ ಬೆಳಸ ನೀರ ಹರಿ ನುಂಗಲು ದಾರಿ ಮೃತ್ಯುವ ನುಂಗಿ ನಗುತ್ತಿದ್ದಿತು. ನಾರಿಯ ಬೆನ್ನ ಮೇಲೆ ಗಂಡ ಬಂದು ಕುಳ್ಳಿರಲು, ನೀರ ಹೊಳೆಯವರೆಲ್ಲರ ಕೊಡನೊಡೆದವು. ಕಾರೆಯ ಮುಳ್ಳೆರ್ದು ಕಲಿಗಳನಟ್ಟಿ ಸದೆವಾಗ, ಸೋರುಮುಡಿಯಾಕೆ ಗೊರವನ ನೆರೆದಳು. ಬಳ್ಳು ಆನೆಯ ನುಂಗಿ, ಹೊಳೆ (ಒಳ್ಳೆ ?) ಸಮುದ್ರವ ಕುಡಿದು, ಕುಳ್ಳಿರ್ದ ಶಿಶು ಹಲಬರನೆಯ್ದೆ ನುಂಗಿ, ಅತ್ತೆ ಅಳಿಯನ ಕೂಡಿ ಕೋಡಗವ ಹಡೆದಲ್ಲಿ, ಹತ್ತಿರಿರ್ದ ಹಾವಾಡಿಗನನು ಅದು ನುಂಗಿತ್ತು! ಕಪ್ಪೆ ಸರ್ಪನ ಹಿಡಿದು ಒತ್ತಿ ನುಂಗುವಾಗ, ಕಪ್ಪೆಯ ಕೊರಳಲ್ಲಿ ಬಿಳಿದು ಕೆಂಪಡರಲು, ನಿಶ್ಚಿಂತವಾಯಿತ್ತು ಗುಹೇಶ್ವರನ ಶರಣಂಗೆ, ಕಟ್ಟಿದಿರ ಕರ್ಪುರದ ಜ್ಯೋತಿಯಂತೆ!
--------------
ಅಲ್ಲಮಪ್ರಭುದೇವರು
ಇನ್ನಷ್ಟು ... -->